ಕನ್ನಡಪ್ರಭ ವಾರ್ತೆ ಬೆಳಗಾವಿ ನಗರದ ಕಾಕತಿವೇಸ್‌ನ ಕರ್ನಾಟಕ ಪಬ್ಲಿಕ್ ಶಾಲೆ (ಸರದಾರ ಪ್ರೌಢಶಾಲೆ)ಯ ಮೂಲಸೌಕರ್ಯ ಬಲಪಡಿಸುವ ಜತೆಗೆ ವಿದ್ಯಾರ್ಥಿಗಳಿಗೆ ಆಧುನಿಕ ಹಾಗೂ ಗುಣಮಟ್ಟದ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ರೋಬೋಟಿಕ್ಸ್, ಭಾಷಾ ಹಾಗೂ ವರ್ಚುವಲ್ ಪ್ರಯೋಗಾಲಯಗಳನ್ನು ಶಾಸಕ ಆಸಿಫ್ (ರಾಜು) ಸೇಠ್ ಶನಿವಾರ ಉದ್ಘಾಟಿಸಿದರು
ಕನ್ನಡಪ್ರಭ ವಾರ್ತೆ ಬೆಳಗಾವಿ
ನಗರದ ಕಾಕತಿವೇಸ್‌ನ ಕರ್ನಾಟಕ ಪಬ್ಲಿಕ್ ಶಾಲೆ (ಸರದಾರ ಪ್ರೌಢಶಾಲೆ)ಯ ಮೂಲಸೌಕರ್ಯ ಬಲಪಡಿಸುವ ಜತೆಗೆ ವಿದ್ಯಾರ್ಥಿಗಳಿಗೆ ಆಧುನಿಕ ಹಾಗೂ ಗುಣಮಟ್ಟದ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ರೋಬೋಟಿಕ್ಸ್, ಭಾಷಾ ಹಾಗೂ ವರ್ಚುವಲ್ ಪ್ರಯೋಗಾಲಯಗಳನ್ನು ಶಾಸಕ ಆಸಿಫ್ (ರಾಜು) ಸೇಠ್ ಶನಿವಾರ ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆಯ 2025-26ನೇ ಸಾಲಿನ ಯೋಜನೆಯಡಿ ₹5 ಕೋಟಿ ವೆಚ್ಚದಲ್ಲಿ ನೂತನ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲಾಯಿತು.ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ರಾಜು ಸೇಠ್, ತಾವು ಚುನಾಯಿತರಾದ ಆರಂಭದಲ್ಲಿ ಶಾಲೆಗೆ ಭೇಟಿ ನೀಡಿದಾಗ ವಿದ್ಯಾರ್ಥಿಗಳು ಶೌಚಾಲಯದ ಸಮಸ್ಯೆ ಕುರಿತು ಗಮನ ಸೆಳೆದಿದ್ದರು. ಬಳಿಕ ತಕ್ಷಣ ಶೌಚಾಲಯ ನಿರ್ಮಿಸಿ, ಶಾಲೆಯ ಅಭಿವೃದ್ಧಿಗೆ ನಿರಂತರವಾಗಿ ಗಮನ ಹರಿಸಲಾಗುತ್ತಿದೆ. ವಿದ್ಯಾರ್ಥಿಗಳು ಕಠಿಣ ಪರಿಶ್ರಮದ ಮೂಲಕ ಉತ್ತಮ ಅಂಕ ಗಳಿಸಿ ನಾಡಿಗೆ ಕೀರ್ತಿ ತರಬೇಕು ಎಂದು ಆಶಿಸಿದರು.
ರೋಬೋಟಿಕ್ಸ್, ಭಾಷಾ ಪ್ರಯೋಗಾಲಯ ಹಾಗೂ ಸ್ಮಾರ್ಟ್ ಸೌಲಭ್ಯಗಳು ವಿದ್ಯಾರ್ಥಿಗಳಲ್ಲಿ ತಾಂತ್ರಿಕ ಮತ್ತು ಕೌಶಲಾಧಾರಿತ ಕಲಿಕೆಗೆ ಹೊಸ ಅವಕಾಶ ಕಲ್ಪಿಸಲಿವೆ. ಸರ್ಕಾರಿ ಶಾಲೆಯನ್ನು ಮಾದರಿ ಶಿಕ್ಷಣ ಸಂಸ್ಥೆಯನ್ನಾಗಿ ರೂಪಿಸುವ ಪ್ರಯತ್ನಕ್ಕೆ ಈ ಯೋಜನೆ ಮತ್ತಷ್ಟು ಬಲ ನೀಡಲಿದೆ ಎಂದರು.ಕರ್ನಾಟಕ ಪಬ್ಲಿಕ್ ಶಾಲೆಯ ಸಮಗ್ರ ಅಭಿವೃದ್ಧಿಗೆ ₹8.04 ಕೋಟಿ ವೆಚ್ಚ ಮಾಡಲಾಗುತ್ತಿದೆ. ₹5 ಕೋಟಿ ವೆಚ್ಚದಲ್ಲಿ ನೂತನ ಕೊಠಡಿಗಳ ನಿರ್ಮಾಣವಾಗಲಿದ್ದು, ಉಳಿದ ₹3.04 ಕೋಟಿ ವೆಚ್ಚದಲ್ಲಿ ಸ್ಮಾರ್ಟ್ ಸೌಲಭ್ಯ, ರೋಬೋಟಿಕ್ಸ್, ಭಾಷಾ ಪ್ರಯೋಗಾಲಯ, ವರ್ಕ್‌ಶಾಪ್‌ಗಳ ಉನ್ನತೀಕರಣ ಸೇರಿದಂತೆ ವಿವಿಧ ತಂತ್ರಜ್ಞಾನಾಧಾರಿತ ಶೈಕ್ಷಣಿಕ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದು ಸೇಠ್ ವಿವರಿಸಿದರು.
ಜಿಲ್ಲಾ ಉಸ್ತುವಾರಿ ಸಚಿವರ ಆಪ್ತ ಸಹಾಯಕ ಮಲಗೌಡ ಪಾಟೀಲ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಓದುವ ಮಕ್ಕಳು ಉತ್ತಮ ಶಿಕ್ಷಣ ಪಡೆದು ದೇಶದ ಪ್ರಗತಿಗೆ ಕೊಡುಗೆ ನೀಡಬೇಕು ಎಂಬುದು ಸಚಿವ ಸತೀಶ್ ಜಾರಕಿಹೊಳಿ ಅವರ ಆಶಯವಾಗಿದೆ ಎಂದರು.ಡಿಡಿಪಿಐ ಲೀಲಾವತಿ ಹಿರೇಮಠ ಮಾತನಾಡಿ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಶಾಲಾ ಅಭಿವೃದ್ಧಿಗೆ ₹8 ಕೋಟಿಗೂ ಅಧಿಕ ಅನುದಾನ ಒದಗಿಸಿದ್ದಾರೆ. ಸುಮಾರು 2 ಸಾವಿರ ವಿದ್ಯಾರ್ಥಿಗಳು ಕಲಿಯುತ್ತಿರುವ ಶಾಲೆಯಲ್ಲಿ ಆಧುನಿಕ ಸೌಲಭ್ಯ ಕಲ್ಪಿಸುವ ಮೂಲಕ ಶಿಕ್ಷಣದ ಗುಣಮಟ್ಟ ಹೆಚ್ಚಿಸಲಾಗುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನ ಆಧಾರಿತ ಶಿಕ್ಷಣಕ್ಕೆ ಒತ್ತು ನೀಡಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಪೊಲೀಸ್ ಆಯುಕ್ತ ಭೂಷಣ ಗುಲಾಬರಾವ್ ಬೋರಸೆ, ಉಪ ಮಹಾಪೌರ ಹನುಮಂತ ಕೊಂಗಾಲಿ, ಬಿಇಒ ರವಿ ಭಜಂತ್ರಿ ಸೇರಿದಂತೆ ಶಿಕ್ಷಣ ಮತ್ತು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಹಾಗೂ ಪಾಲಕರು ಉಪಸ್ಥಿತರಿದ್ದರು.