ಗ್ಯಾರಂಟಿ ಯೋಜನೆಯಿಂದ ಆರ್ಥಿಕ ಬದಲಾವಣೆ: ಸಚಿವ ಶಿವಾನಂದ ಪಾಟೀಲ

| Published : Sep 11 2025, 12:03 AM IST

ಗ್ಯಾರಂಟಿ ಯೋಜನೆಯಿಂದ ಆರ್ಥಿಕ ಬದಲಾವಣೆ: ಸಚಿವ ಶಿವಾನಂದ ಪಾಟೀಲ
Share this Article
  • FB
  • TW
  • Linkdin
  • Email

ಸಾರಾಂಶ

ಸರ್ಕಾರ ಜಾರಿಗೆ ತಂದ ಪಂಚ ಗ್ಯಾರಂಟಿ ಯೋಜನೆಗಳಿಂದ ತಾಯಂದಿರಿಗೆ ಆತ್ಮಬಲ ಬಂದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ತಿಳಿಸಿದರು.

ಹಾವೇರಿ: ಗ್ಯಾರಂಟಿ ಯೋಜನೆಯಿಂದ ಆರ್ಥಿಕ ಬದಲಾವಣೆಯಾಗಿದೆ. ಜನಸಾಮಾನ್ಯರ ಆದಾಯ ಒಂದು ಲಕ್ಷದಿಂದ ಎರಡು ಲಕ್ಷ ವರೆಗೆ ಹೆಚ್ಚಾಗಿದೆ. ಗ್ಯಾರಂಟಿ ಯೋಜನೆಗಳು ಸದುಪಯೋಗವಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಹೇಳಿದರು.

ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಬುಧವಾರ ಜಿಲ್ಲಾಡಳಿತ ಹಾಗೂ ಜಿಪಂ ಸಹಯೋಗದಲ್ಲಿ ಏರ್ಪಡಿಸಿದ್ದ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತು ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ಸರ್ಕಾರ ಜಾರಿಗೆ ತಂದ ಪಂಚ ಗ್ಯಾರಂಟಿ ಯೋಜನೆಗಳಿಂದ ತಾಯಂದಿರಿಗೆ ಆತ್ಮಬಲ ಬಂದಿದೆ. ಉತ್ತರ ಕರ್ನಾಟಕದ ಗ್ರಾಮೀಣ ಪ್ರದೇಶದ ಹೆಣ್ಣು ಮಕ್ಕಳು ಇಂದು ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದಾರೆ. ಸ್ವಾತಂತ್ರ್ಯ ಬಂದು 75 ವರ್ಷಗಳಾದರೂ ಗ್ಯಾರಂಟಿ ಯೋಜನೆ ಜಾರಿಗೆ ಬಂದ ಎರಡು ವರ್ಷದಲ್ಲಿ ಸಾಕಷ್ಟು ಬದಲಾವಣೆಯಾಗಿದೆ ಎಂದರು.

ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ. ರೇವಣ್ಣ ಮಾತನಾಡಿ, ಡಿ. ದೇವರಾಜ ಅರಸು ಅವರಿಂದ ಹಿಡಿದು ಈ ವರೆಗ ಕಾಂಗ್ರೆಸ್ ಸರ್ಕಾರ ಜನಪರ ಯೋಜನೆಗಳನ್ನು ಹಾಗೂ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಗ್ಯಾರಂಟಿ ಯೋಜನೆಗಳಿಂದ ಸಮಾಜದ ಕಟ್ಟಕಡೆಯ ವ್ಯಕ್ತಿಯು ಘನತೆ-ಗೌರವದಿಂದ ಬದುಕುವಂತಾಗಿದೆ ಹಾಗೂ ಆರ್ಥಿಕ ಸ್ಥಿತಿ ಸುಧಾರಿಸಿದೆ. ಇವು ಬಿಟ್ಟಿ ಭಾಗ್ಯವಲ್ಲ, ಈ ಯೋಜನೆಗಳಿಂದ ಬಡ ಕುಟುಂಬಗಳು ಬದುಕು ಕಟ್ಟಿಕೊಂಡಿವೆ. ಗ್ಯಾರಂಟಿ ಯೋಜನೆಗಳ ಕುರಿತು ಜನರಿಂದ ಜನರಿಗೆ ತಿಳಿಸುವ ಕೆಲಸವಾಗಬೇಕು ಎಂದರು.

ಶಾಸಕರಾದ ಶ್ರೀನಿವಾಸ ಮಾನೆ, ಯು.ಬಿ. ಬಣಕಾರ ಮಾತನಾಡಿ, ಗ್ಯಾರಂಟಿ ಯೋಜನೆಗಳು ಸಾಮಾನ್ಯ ಜನರಲ್ಲಿ ಉತ್ಸಾಹ ಹಾಗೂ ಖುಷಿ ತರುವ ಯೋಜನೆಗಳಾಗಿವೆ. ಬಡ ಕುಟುಂಬಗಳಿಗೆ ಆರ್ಥಿಕ ಶಕ್ತಿ ಬಂದಿದೆ. ಇದರಿಂದ ಕುಟುಂಬದ ನಿರ್ವಹಣೆಗೆ ಅನುಕೂಲವಾಗುತ್ತಿದೆ. ಸಮಾಜದಲ್ಲಿ ಸಮಾನತೆ, ಸಹಬಾಳ್ವೆ, ಸೌಹಾರ್ದತೆ ಕಾಪಾಡಲು ಎಲ್ಲರೂ ನಮ್ಮ ಜತೆ ಕೈಜೋಡಿಸಬೇಕು ಎಂದು ಹೇಳಿದರು.

ಶಾಸಕ, ವಿಧಾನಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕರ್ನಾಟಕ ಜಾಗೃತಿ ಸಮಿತಿಯ ಡಾ. ವಾಸು ಎಚ್. ಅವರು ಗ್ಯಾರಂಟಿ ಯೋಜನೆಯಿಂದ ರಾಜ್ಯದಲ್ಲಿ ಆರ್ಥಿಕ ಸುಧಾರಣೆ ಕುರಿತು ಉಪನ್ಯಾಸ ನೀಡಿದರು. ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಎಂ.ಎಂ. ಹಿರೇಮಠ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಶಾಸಕ ಯಾಸೀರ ಅಹ್ಮದಖಾನ್ ಪಠಾಣ, ಕರ್ನಾಟಕ ಗಡಿ ಪ್ರದೇಶದ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಫ್.ಎನ್. ಗಾಜಿಗೌಡ್ರ, ಹಾವೇರಿ ಹಾಲು ಒಕ್ಕೂಟದ ಅಧ್ಯಕ್ಷ ಮಂಜನಗೌಡ ಪಾಟೀಲ, ಎಂ.ಎಂ. ಮೈದೂರ, ವಿಜಯಕುಮಾರ ದೊಡ್ಡಮನಿ, ಶಂಭನಗೌಡ ಪಾಟೀಲ, ಮಲ್ಲಿಕಾರ್ಜುನ ಬುರಡಿಕಟ್ಟಿ, ನಾರಾಯಣಪ್ಪ ಗೌರಕ್ಕನವರ, ಶೇಖಪ್ಪ ಮಣಕಟ್ಟಿ, ಸುಭಾಸ ಮಜ್ಜಗಿ, ಸಂಜೀವಕುಮಾರ ನೀರಲಗಿ, ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ, ಜಿಪಂ ಸಿಇಒ ರುಚಿ ಬಿಂದಲ್, ಎಸ್‌ಪಿ ಯಶೋದಾ ವಂಟಗೋಡಿ, ಕೆಸಿಸಿ ಬ್ಯಾಂಕ್ ನಿರ್ದೇಶಕ ಕೊಟ್ರೇಶಪ್ಪ ಬಸೇಗಣ್ಣಿ ಇತರರು ಇದ್ದರು.

ಜಿಪಂ ಉಪ ಕಾರ್ಯದರ್ಶಿ ಪುನೀತ ಸ್ವಾಗತಿಸಿದರು. ಶಿಕ್ಷಕ ನಾಗರಾಜ ನಡುವಿನಮಠ ಕಾರ್ಯಕ್ರಮ ನಿರೂಪಿಸಿದರು.