ಕೊಪ್ಪಳ ನಗರದ ಜಿಲ್ಲಾ ಸಹಕಾರ ಯೂನಿಯನ್ ಸಭಾಂಗಣದಲ್ಲಿ ಶನಿವಾರ 73ನೇ ಅಖಿಲ ಭಾರತ ಸಹಕಾರ ಸಪ್ತಾಹದ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ಕೊಪ್ಪಳ: ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕಾದರೆ ಸಹಕಾರ ಕ್ಷೇತ್ರದಿಂದ ಮಾತ್ರ ಸಾಧ್ಯ. ದೇಶದ ಬಡವರು ಹಾಗೂ ಆರ್ಥಿಕವಾಗಿ ಹಿಂದುಳಿದವರನ್ನು ಮುಖ್ಯವಾಹಿನಿಗೆ ತಂದು ಸ್ವಾವಲಂಬಿಗಳನ್ನಾಗಿಸುವಲ್ಲಿ ಸಹಕಾರ ಕ್ಷೇತ್ರ ಮಹತ್ವದ ಪಾತ್ರ ವಹಿಸುತ್ತದೆ ಎಂದು ಕೊಪ್ಪಳ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಶೇಖರಗೌಡ ಮಾಲಿ ಪಾಟೀಲ್ ಹೇಳಿದರು.

ನಗರದ ಜಿಲ್ಲಾ ಸಹಕಾರ ಯೂನಿಯನ್ ಸಭಾಂಗಣದಲ್ಲಿ ಶನಿವಾರ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಬೆಂಗಳೂರು, ಕೊಪ್ಪಳ ಜಿಲ್ಲಾ ಸಹಕಾರ ಯೂನಿಯನ್, ತಾಲೂಕು ಮಟ್ಟದ ಎಲ್ಲ ಸಹಕಾರ ಸಂಘಗಳು ಹಾಗೂ ಸಹಕಾರ ಇಲಾಖೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ 73ನೇ ಅಖಿಲ ಭಾರತ ಸಹಕಾರ ಸಪ್ತಾಹದ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರು ಬಡವರು ಮತ್ತು ಆರ್ಥಿಕವಾಗಿ ಹಿಂದುಳಿದವರ ಅಭಿವೃದ್ಧಿಗೆ ಸಹಕಾರ ಕ್ಷೇತ್ರವೇ ಪರಿಣಾಮಕಾರಿ ಮಾರ್ಗ ಎಂಬ ದೂರದೃಷ್ಟಿ ಹೊಂದಿದ್ದರು. ಅವರ ಆಶಯ ಸಾಕಾರಗೊಳ್ಳಬೇಕಾದರೆ ಸಹಕಾರ ಸಂಘಗಳು ಇನ್ನಷ್ಟು ಬಲಿಷ್ಠವಾಗಬೇಕು. ಈ ನಿಟ್ಟಿನಲ್ಲಿ ಸಹಕಾರ ಕ್ಷೇತ್ರವನ್ನು ಬಲಪಡಿಸುವ ಜತೆಗೆ ಸಂಘಗಳ ಕಾರ್ಯಚಟುವಟಿಕೆಯನ್ನೂ ವಿಸ್ತರಿಸಬೇಕು ಎಂದು ಹೇಳಿದರು.

73ನೇ ಸಹಕಾರ ಸಪ್ತಾಹದ ಆಶಯವಾದ ''ಸಹಕಾರ ಸಂಸ್ಥೆಗಳ ಬೆಳವಣಿಗೆಯಲ್ಲಿ ಉತ್ತಮ ಪರಿಸರ, ತಂತ್ರಜ್ಞಾನ, ಕೌಶಲ್ಯಾಧಾರಿತ ವೃತ್ತಿಪರ ಸೇವೆ'' ಹಾಗೂ ''ಸುಸ್ಥಿರ ಅಭಿವೃದ್ಧಿ ಮತ್ತು ಬೆಳವಣಿಗೆಯಲ್ಲಿ ಸಹಕಾರ ಸಂಸ್ಥೆಗಳ ಪಾತ್ರ'' ಕುರಿತು ಕಾರ್ಯಕ್ರಮದಲ್ಲಿ ಚರ್ಚಿಸಲಾಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಹಕಾರ ಸಂಘಗಳ ಸಹಾಯಕ ನಿಬಂಧಕ ಮಲ್ಲಯ್ಯ, ಸಹಕಾರ ಸಂಘಗಳ ಮೂಲಕ ಸರ್ಕಾರದ ವಿವಿಧ ಸೌಲಭ್ಯ ಹಾಗೂ ಸೇವೆಗಳನ್ನು ಜನರಿಗೆ ತಲುಪಿಸುವಲ್ಲಿ ಸಹಕಾರ ಕ್ಷೇತ್ರದ ಪ್ರತಿಯೊಬ್ಬರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದರು.

ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ತೊಟ್ಟಪ್ಪ ಕಮನೂರು ಅವರು ಸಹಕಾರ ಸಪ್ತಾಹದ ಉದ್ದೇಶ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದ ಅತಿಥಿಗಳಾಗಿ ಕಾಸ್ಕಾರ್ಡ್ ಬ್ಯಾಂಕ್‌ನ ಜಿಲ್ಲಾ ವ್ಯವಸ್ಥಾಪಕ ಬಸನಗೌಡ ಪಾಟೀಲ್ ಹಾಗೂ ಗಂಗಾ-ಯಮುನಾ ಸೌಹಾರ್ದ ಸಹಕಾರಿಯ ಶಶಿಕುಮಾರ ಗಡ್ಡಿ ಮಾತನಾಡಿದರು.

ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಇಲಾಖೆಯ ಸಹಾಯಕ ನಿರ್ದೇಶಕ ಶರಣಬಸವ ನಾಯಕ, ಸಹಕಾರ ಅಭಿವೃದ್ಧಿ ಅಧಿಕಾರಿ ಯಲ್ಲಪ್ಪ, ಯಲಬುರ್ಗಾ ಸಹಕಾರ ಅಭಿವೃದ್ಧಿ ಅಧಿಕಾರಿಗಳಾದ ದುರ್ಗಪ್ಪ ತಿಪ್ಪನಾಳ ಹಾಗೂ ಜಿಲ್ಲಾ ಸಹಕಾರ ಯೂನಿಯನ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಕ್ಷಯಕುಮಾರ ಉಪಸ್ಥಿತರಿದ್ದರು.

ಕೊಪ್ಪಳ ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ ಡಾ. ಸೀತಾ ಪಾಟೀಲ್ ಸಹಕಾರ ಸಪ್ತಾಹದ ಆಶಯ ಕುರಿತು ಉಪನ್ಯಾಸ ನೀಡಿದರು. ರಾಜಮ್ಮ ಪ್ರಾರ್ಥಿಸಿದರು. ಅಕ್ಷಯಕುಮಾರ ಸ್ವಾಗತಿಸಿದರು. ರಾಜಶೇಖರ ಎಂ. ಹೊಸಮನಿ ಕಾರ್ಯಕ್ರಮ ನಿರೂಪಿಸಿದರು. ದುರ್ಗಪ್ಪ ತಿಪ್ಪನಾಳ ವಂದಿಸಿದರು.