ಸಾರಾಂಶ
ಸಹಕಾರಿ ಸಂಘಗಳು ಬಡವರ ಆರ್ಥಿಕ ಬೆಳವಣಿಗೆಗೆ ಸಹಾಯ ಮಾಡುತ್ತವೆ ಎಂದು ನಿವೃತ್ತ ಸಹಾಯಕ ನಿಬಂಧಕ ರಾಮಕೃಷ್ಣ ತಿಳಿಸಿದರು. ದೊಡ್ಡಬಳ್ಳಾಪುರದಲ್ಲಿ ಭಾಗ್ಯವಿಧಾತ ಕ್ರೆಡಿಟ್ ಸೌಹಾರ್ದ ಸಹಕಾರಿಯ ಎರಡನೇ ವರ್ಷದ ಸರ್ವ ಸದಸ್ಯರ ವಾರ್ಷಿಕ ಸಭೆಯಲ್ಲಿ ಮಾತನಾಡಿದರು.
ಕನ್ನಡಪ್ರಭ ವಾರ್ತೆ ದೊಡ್ಡಬಳ್ಳಾಪುರ
ಸಹಕಾರಿ ಸಂಘಗಳು ಬಡವರ ಆರ್ಥಿಕ ಬೆಳವಣಿಗೆಗೆ ಸಹಾಯ ಮಾಡುತ್ತವೆ ಎಂದು ನಿವೃತ್ತ ಸಹಾಯಕ ನಿಬಂಧಕ ರಾಮಕೃಷ್ಣ ತಿಳಿಸಿದರು.ಇಲ್ಲಿನ ಕನ್ನಡ ಜಾಗೃತ ಭವನದಲ್ಲಿ ನಡೆದ ಭಾಗ್ಯವಿಧಾತ ಕ್ರೆಡಿಟ್ ಸೌಹಾರ್ದ ಸಹಕಾರಿಯ ಎರಡನೇ ವರ್ಷದ ಸರ್ವ ಸದಸ್ಯರ ವಾರ್ಷಿಕ ಸಭೆಯಲ್ಲಿ ಮಾತನಾಡಿದರು.
ಸಹಕಾರ ಸಂಘಗಳಲ್ಲಿ ಹೆಚ್ಚು ಪ್ರಾಮಾಣಿಕತೆ ಅವಶ್ಯ ಇರುತ್ತದೆ. ಕಾಲ ಕಾಲಕ್ಕೆ ಸಾಲ ಕೊಡುವುದು ಮತ್ತು ವಸೂಲಿ ಮಾಡುವುದು ಅವಶ್ಯಕ. ಎಲ್ಲಿಯೂ ಹಣ ಸೋರಿಕೆಯಾಗದೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.ವೈದ್ಯಾಧಿಕಾರಿ ಡಾ.ಪರಮೇಶ್ವರ್ ಮಾತನಾಡಿ, ದೇಶದಲ್ಲಿ ಶೇ.65ರಷ್ಟು ಗ್ರಾಮೀಣ ಜನತೆ ಇನ್ನೂ ಕಡುಬಡತನದಲ್ಲಿ ವಾಸ ಮಾಡುತ್ತಿದ್ದಾರೆ. ಅವರಿಗೆ ಸಂಘ ಸಂಸ್ಥೆಗಳು ನೆರವು ನೀಡುವುದರ ಮೂಲಕ ಸರ್ಕಾರಿ ಸೌಲಭ್ಯಗಳನ್ನು ತಲುಪುವಂತೆ ಮಾಡಬೇಕು ಎಂದರು.
ತೋಟಗಾರಿಕೆ ಸಹಾಯಕ ಅಧಿಕಾರಿ ಮುನಿಚಲುವಯ್ಯ ಮಾತನಾಡಿ, ತೋಟಗಾರಿಕೆ ಇಲಾಖೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಸಾಕಷ್ಟು ಸೌಲಭ್ಯಗಳಿವೆ, ಅವುಗಳನ್ನು ಬಳಸಿಕೊಳ್ಳಬೇಕು ಎಂದರು.ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಆರ್. ನಾರಾಯಣಸ್ವಾಮಿ ಮಾತನಾಡಿ, ಸಂವಿಧಾನದ ಆಶಯದಂತೆ ಪ್ರತಿಯೊಂದು ವರ್ಗವೂ ಶೈಕ್ಷಣಿಕ, ಆರ್ಥಿಕ, ಸಾಮಾಜಿಕವಾಗಿ ಮುಂದು ಬಂದಾಗ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದರು.
ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ನಗದು ಬಹುಮಾನ ನೀಡಲಾಯಿತು.