ಸಾರಾಂಶ
ಮುಡಾ ಪ್ರಕರಣದಲ್ಲಿ ಇ.ಡಿ. ಎಂಟ್ರಿಯಾಗಿರುವ ಕಾರಣ ಸತ್ಯಾಂಶ ಶೀಘ್ರ ಹೊರಬರಲಿದೆ ಎಂದು ಸಂಸದ ಬ್ರಿಜೇಶ್ ಚೌಟ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಮಂಗಳೂರು
ಮೈಸೂರಿನ ಮುಡಾ ಕಚೇರಿ ಮೇಲೆ ಜಾರಿ ನಿರ್ದೇಶನಾಲಯ(ಇಡಿ) ನಡೆಸಿರುವ ದಾಳಿಯಿಂದ ಕಾಂಗ್ರೆಸ್ ನೇತೃತ್ವದ ರಾಜ್ಯದ ಭ್ರಷ್ಟ ಸರ್ಕಾರದ ನಿಜ ಬಣ್ಣ ಬಯಲಾಗಿದ್ದು, ಈ ಲೂಟಿಕೋರ ಸಿದ್ದರಾಮಯ್ಯನವರ ಸರ್ಕಾರವನ್ನು ಕಟಕಟೆಗೆ ತಂದು ನಿಲ್ಲಿಸುವ ಕಾಲ ಹತ್ತಿರವಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ. ಮುಡಾ ಭೂಹಗರಣಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಹಲವೆಡೆ ಇಡಿ ನಡೆಸಿರುವ ದಾಳಿ ಬಗ್ಗೆ ಶನಿವಾರ ಪ್ರತಿಕ್ರಿಯಿಸಿರುವ ಸಂಸದರು, ಮುಡಾ ನಿವೇಶನ ಹಂಚಿಕೆ ಭೂಹಗರಣ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯ ಸರ್ಕಾರದ ಅಧೀನದಲ್ಲಿರುವ ಯಾವುದೇ ತನಿಖಾ ಸಂಸ್ಥೆಯು ಸರ್ಕಾರದ ಕೈಗೊಂಬೆಯಾಗಿ ಕೆಲಸ ಮಾಡುತ್ತಿದೆ. ಆ ಮೂಲಕ ತನ್ನ ಉತ್ತರದಾಯಿತ್ವವನ್ನು ಮರೆಮಾಚಿ ರಾಜ್ಯದ ಜನತೆಯನ್ನು ಹೇಗೆ ದಾರಿ ತಪ್ಪಿಸುತ್ತಿದೆ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಆದರೆ ಇದೀಗ ಈ ಪ್ರಕರಣದಲ್ಲಿ ಇ.ಡಿ. ಎಂಟ್ರಿಯಾಗಿರುವ ಕಾರಣ ಸತ್ಯಾಂಶ ಶೀಘ್ರ ಹೊರಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.