ಸಾರಾಂಶ
ಗೃಹ ಮಂತ್ರಿ ಡಾ.ಜಿ.ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಕೇಂದ್ರ ಜಾರಿ ನಿರ್ದೇಶನಾಲಯ(ಇ.ಡಿ) ಸಂಸ್ಥೆ ಅಧಿಕಾರಿಗಳು ನಡೆಸಿರುವ ದಾಳಿ ಖಂಡಿಸಿ ರಾಜ್ಯ ಶೋಷಿತ ಸಮುದಾಯಗಳ ವೇದಿಕೆ ಪ್ರತಿಭಟನೆ ನಡೆಸಿತು.
ಕೆ.ಎಂ.ದೊಡ್ಡಿ : ಗೃಹ ಮಂತ್ರಿ ಡಾ.ಜಿ.ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಕೇಂದ್ರ ಜಾರಿ ನಿರ್ದೇಶನಾಲಯ(ಇ.ಡಿ) ಸಂಸ್ಥೆ ಅಧಿಕಾರಿಗಳು ನಡೆಸಿರುವ ದಾಳಿ ಖಂಡಿಸಿ ರಾಜ್ಯ ಶೋಷಿತ ಸಮುದಾಯಗಳ ವೇದಿಕೆ ಪ್ರತಿಭಟನೆ ನಡೆಸಿತು.
ಕೆ.ಎಂ.ದೊಡ್ಡಿಯ ಮದ್ದೂರು-ಮಳವಳ್ಳಿ ಮುಖ್ಯ ರಸ್ತೆಯ ಸರ್.ಎಂ.ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗದಲ್ಲಿ ವೇದಿಕೆ ರಾಜ್ಯಾಧ್ಯಕ್ಷ ಸುರೇಶ್ ಕಂಠಿ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ರಸ್ತೆತಡೆ ನಡೆಸಿ ಕೇಂದ್ರ ಸರಕಾರ, ಇ.ಡಿ ಸಂಸ್ಥೆ ವಿರುದ್ಧ ಧಿಕ್ಕಾರ ಕೂಗಿದರು.
ಈ ವೇಳೆ ಸುರೇಶ್ ಕಂಠಿ ಮಾತನಾಡಿ, ಗೃಹ ಸಚಿವ ಡಾ.ಜಿ.ಪರಮೇಶ್ವರ್ ದಲಿತ ಸಮುದಾಯದ ಪ್ರಭಾವಿ ರಾಜಕಾರಣಿ. ರಾಜ್ಯದ ಮುಖ್ಯಮಂತ್ರಿಯಾಗುವ ಅವಕಾಶವಿರುವ ಹಿನ್ನೆಲೆಯಲ್ಲಿ ಅವರ ರಾಜಕೀಯ ಏಳಿಗೆ ಸಹಿಸದೆ ರಾಜಕೀಯವಾಗಿ ಅವರ ಹೆಸರಿಗೆ ಕಳಂಕ ತರುವ ದುರುದ್ದೇಶದಿಂದ ಕೇಂದ್ರ ಬಿಜೆಪಿ ಸರ್ಕಾರ ಶಿಕ್ಷಣ ಸಂಸ್ಥೆಗಳ ಮೇಲೆ ರಾಜಕೀಯ ಪ್ರೇರಿತ ದಾಳಿ ನಡೆಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಡಾ.ಜಿ.ಪರಮೇಶ್ವರ್ ಅವರ ತಂದೆ ಶಿಕ್ಷಣ ಭೀಷ್ಮ ಎಚ್.ಎಂ.ಗಂಗಾಧರಯ್ಯ ಅವರು ತುಮಕೂರಿನಲ್ಲಿ ಸಿದ್ಧಾರ್ಥ ಸಂಸ್ಥೆಯನ್ನು ಕಟ್ಟಿ ಸಾವಿರಾರು ಬಡ ವಿದ್ಯಾರ್ಥಿಗಳಿಗೆ ಉಚಿತವಾಗಿ ಶಿಕ್ಷಣ ನೀಡಿ ದಾರಿ ದೀಪವಾಗಿದ್ದಾರೆ. ತಂದೆಯ ಆದರ್ಶಗಳನ್ನು ಮೈಗೂಡಿಸಿಕೊಂಡು ಶಿಕ್ಷಣ ಸಂಸ್ಥೆಗಳನ್ನು ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿರುವ ಪರಮೇಶ್ವರ್ ಅವರನ್ನು ರಾಜಕೀಯವಾಗಿ ದುರ್ಬಲಗೊಳಿಸಲು ಕೇಂದ್ರ ಸರ್ಕಾರ ಸಂಚು ರೂಪಿಸಿದೆ ಎಂದು ದೂರಿದರು.
ರಾಜ್ಯಾದ್ಯಂತ ದಲಿತ ಸಮುದಾಯದ ಶೋಷಿತ ಸಮುದಾಯಗಳ ಹಿತಕಾಯ್ದು ಅವರ ಪರ ಆಡಳಿತ ನಡೆಸುತ್ತಿರುವ ಪರಮೇಶ್ವರ ಅವರಿಗೆ ಸಿಎಂ ಹುದ್ದೆ ತಪ್ಪಿಸಲು ಕೇಂದ್ರ ಬಿಜೆಪಿ ಸರ್ಕಾರ ನಟಿ ರನ್ಯಾರಾವ್ ಕೇಸನಲ್ಲಿ ಸಿಲುಕಿಸುವ ಹುನ್ನಾರ ನಡೆಸುತ್ತಿದೆ ಎಂದು ಆರೋಪಿಸಿರು.
ದಲಿತ ಮುಖಂಡ ಕೆ.ಕಬ್ಬಾಳಯ್ಯ ಮಾತನಾಡಿ, ರಾಜ್ಯದ ಪ್ರಭಾವಿ ದಲಿತ ನಾಯಕ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರ ಶಿಕ್ಷಣ ಸಂಸ್ಥೆಗಳ ಮೇಲೆ ದುರುದ್ದೇಶದಿಂದ ದಾಳಿ ನಡೆಸಿ ಜನಪ್ರಿಯತೆ ಕುಗ್ಗಿಸಲು ಇ.ಡಿ ಸಂಸ್ಥೆಯನ್ನು ಕೇಂದ್ರ ಸರ್ಕಾರ ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದರು.
ಕೂಡಲೇ ಕೇಂದ್ರ ಸರ್ಕಾರ ಮಧ್ಯಪ್ರವೇಶ ನಡೆಸಿ ಒಬ್ಬ ದಲಿತ ನಾಯಕ ಹಿತ ಕಾಯಬೇಕು. ಇಲ್ಲವಾದರೆ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಶೋಷಿತ ಸಮುದಾಯದ ತಾಲೂಕು ಅಧ್ಯಕ್ಷ ಕರಡಕೆರೆ ಯೋಗೇಶ್, ಭಾರತಿನಗರ ಎಸ್ಸಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಮೀನ್ ಶಿವಲಿಂಗಯ್ಯ, ಮುಖಂಡರಾದ ಮುಡೀನಹಳ್ಳಿ ತಿಮ್ಮಯ್ಯ ಕೆ.ಕೆ. ಹಳ್ಳಿ ಮರಿಸ್ವಾಮಿ, ರುದ್ರಯ್ಯ, ಪರಮೇಶ್, ಓಂಪ್ರಕಾಶ್, ಟಿ.ಬಿ.ಹಳ್ಳಿ ಸಂತೋಷ್, ಕ್ಯಾತಘಟ್ಟ ಸುನೀಲ್, ಬೊಪ್ಪಸಮುದ್ರ ಅನಿಲ್ ಕುಮಾರ್, ಅಣ್ಣೂರು ನಿರಂಜನ್, ಕೆ.ಕೆ.ಹಳ್ಳಿ ಅಪ್ಪು ಸೇರಿದಂತೆ ಹಲವರು ಭಾಗವಹಿಸಿದರು.