ಸಾರಾಂಶ
ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಲೋಕೇಶ್ ಬೆಂಗಳೂರಿಗೆ ವರ್ಗಾವಣೆ ಆಗಿರುವ ಕಾರಣ ಅವರನ್ನು ಸನ್ಮಾನಿಸಲಾಯಿತು.
ಕನ್ನಡಪ್ರಭ ವಾರ್ತೆ ಮಂಗಳೂರು
ಸಾಕ್ಷರರು ತಮ್ಮಲ್ಲಿರುವ ಜ್ಞಾನ- ವಿದ್ಯೆಯನ್ನು ಅನಕ್ಷರಸ್ಥರಿಗೆ ನೀಡಿದಾಗ ಸಂಪೂರ್ಣ ಸಾಕ್ಷರತಾ ಜಿಲ್ಲೆಯಾಗಿ ರೂಪುಗೊಳ್ಳಲು ಸಾಧ್ಯ ಎಂದು ಗೇರು ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಹೇಳಿದ್ದಾರೆ.ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ, ಲೋಕ ಶಿಕ್ಷಣ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾ ಪಂಚಾಯ್ತಿ, ಜಿಲ್ಲಾ ಸಾಕ್ಷರತಾ ಸಮಿತಿ, ತಾಪಂ ಬಂಟ್ವಾಳ ಹಾಗೂ ಜನ ಶಿಕ್ಷಣ ಟ್ರಸ್ಟ್ ನವ ಸಾಕ್ಷರರ ಗ್ರಾಮ ವಿಕಾಸ ಕೇಂದ್ರಗಳ ಸಹಭಾಗಿತ್ವದಲ್ಲಿ ನಗರದ ಅಂಬೇಡ್ಕರ್ ಭವನದಲ್ಲಿ ಮಂಗಳವಾರ ನಡೆದ ವಿಶ್ವ ಸಾಕ್ಷರತಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಮಾತನಾಡಿ, ಸಮಾಜದಲ್ಲಿ ತಮ್ಮ ಹಕ್ಕನ್ನು ಪಡೆಯಲು, ಸ್ವಾವಲಂಬಿ ಜೀವನ ನಡೆಸಲು ಶಿಕ್ಷಣ ಮುಖ್ಯವಾದದ್ದು ಎಂದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ ಮಾತನಾಡಿ, ಸರ್ಕಾರವು ಸರ್ವ ಶಿಕ್ಷಣ ಅಭಿಯಾನ ಕಾರ್ಯಕ್ರಮ ಆರಂಭಿಸಿದಾಗಿನಿಂದ ಇಂದಿನವರೆಗೆ ಸಾಕ್ಷರತಾ ಪ್ರಮಾಣವನ್ನು ಹೆಚ್ಚಿಸಲು ತಮ್ಮ ಜೀವನವನ್ನೇ ಮೂಡಿಪಾಗಿಟ್ಟ ಅನೇಕರ ಬಗ್ಗೆ ಸ್ಮರಿಸಿದರು.
ಈ ಸಂದರ್ಭ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಲೋಕೇಶ್ ಬೆಂಗಳೂರಿಗೆ ವರ್ಗಾವಣೆ ಆಗಿರುವ ಕಾರಣ ಅವರನ್ನು ಸನ್ಮಾನಿಸಲಾಯಿತು.