ಸಾರಾಂಶ
ಕನ್ನಡಪ್ರಭ ವಾರ್ತೆ ಮಂಡ್ಯ
ಹೆಣ್ಣು ಭ್ರೂಣ ಹತ್ಯೆ, ಲೈಂಗಿಕ ದೌರ್ಜನ್ಯ, ಬಾಲ್ಯ ವಿವಾಹ ಮುಂತಾದ ಸಾಮಾಜಿಕ ಪಿಡುಗುಗಳನ್ನು ತೊಡೆದುಹಾಕಲು ಶಿಕ್ಷಣ ಅವಶ್ಯಕ ಎಂದು ರಾಜ್ಯ ಉಚ್ಛ ನ್ಯಾಯಾಲಯದ ಹಿರಿಯ ನ್ಯಾಯಾಧೀಶ ಕೆ.ಸೋಮಶೇಖರ್ ತಿಳಿಸಿದರು.ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ಹೆಣ್ಣು ಭ್ರೂಣ ಪತ್ತೆ ಮತ್ತು ಹತ್ಯೆ ನಿಷೇಧ, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಬಾಲ ನ್ಯಾಯ ಕಾಯ್ದೆ, ಲೈಂಗಿಕ ದೌರ್ಜನ್ಯದಿಂದ ಮಕ್ಕಳನ್ನು ಸಂರಕ್ಷಿಸುವ ಕಾಯ್ದೆ ಕುರಿತ ಜಿಲ್ಲಾ ಮಟ್ಟದ ಬೃಹತ್ ತರಬೇತಿ ಕಾರ್ಯಾಗಾರ ಹಾಗೂ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಯಾವ ವ್ಯಕ್ತಿಯೂ ಸಹ ಹುಟ್ಟಿನಿಂದ ಆರೋಪಿಯಾಗಿರುವುದಿಲ್ಲ. ಕಾನೂನಿನ ಅರಿವು ಇಲ್ಲದವರು ಮಾತ್ರ ತಪ್ಪನ್ನು ಎಸಗಲು ಸಾಧ್ಯ. ಕಾನೂನನ್ನು ಅರ್ಥ ಮಾಡಿಕೊಂಡು ಜ್ಞಾನವನ್ನು ಹರಿತಗೊಳಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.ಪ್ರಸವಪೂರ್ವ ಲಿಂಗಪತ್ತೆ, ಸ್ಕ್ಯಾನಿಂಗ್ ಮಾಡಿ ಲಿಂಗ ಪತ್ತೆ ಹಚ್ಚುವುದನ್ನು ನಿಷೇಧಿಸಲಾಗಿದೆ. ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧವಾಗಿದ್ದು, ೨೧ ವರ್ಷದೊಳಗಿನ ಹುಡುಗ ಹಾಗೂ ೧೮ ವರ್ಷದೊಳಗಿನ ಹುಡುಗಿಗೆ ಮದುವೆ ಮಾಡುವುದರಲ್ಲಿ ಭಾಗಿಯಾಗುವ ಪ್ರತಿಯೊಬ್ಬರಿಗೂ ಕಾನೂನಿನಡಿ ಕಠಿಣ ಶಿಕ್ಷೆ ಹಾಗೂ ೧ಲಕ್ಷ ರು.ವರೆಗೆ ದಂಡ ವಿಧಿಸಲಾಗುವುದು ಎಂದು ಎಚ್ಚರಿಸಿದರು.
ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ನಾಗಣ್ಣಗೌಡ ಮಾತನಾಡಿ, ಯಾವುದೇ ಮಗುವು ಭ್ರೂಣದಿಂದಲೇ ಜೀವಿಸುವ ಹಕ್ಕನ್ನು ಪಡೆದುಕೊಂಡಿರುತ್ತದೆ. ಆದ್ದರಿಂದ ಹೆಣ್ಣಾಗಲಿ, ಗಂಡಾಗಲಿ ಕಾರಣ ಯಾವುದೇ ಇದ್ದರೂ ಮಗುವಿನ ಹತ್ಯೆಯು ದೊಡ್ಡ ಅಪರಾಧವಾಗುತ್ತದೆ. ಮಕ್ಕಳೆಲ್ಲರೂ ಸಮಾನರಾಗಿದ್ದು, ಯಾವುದೇ ಭೇದ, ಭಾವವೀರಬಾರದು. ಅವರಿಗೆ ಸಮಾನ ಶಿಕ್ಷಣ ಕೊಡಿಸುವ ಮೂಲಕ ದೇಶದ ಉತ್ತಮ ಪ್ರಜೆಯನ್ನಾಗಿ ಮಾಡಬೇಕು ಎಂದರು.ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಂ ಬೃಂಗೇಶ್, ಜಿಲ್ಲಾಧಿಕಾರಿ ಡಾ. ಕುಮಾರ, ಜಿಪಂ ಸಿಇಒ ಶೇಖ್ ತನ್ವೀರ್ ಆಸಿಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಮಂಡ್ಯ ವಕೀಲರ ಸಂಘದ ಅಧ್ಯಕ್ಷ ಎಂ.ಟಿ. ರಾಜೇಂದ್ರ, ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ಎಂ.ಆನಂದ, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ವೆಂಕಟೇಶ್, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ನಿರ್ದೇಶನಾಲಯದ ಜಂಟಿ ನಿರ್ದೇಶಕ ಬಿ.ಎಚ್. ನಿಶ್ಚಲ್, ಡಿಎಚ್‌ಓ ಡಾ.ಕೆ.ಮೋಹನ್, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಎಸ್. ರಾಜಮೂರ್ತಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಕಾರಿ ಎಸ್.ರಶ್ಮಿ ಇತರರಿದ್ದರು.