ಬಲಿಷ್ಠ ಭಾರತದ ಬೆಳವಣಿಗೆಗೆ ಶಿಕ್ಷಣವೇ ಆಧಾರ

| Published : Sep 06 2025, 01:00 AM IST

ಸಾರಾಂಶ

ಶಿಕ್ಷಣ ಕ್ಷೇತ್ರದಲ್ಲಿ ತಂದ ಹೊಸ-ಹೊಸ ಆವಿಷ್ಕಾರ, ಅನ್ವೇಷಣೆಗಳಿಂದ ಇಂದು ಭಾರತವನ್ನು ಪ್ರಪಂಚದ ಭೂಪಟದಲ್ಲಿ ಬಲಿಷ್ಠ ರಾಷ್ಟ್ರವನ್ನಾಗಿ ಕಾಣುತ್ತಿದ್ದೇವೆ ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅವರು ಅಭಿಪ್ರಾಯಪಟ್ಟರು.

ಕನ್ನಡಪ್ರಭ ವಾರ್ತೆ, ತುಮಕೂರು

ಬಲಿಷ್ಠ ಭಾರತದ ಬೆಳವಣಿಗೆಗೆ ಶಿಕ್ಷಣವೇ ಆಧಾರ. ಆಧುನಿಕ ಭಾರತದಲ್ಲಿ ಶಿಕ್ಷಣ ಎಲ್ಲರಿಗೂ ಲಭ್ಯವಾಗುವ ಉತ್ತಮ ವ್ಯವಸ್ಥೆ ರೂಪುಗೊಂಡಿದೆ. ಶಿಕ್ಷಣ ಕ್ಷೇತ್ರದಲ್ಲಿ ತಂದ ಹೊಸ-ಹೊಸ ಆವಿಷ್ಕಾರ, ಅನ್ವೇಷಣೆಗಳಿಂದ ಇಂದು ಭಾರತವನ್ನು ಪ್ರಪಂಚದ ಭೂಪಟದಲ್ಲಿ ಬಲಿಷ್ಠ ರಾಷ್ಟ್ರವನ್ನಾಗಿ ಕಾಣುತ್ತಿದ್ದೇವೆ ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅವರು ಅಭಿಪ್ರಾಯಪಟ್ಟರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆಗಳ ಸಹಯೋಗದಲ್ಲಿ ಶುಕ್ರವಾರ ನಗರದ ಹೊರವಲಯ ಹೆಗ್ಗೆರೆಯಲ್ಲಿರುವ ಡಾ.ಎಚ್. ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಭಾರತರತ್ನ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರವರ 138ನೇ ಜನ್ಮ ದಿನಾಚರಣೆ ಮತ್ತು ಶಿಕ್ಷಕರ ಸನ್ಮಾನ ಸಮಾರಂಭ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದು ದೇಶದಾದ್ಯಂತ ಗುರುಗಳಿಗೆ ಗೌರವ ಸಲ್ಲಿಸುವ ದಿನವಾಗಿದೆ ಎಂದು ತಿಳಿಸಿದರು.

ಭಾರತ ಇಂದು ಇಡೀ ಜಗತ್ತಿಗೆ ಆಹಾರ ನೀಡುವ ಸಾಮರ್ಥ್ಯವಿರುವ ರಾಷ್ಟ್ರವಾಗಿ ಹೊರ ಹೊಮ್ಮುತ್ತಿದೆ. ಕೃಷಿ, ತಂತ್ರಜ್ಞಾನ, ವಿಜ್ಞಾನ, ವೈದ್ಯಕೀಯ, ಎಂಜಿನಿಯರಿಂಗ್ ಎಲ್ಲ ಕ್ಷೇತ್ರಗಳಲ್ಲೂ ಭಾರತೀಯ ಯುವಶಕ್ತಿಯು ತನ್ನ ಪ್ರತಿಭೆಯನ್ನು ತೋರುತ್ತಿದೆ. ಮಹಿಳಾ ಶಿಕ್ಷಣ ಕ್ಷೇತ್ರದಲ್ಲಿ ಪ್ರಥಮ ಹೆಜ್ಜೆ ಇಟ್ಟ ಮತ್ತು ಇಡೀ ದೇಶಕ್ಕೆ ಮಾದರಿಯಾಗಿರುವ ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಅವರ ಕೊಡುಗೆ ಕೂಡ ಸದಾ ಸ್ಮರಣೀಯವಾಗಿದೆ. ರಾಜ್ಯದಲ್ಲಿ 5.72ಲಕ್ಷ ಶಿಕ್ಷಕರು ಸೇವೆ ಸಲ್ಲಿಸುತ್ತಿದ್ದು, ಅದರಲ್ಲಿ 2.5 ಲಕ್ಷಕ್ಕಿಂತ ಹೆಚ್ಚು ಮಹಿಳಾ ಶಿಕ್ಷಕಿಯರು ಇದ್ದಾರೆ ಎಂಬುದು ಹರ್ಷದ ವಿಷಯ ಎಂದರು.ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಾತನಾಡಿ, ನಮ್ಮ ಭಾರತ ದೇಶದಲ್ಲಿ ಗುರುವಿನ ಸ್ಥಾನ ಅತ್ಯಂತ ಶ್ರೇಷ್ಠವಾದುದು. ಮಗುವಿಗೆ ಮನೆಯೇ ಮೊದಲ ಪಾಠಶಾಲೆಯಾಗಿದ್ದು, ತಾಯಿಯೇ ಮೊದಲ ಗುರುವಾಗಿರುತ್ತಾಳೆ ಎಂದು ತಿಳಿಸಿದರಲ್ಲದೆ ಪ್ರತಿಯೊಬ್ಬ ವ್ಯಕ್ತಿಯ ಜೀವನದಲ್ಲಿ ಏನನ್ನಾದರೂ ಸಾಧಿಸಲು ಗುರುವಿನ ಮಾರ್ಗದರ್ಶನ ಅಗತ್ಯಎಂದು ತಿಳಿಸಿದರು.

ಶಾಸಕ ಬಿ. ಸುರೇಶ್‌ಗೌಡ ಮಾತನಾಡಿ, ವಿದ್ಯಾರ್ಥಿಗಳನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸುವ ಶಿಕ್ಷಕರ ಕೊಡುಗೆ ದೊಡ್ಡದು. ಈ ನಿಟ್ಟಿನಲ್ಲಿ ಶಿಕ್ಷಕರ ದಿನಾಚರಣೆ ಕೇವಲ ಶಿಕ್ಷಣ ಸಂಸ್ಥೆಗಳಿಗೆ ಮಾತ್ರ ಸೀಮಿತವಾಗದೆ, ಇಡೀ ಸಮಾಜ ಶಿಕ್ಷಕರ ದಿನಾಚರಣೆಯನ್ನು ಆಚರಿಸುವ ಮೂಲಕ ಶಿಕ್ಷಕ ಸಮುದಾಯವನ್ನು ಗೌರವಿಸಬೇಕು ಎಂದು ಹೇಳಿದರು.

ನಗರ ಶಾಸಕ ಜಿ.ಬಿ. ಜ್ಯೋತಿ ಗಣೇಶ್ ಮಾತನಾಡಿ, ಶಿಕ್ಷಕರ ದಿನ ಎಂದರೆ ನಮಗೆ ವಿದ್ಯಾ-ಬುದ್ಧಿ ಕಲಿಸಿ ಬದುಕಿನ ಮಾರ್ಗ ತೋರಿದ ಶಿಕ್ಷಕರಿಗೆ ಗೌರವ ಸಲ್ಲಿಸುವ ದಿನ. ಪ್ರತಿ ವಿದ್ಯಾರ್ಥಿಗಳ ಬಾಳಿನಲ್ಲೂ ಶಿಕ್ಷಕರ ಪಾತ್ರ ಬಹಳ ಮಹತ್ವದ್ದು. ಒಮ್ಮೆ ಶಿಕ್ಷಕರಾದವರು ಜೀವನ ಪರ್ಯಂತ ಶಿಕ್ಷಕರಾಗಿರುತ್ತಾರೆ. ಸಮಾಜಕ್ಕೆ ಅವರು ಒಂದಲ್ಲಾ ಒಂದು ರೀತಿಯಲ್ಲಿ ಮಾರ್ಗದರ್ಶನ ನೀಡುತ್ತಾರೆ. ಶಿಕ್ಷಕ ವೃತ್ತಿ ಅತ್ಯಂತ ಶ್ರೇಷ್ಠವಾದದ್ದು ಎಂದು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಉತ್ತಮ ಸೇವೆ ಸಲ್ಲಿಸಿದ 18 ಶಿಕ್ಷಕರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನಾಧಿಕಾರಿ ಜಿ. ಚಂದ್ರಶೇಖರ ಗೌಡ, ಹೆಗ್ಗೆರೆ ಗ್ರಾಮ ಪಂಚಾಯತಿ ಅಧ್ಯಕ್ಷ ರೇವಣ್ಣ ಎಚ್.ಎಸ್., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ಜಿ. ರಘುಚಂದ್ರ, ಡಯಟ್ ಉಪನಿರ್ದೇಶಕ ಎಸ್.ಸಿ. ಮಂಜುನಾಥ, ವಿವಿಧ ಶಿಕ್ಷಕರ ಸಂಘದ ಪದಾಧಿಕಾರಿಗಳು, ಮತ್ತಿತರರು ಹಾಜರಿದ್ದರು.