ಸಾರಾಂಶ
ಸೊರಬ: ಬದುಕಿನಲ್ಲಿ ಅಮೂಲ್ಯವಾದ ಸಂಪತ್ತು ಎಂದರೆ ಅದು ವಿದ್ಯೆ. ಇದಕ್ಕೆ ಯಾವುದೇ ಚೌಕಟ್ಟಿನ ವ್ಯಾಪ್ತಿ ಇರುವುದಿಲ್ಲ. ಗಳಿಸಿದ ವಿದ್ಯೆಯನ್ನು ಎಂದಿಗೂ ಕಳೆದುಕೊಳ್ಳಲು ಸಾಧ್ಯವಿಲ್ಲ. ಹಾಗಾಗಿ ಯಾರೂ ಕೂಡ ಶಿಕ್ಷಣದಿಂದ ವಂಚಿತರಾಗಬಾರದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು.
ಶನಿವಾರ ಪಟ್ಟಣದ ಡಾ.ರಾಜ್ ಕಲಾ ಮಂದಿರದಲ್ಲಿ ಜಿಲ್ಲಾಡಳಿತ, ಜಿಪಂ, ತಾಲೂಕು ಆಡಳಿತ, ತಾಪಂ ಮತ್ತು ಶಾಲಾ ಶಿಕ್ಷಣ ಇಲಾಖೆಯಿಂದ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ೧೩೮ನೇ ಜನ್ಮ ದಿನಾಚರಣೆ ಅಂಗವಾಗಿ ಹಮ್ಮಿಕೊಂಡ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ, ನಿವೃತ್ತ ಮತ್ತು ಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.ತಂದೆ-ತಾಯಿ ಮಗುವಿಗೆ ಜನ್ಮನೀಡಿದರೆ, ಜೀವನಕ್ಕೆ ಅಗತ್ಯವಿರುವ ಮಾರ್ಗದರ್ಶನ ನೀಡುವುದು ಗುರುಗಳಿಂದ ಸಾಧ್ಯ. ದೇಶದ ಪ್ರಗತಿಗೆ ಶಿಕ್ಷಣವು ಅತ್ಯಮೂಲ್ಯವಾಗಿದ್ದು, ರಾಜ್ಯ ಸರ್ಕಾರ ಸಮಗ್ರ ಶಿಕ್ಷಣ ನೀಡಲು ಹೆಚ್ಚಿನ ಮಹತ್ವ ನೀಡುತ್ತಿದೆ. ಪಠ್ಯ ಶಿಕ್ಷಣಕ್ಕೆ ತೊಂದರೆಯಾಗದಂತೆ ಕೌಶಲ್ಯದ ಅಭಿವೃದ್ಧಿಗೆ ಒತ್ತನ್ನು ನೀಡಲಾಗುತ್ತಿದೆ. ರಾಜ್ಯದ ಕೆಲವೆಡೆ ಪರೀಕ್ಷೆಗಳಲ್ಲಿ ನಡೆಯುತ್ತಿದ್ದ ನಕಲು ತಡೆಯಲು ಅಗತ್ಯ ಕ್ರಮ ವಹಿಸಿಲಾಗಿದ್ದರೂ ಉತ್ತಮ ಫಲಿತಾಂಶ ಲಭಿಸಿದೆ. ಶಿಕ್ಷಕರು ತಮ್ಮ ಜವಾಬ್ದಾರಿಯನ್ನು ಮರೆಯದೇ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಕರೆ ನೀಡಿದರು.
ಪ್ರಸ್ತುತ ಸರ್ಕಾರಿ ಶಾಲೆಯಲ್ಲಿ ವ್ಯಾಸಾಂಗ ಮಾಡುತ್ತಿರುವ ೨೫ ಸಾವಿರ ವಿದ್ಯಾರ್ಥಿಗಳಿಗೆ ಸಿಇಟಿ ತರಬೇತಿ ನೀಡಲಾಗಿದ್ದು, ಮುಂಬರುವ ದಿನಗಳಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೂ ಸಿಇಟಿ ತರಬೇತಿ ದೊರೆಯಬೇಕು ಎನ್ನುವ ಕುರಿತು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗಿದೆ. ಶಾಲೆಗಳಿಗೆ ಮೂಲ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಅತ್ಯಂತ ಅವಶ್ಯಕತೆ ಇರುವ ಶಾಲೆಗಳಿಗೆ ಕಟ್ಟಡ ಮತ್ತು ಕೊಠಡಿಗಳನ್ನು ನೀಡಲಾಗುತ್ತಿದೆ. ವಿದ್ಯಾರ್ಥಿಗಳ ಹಿತಕ್ಕಾಗಿ ರಾಜ್ಯದಲ್ಲಿ ೮೦೦ ಕೆಪಿಎಸ್ ಶಾಲೆಗಳು ಹಾಗೂ ೫ ಸಾವಿರ ದ್ವಿಭಾಷಾ ಶಾಲೆಗಳನ್ನು ಮಂಜೂರು ಮಾಡಲಾಗಿದೆ. ಕಲ್ಯಾಣ ಕರ್ನಾಟಕ ಸೇರಿದಂತೆ ರಾಜ್ಯದಲ್ಲಿ ಒಟ್ಟು ೧೮ ಸಾವಿರ ಶಿಕ್ಷಕರ ನೇಮಕಾತಿಯನ್ನು ಶೀಘ್ರವೇ ಪೂರ್ಣಗೊಳಿಸಲಾಗುವುದು ಎಂದರು.ಇದೇ ವೇಳೆ ಜಿಲ್ಲಾಮಟ್ಟದ ಉತ್ತಮ ಹಾಗೂ ವಿಶೇಷ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಮತ್ತು ನಿವೃತ್ತ ಶಿಕ್ಷಕರಿಗೆ ಸನ್ಮಾನಿಸಲಾಯಿತು. ಎಸ್ಸೆಸ್ಸೆಲ್ಸಿಯಲ್ಲಿ ಉತ್ತಮ ಫಲಿತಾಂಶ ನೀಡಿದ ಶಾಲೆಗಳಿಗೆ ಪ್ರಶಂಸನಾ ಪತ್ರ ನೀಡಲಾಯಿತು. ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕಿ ಎ.ವಿ.ಪವಿತ್ರ ಶಿಕ್ಷಕರ ದಿನಾಚರಣೆ ಕುರಿತು ಉಪನ್ಯಾಸ ನೀಡಿದರು.ರಾಜ್ಯ ಎಸ್‌ಸಿ/ಎಸ್‌ಟಿ ಅಲೆಮಾರಿಗಳ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ, ತಾಪಂ ಮಾಜಿ ಅಧ್ಯಕ್ಷ ಎಚ್.ಗಣಪತಿ ಹುಲ್ತಿಕೊಪ್ಪ, ಬಗರ್‌ಹುಕುಂ ಸಮಿತಿ ಅಧ್ಯಕ್ಷ ಎಂ.ಡಿ.ಶೇಖರ್, ಸದಾನಂದಗೌಡ ಬಿಳಗಲಿ, ಜಿಪಂ ಮಾಜಿ ಸದಸ್ಯರಾದ ತಬಲಿ ಬಂಗಾರಪ್ಪ, ಶಿವಲಿಂಗೇಗೌಡ, ವೀರೇಶ್ ಕೊಟಗಿ, ತಾರಾ ಶಿವಾನಂದಪ್ಪ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಸ್.ಮಂಜುನಾಥ್, ತಹಸೀಲ್ದಾರ್ ಮಂಜುಳಾ ಬಿ.ಹೆಗಡಾಳ್, ಬಿಇಒ ಆರ್.ಪುಷ್ಪಾ, ತಾಪಂ ಇಒ ಶಶಿಧರ್, ಪುರಸಭೆ ಮುಖ್ಯಾಧಿಕಾರಿ ಎಚ್.ವಿ.ಚಂದನ್, ಪಿಎಂ ಪೋಷನ್ ಶಕ್ತಿ ನಿರ್ಮಾಣ ಯೋಜನೆಯ ಸಹಾಯಕ ನಿರ್ದೇಶಕ ಡಾ.ಕೆ.ಸಿ.ಶ್ರೀಕಾಂತ್, ಕ್ಷೇತ್ರ ಸಮನ್ವಯಾಧಿಕಾರಿ ದಯಾನಂದ ಕಲ್ಲೇರ್, ದೈಹಿಕ ಶಿಕ್ಷಣ ಪರಿವೀಕ್ಷಕ ಪರಮೇಶ್ವರಪ್ಪ, ಶಿಕ್ಷಣ ಸಂಯೋಜಕ ಎಚ್.ಅರುಣ್ ಕುಮಾರ್, ಹಾಲೇಶ್ ನವುಲೆ, ಎಚ್. ಹಾಲೇಶ್, ಪ್ರಕಾಶ್ ಮಡ್ಲೂರು, ಶಿವಕುಮಾರ್ ಇತರರಿದ್ದರು.
;Resize=(128,128))
;Resize=(128,128))
;Resize=(128,128))