ನಗರದ ರೂಪಾದೇವಿ ಸಮೂಹ ಶಿಕ್ಷಣ ಸಂಸ್ಥೆಗಳು ಹಾಗೂ ತೂರ್ಯಾ ಸಂಸ್ಥೆಯ ಸಹಯೋಗದಲ್ಲಿ ಸಂಕಲ್ಪ ಶೈಕ್ಷಣಿಕ ನಾಯಕತ್ವ ಸಮಾವೇಶವನ್ನು ನಗರದ ಮಹೇಶ್ವರಿ ಭವನದಲ್ಲಿ ಆಯೋಜಿಸಲಾಗಿತ್ತು. ಸಮಾವೇಶದಲ್ಲಿ ಶಿಕ್ಷಣ ತಜ್ಞ ಡಾ.ಗುರುರಾಜ ಕರಜಗಿ ಅವರ ಅಕಾಡೆಮಿ ಫಾರ್ ಕ್ರಿಯೇಟಿವ್ ಟೀಚಿಂಗ್ ಮತ್ತು ರೂಪಾದೇವಿ ಇಂಟರ್ನ್ಯಾಷನಲ್ ಸ್ಕೂಲ್ ನಡುವೆ 2026-27ನೇ ಶೈಕ್ಷಣಿಕ ವರ್ಷದಿಂದ ಜಾರಿಗೆ ಬರುವ ಶೈಕ್ಷಣಿಕ ಸಹಭಾಗಿತ್ವಕ್ಕೆ ಚಾಲನೆ ನೀಡಲಾಯಿತು.
ಕನ್ನಡಪ್ರಭ ವಾರ್ತೆ ವಿಜಯಪುರ
ನಗರದ ರೂಪಾದೇವಿ ಸಮೂಹ ಶಿಕ್ಷಣ ಸಂಸ್ಥೆಗಳು ಹಾಗೂ ತೂರ್ಯಾ ಸಂಸ್ಥೆಯ ಸಹಯೋಗದಲ್ಲಿ ಸಂಕಲ್ಪ ಶೈಕ್ಷಣಿಕ ನಾಯಕತ್ವ ಸಮಾವೇಶವನ್ನು ನಗರದ ಮಹೇಶ್ವರಿ ಭವನದಲ್ಲಿ ಆಯೋಜಿಸಲಾಗಿತ್ತು. ಸಮಾವೇಶದಲ್ಲಿ ಶಿಕ್ಷಣ ತಜ್ಞ ಡಾ.ಗುರುರಾಜ ಕರಜಗಿ ಅವರ ಅಕಾಡೆಮಿ ಫಾರ್ ಕ್ರಿಯೇಟಿವ್ ಟೀಚಿಂಗ್ ಮತ್ತು ರೂಪಾದೇವಿ ಇಂಟರ್ನ್ಯಾಷನಲ್ ಸ್ಕೂಲ್ ನಡುವೆ 2026-27ನೇ ಶೈಕ್ಷಣಿಕ ವರ್ಷದಿಂದ ಜಾರಿಗೆ ಬರುವ ಶೈಕ್ಷಣಿಕ ಸಹಭಾಗಿತ್ವಕ್ಕೆ ಚಾಲನೆ ನೀಡಲಾಯಿತು.ಈ ವೇಳೆ ಶಿಕ್ಷಣ ತಜ್ಞ ಡಾ.ಗುರುರಾಜ ಕರಜಗಿ ಮಾತನಾಡಿ, ಶಿಕ್ಷಣವೆಂದರೆ ಕೇವಲ ಅಂಕಗಳನ್ನು ಗಳಿಸುವುದಕ್ಕೆ ಸೀಮಿತವಾಗಬಾರದು. ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ಸೃಜನಶೀಲತೆ, ಮಾನವೀಯ ಮೌಲ್ಯಗಳು ಹಾಗೂ ಉತ್ತಮ ವ್ಯಕ್ತಿತ್ವವನ್ನು ರೂಪಿಸುವುದೇ ಶಿಕ್ಷಣದ ನಿಜವಾದ ಉದ್ದೇಶ. ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಮಹತ್ತರ ಜವಾಬ್ದಾರಿ ಹೊಂದಿದ್ದು, ಮಕ್ಕಳಲ್ಲಿ ಜ್ಞಾನ ಮತ್ತು ಸಂಸ್ಕಾರ ಎರಡನ್ನೂ ಬೆಳೆಸಬೇಕು ಎಂದು ಸಲಹೆ ನೀಡಿದರು.ಡಾ.ಗುರುರಾಜ ಕರಜಗಿ ಅವರ ಅಕಾಡೆಮಿ ಫಾರ್ ಕ್ರಿಯೇಟಿವ್ ಟೀಚಿಂಗ್ ಮತ್ತು ರೂಪಾದೇವಿ ಇಂಟರ್ನ್ಯಾಷನಲ್ ಸ್ಕೂಲ್ ನಡುವಿನ ಸಹಭಾಗಿತ್ವ ಹಾಗೂ ತೂರ್ಯಾ ಮತ್ತು ರೂಪಾದೇವಿ ಸಂಸ್ಥೆಗಳ ಸಹಭಾಗಿತ್ವವು ಪದವಿ ಪೂರ್ವ ವಿಜ್ಞಾನ ಶಿಕ್ಷಣದ ಗುಣಮಟ್ಟ ಹೆಚ್ಚಿಸುವುದರೊಂದಿಗೆ, ಉತ್ತಮ ಶಿಕ್ಷಣಕ್ಕಾಗಿ ವಿಜಯಪುರದ ವಿದ್ಯಾರ್ಥಿಗಳು ಬೇರೆ ನಗರಗಳಿಗೆ ವಲಸೆ ಹೋಗುವುದನ್ನು ತಡೆಯುವ ಉದ್ದೇಶ ಹೊಂದಿದೆ ಎಂದರು.ಸಂಸ್ಥೆಗಳ ಮುಖ್ಯ ಮಾರ್ಗದರ್ಶಕ ಗುರುನಾಥ ಗೋಟ್ಯಾಳ ಮಾತನಾಡಿ, ಸಂಸ್ಥೆಯ ಶೈಕ್ಷಣಿಕ ಆಶಯ, ದೂರದೃಷ್ಟಿ ಹಾಗೂ ವಿಜಯಪುರದಲ್ಲಿ ಗುಣಮಟ್ಟದ ಶಿಕ್ಷಣ ಒದಗಿಸುವ ಬದ್ಧತೆಯನ್ನು ವಿವರಿಸಿದರು.
ತೂರ್ಯಾ ಅಕಾಡೆಮಿಯ ಸಂಸ್ಥಾಪಕ ಬಿ.ವಿ.ಪಾಟೀಲ ಮಾತನಾಡಿ, ಸ್ಥಳೀಯ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡಲು ಅಗತ್ಯ ಅವಕಾಶಗಳನ್ನು ಕಲ್ಪಿಸುವುದು ಸಂಸ್ಥೆಯ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದರು.ಶೈಕ್ಷಣಿಕ ನಿರ್ದೇಶಕ ಆದರ್ಶ ಪಾಟೀಲ ಸಂಸ್ಥೆಯ ವಿಶಿಷ್ಟ ಬೋಧನಾ ಮಾದರಿಯನ್ನು ಪರಿಚಯಿಸಿದರು. ಸಮಾವೇಶದಲ್ಲಿ ಶಿಕ್ಷಣ ಕ್ಷೇತ್ರದ ಗಣ್ಯರು, ವಿವಿಧ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಶಿಕ್ಷಕರು, ಪೋಷಕರು ಹಾಗೂ ಶಿಕ್ಷಣಾಸಕ್ತರು ಭಾಗವಹಿಸಿದ್ದರು.