ಸಾರಾಂಶ
ನ್ಯಾಮತಿ ತಾಲೂಕು ಪ್ರಗತಿ ಪರಿಶೀಲನಾ ಸಭೆಯಲ್ಲಿ ಸೂಚನೆ
ಕನ್ನಡಪ್ರಭ ವಾರ್ತೆ ನ್ಯಾಮತಿತಾಲೂಕು ಅಧಿಕಾರಿಗಳು ವಿನಾಕಾರಣ ಆರೋಪ- ಪ್ರತ್ಯಾರೋಪಗಳಲ್ಲಿ ಕಾಲಹರಣ ಮಾಡುವ ಬದಲು ತಾಲೂಕಿನ ಅಭಿವೃದ್ಧಿಗೆ ಸಹಕರಿಸಿ ರಾಜ್ಯ ಸರ್ಕಾರದ ಯೋಜನೆಗಳ ಅನುಷ್ಠಾನಗೊಳಿಸಲು ದಾವಣಗೆರೆ ವಿಶ್ವವಿದ್ಯಾನಿಲಯ ಕುಲಸಚಿವೆ, ತಾಲೂಕು ಉಸ್ತುವಾರಿ ಬಿ.ಬಿ.ಸರೋಜಾ ಸೂಚಿಸಿದರು.
ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಪ್ರಥಮ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಸಾಮಾಜಿಕ, ಆರ್ಥಿಕ ಹಾಗೂ ಭೌತಿಕ ಅಭಿವೃದ್ಧಿ ಕಾರ್ಯಗಳ ಪರಿಣಾಮವಾಗಿ ಅನುಷ್ಠಾನಗೊಳಿಸಿ ತಾಲೂಕು ಅಭಿವೃದ್ಧಿಪಡಿಸಿ ಹಾಗೂ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಸಮಸ್ಯೆಯಾಗದಂತೆ ಜನರಿಗೆ ತಲುಪಿಸುವುದು ಅಧಿಕಾರಿಗಳ ಕರ್ತವ್ಯ ಎಂದರು.ಸರ್ಕಾರದ ಯೋಜನೆಗಳು ಪ್ರತಿಯೊಬ್ಬರಿಗೂ ತಲುಪಿಸುವ ದೃಷ್ಟಿಯಿಂದ ತಾಲೂಕಿನ ಉಸ್ತುವಾರಿ ಅಧಿಕಾರಿಯಾಗಿ ನೇಮಿಸಿದ್ದು, ತಾಲೂಕಿನ ಅಧಿಕಾರಿಗಳು ಪ್ರತಿ ಇಲಾಖೆಗೆ ಸಂಬಂಧಿಸಿದ ಮಾಹಿತಿ ಪಡೆದು ಅವಶ್ಯಕ ಮೂಲಸೌಲಭ್ಯಗಳ ಕಲ್ಪಿಸಿ ಮಾದರಿ ತಾಲೂಕು ಆಗಿಸಲು ಎಲ್ಲರ ಸಹಕಾರ ಅಗತ್ಯ ಎಂದರು.
ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ವಸತಿ ಶಾಲೆಗಳ ಮಕ್ಕಳಿಗೆ ಉತ್ತಮ ಆಹಾರ ನೀಡಬೇಕು ತಪ್ಪಿದಲ್ಲಿ ಕ್ರಮ ಕೈಗೊಳ್ಳಲಾಗುವುದು ಹಾಗೂ ವಸತಿ ಶಾಲೆಗಳ ಮಕ್ಕಳ ಆರೋಗ್ಯದ ಬಗ್ಗೆ ಗಮನಹರಿಸಿ, ಬೇಸಿಗೆಯಲ್ಲಿ ಕುಡಿಯುವ ನೀರಿನ ಬಗ್ಗೆ ಗಮನಿಸಿ ಕಾರ್ಯ ನಿರ್ವಹಿಸಲು ಅಧಿಕಾರಿಗಳಿಗೆ ಸೂಚಿಸಿದರು.ಈ ವೇಳೆ ತಹಸೀಲ್ದಾರ್ ಎಚ್.ಬಿ.ಗೋವಿಂದಪ್ಪ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಪಿ.ಗಣೇಶ್ ರಾವ್, ತಾ.ಪಂ ಇ.ಒ.ರಾಘವೇಂದ್ರ, ನ್ಯಾಮತಿ ಪೊಲೀಸ್ ಠಾಣೆ ಪಿಎಸ್‌ಐ ರವಿ, ಬೆಸ್ಕಾಂ ಎಇಇ ಬಿ.ಕೆ.ಶ್ರೀನಿವಾಸ್, ಸಮಾಜ ಕಲ್ಯಾಣ ಇಲಾಖೆಯ ಉಮಾ, ಹಿಂದುಳಿದ ವರ್ಗಗಳ ಇಲಾಖೆಯ ಮೃತ್ಯುಂಜಯ ಸ್ವಾಮಿ, ಶಿಶು ಕಲ್ಯಾಣ ಅಭಿವೃದ್ಧಿ ಇಲಾಖೆಯ ಮಹಂತೇಶ್ ಸ್ವಾಮಿ ಪೂಜಾರಿ, ಆರೋಗ್ಯ ಇಲಾಖೆಯ ಡಾ.ಕೆಂಚಪ್ಪ ಬಂತಿ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ಪ್ರತಿಮಾ, ಕ್ಷೇತ್ರ ಶಿಕ್ಷಣಾಧಿಕಾರಿ ನಂಜರಾಜ್ ಸೇರಿ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತಿತರರಿದ್ದರು.