ಸ್ವೀಪ್ ಚಟುವಟಿಕೆ ಪರಿಣಾಮಕಾರಿ ಅನುಷ್ಠಾನಗೊಳಿಸಿ: ರಾಹುಲ್‌ ಶಿಂಧೆ

| Published : Mar 23 2024, 01:04 AM IST

ಸ್ವೀಪ್ ಚಟುವಟಿಕೆ ಪರಿಣಾಮಕಾರಿ ಅನುಷ್ಠಾನಗೊಳಿಸಿ: ರಾಹುಲ್‌ ಶಿಂಧೆ
Share this Article
  • FB
  • TW
  • Linkdin
  • Email

ಸಾರಾಂಶ

ಲೋಕಸಭಾ ಚುನಾವಣೆ ಸಂಬಂಧ ಜಿಲ್ಲೆಯಲ್ಲಿ ಮತದಾನದ ಶೇಕಡಾವಾರು ಪ್ರಮಾಣ ಹೆಚ್ಚಿಸಲು ಹಾಗೂ ಮತದಾರರಲ್ಲಿ ನೈತಿಕ ಮತದಾನದ ಕುರಿತು ಜಾಗೃತಿ ಮೂಡಿಸುವುದರ‌ ಜೊತೆಗೆ ಸ್ವಿಪ್ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ಅಧಿಕಾರಿಗಳು ಮುಂದಾಗಬೇಕು ಎಂದು ಜಿಲ್ಲಾ ಸ್ವೀಪ್ ಸಮಿತಿಯ ನೋಡಲ್ ಅಧಿಕಾರಿಯೂ ಆಗಿರುವ ಜಿಪಂ ಸಿಇಒ ರಾಹುಲ್‌ ಶಿಂಧೆ ತಿಳಿಸಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಲೋಕಸಭಾ ಚುನಾವಣೆ ಸಂಬಂಧ ಜಿಲ್ಲೆಯಲ್ಲಿ ಮತದಾನದ ಶೇಕಡಾವಾರು ಪ್ರಮಾಣ ಹೆಚ್ಚಿಸಲು ಹಾಗೂ ಮತದಾರರಲ್ಲಿ ನೈತಿಕ ಮತದಾನದ ಕುರಿತು ಜಾಗೃತಿ ಮೂಡಿಸುವುದರ‌ ಜೊತೆಗೆ ಸ್ವಿಪ್ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ಅಧಿಕಾರಿಗಳು ಮುಂದಾಗಬೇಕು ಎಂದು ಜಿಲ್ಲಾ ಸ್ವೀಪ್ ಸಮಿತಿಯ ನೋಡಲ್ ಅಧಿಕಾರಿಯೂ ಆಗಿರುವ ಜಿಪಂ ಸಿಇಒ ರಾಹುಲ್‌ ಶಿಂಧೆ ತಿಳಿಸಿದರು.

ಜಿಪಂ ಸಭಾಂಗಣದಲ್ಲಿ‌ ಗುರುವಾರ ಜರುಗಿದ ಜಿಲ್ಲಾ‌ ಸ್ವೀಪ್ ಸಮಿತಿ‌ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಾರ್ವಜನಿಕರಲ್ಲಿ ನೈಜ ಮತದಾನದ ಅರಿವು ಮತ್ತು ಮತದಾನ ಪ್ರಮಾಣ ಹೆಚ್ಚಿಸುವಲ್ಲಿ ಸ್ವೀಪ್ ಸಮಿತಿಯಿಂದ ನಿರಂತರ ಚಟುವಟಿಕೆ, ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ಹಾಗೂ ಪರಿಣಾಮಕಾರಿಯಾಗಿ ಆಯೋಜಿಸಬೇಕು. ಕಳೆದ‌ ಚುನಾವಣೆಗಳಲ್ಲಿ ನಗರ ಪ್ರದೇಶಗಳಲ್ಲಿ ಮತದಾನ ಪ್ರಮಾಣ ಕಡಿಮೆ ಆಗಿದ್ದು, ಮತದಾನ ಪ್ರಮಾಣ ಹೆಚ್ಚಿಸಲು ಸಂಬಂಧಿಸಿದ ಅಧಿಕಾರಿಗಳು ಕಾರ್ಯ ಪ್ರವೃತ್ತರಾಗಬೇಕು ಎಂದರು.

ಮತದಾನ ಜಾಗೃತಿಗಾಗಿ ಬೀದಿ ನಾಟಕ, ವಿಭಿನ್ನ ಕಾರ್ಯಕ್ರಮ ಆಯೋಜಿಸುವದರ ಜೊತೆಗೆ ಮನೆ ಮನೆಗೆ ಭೇಟಿ‌ ನೀಡಿ ಮತದಾನದ ಕುರಿತು ಜಾಗೃತಿ ಮೂಡಿಸಬೇಕು. ಕಳೆದ ಚುನಾಣೆಗಳಲ್ಲಿ ಕಡಿಮೆ ಮತದಾನವಾಗಿರುವ ಮತಗಟ್ಟೆಗಳನ್ನು ಗುರುತಿಸಿ ಆ ಭಾಗದಲ್ಲಿ ಸೂಕ್ತ ಯೋಜನೆ ರೂಪಿಸಿಕೊಂಡು ಸ್ವಿಪ್ ಚಟುವಟಿಕೆಗಳನ್ನು ನಡೆಸುವ ಮೂಲಕ ಮತ ಪ್ರಮಾಣ ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ ನೀಡಿದರು.

ಜಿಲ್ಲೆಯಲ್ಲಿನ‌ ವಲಸೆ ಕಾರ್ಮಿಕರನ್ನು ಗುರುತಿಸಿ ಮತದಾನ ದಿನದಂದು ಪಾಲ್ಗೊಳ್ಳಲು ಪ್ರೇರೇಪಿಸಬೇಕು. ಜೊತೆಗೆ ಜನದಟ್ಟಣೆ ಇರುವ ಪ್ರದೇಶಗಳಲ್ಲಿ ಮತದಾನ‌ ಮಹತ್ವದ ಕುರಿತು ಹೆಚ್ಚಿನ ಜಾಗೃತಿ ಮೂಡಿಸಲು ಕ್ರಮ ಜರುಗಿಸಬೇಕು. ಮತದಾನದ ದಿನದಂದು‌ ಅರ್ಹ ಮತದಾರರೆಲ್ಲರೂ ಮತಗಟ್ಟೆಗಳಿಗೆ ಆಗಮಿಸಿ ತಮ್ಮ ಹಕ್ಕನ್ನು ಚಲಾಯಿಸುವಂತೆ ಕ್ರಮ ಕೈಗೊಳ್ಳಬೇಕು. ಅಲ್ಲದೆ, ಮತಗಟ್ಟೆಗಳಲ್ಲಿ ಅಗತ್ಯ ಮೂಲ ಸೌಕರ್ಯ ಒದಗಿಸುವ ಮೂಲಕ ಜನರು ಮತದಾನ‌ ಪ್ರಕ್ರಿಯೆಯಲ್ಲಿ ಭಾಗವಹಿಸಲು ಪ್ರೋತ್ಸಾಹಿಸಬೇಕು.

ಸ್ವೀಪ್ ಸಮಿತಿ ಸದಸ್ಯರು ತಮಗೆ ವಹಿಸಿದ ಕಾರ್ಯಹಂಚಿಕೆ ವ್ಯಾಪ್ತಿಯಲ್ಲಿ ನಡೆಸುವ ಸ್ವೀಪ್ ಚಟುವಟಿಕೆಗಳ ಸಂಬಂಧ ಪ್ರತಿನಿತ್ಯ ಚಟುವಟಿಕೆ ಕೈಗೊಳ್ಳುವ ಮೂಲಕ ಪ್ರತಿಯೊಬ್ಬರೂ ಮತದಾನದ ಹಬ್ಬದಲ್ಲಿ ಭಾಗಿವಹಿಸುವಂತಹ ಕಾರ್ಯಕ್ರಮ ಆಯೋಜಿಸಲು ತಿಳಿಸಿದರು.

ಮತದಾನಕ್ಕಿಂತ ಇನ್ನೊಂದಿಲ್ಲ, ನಾನು ಖಚಿತವಾಗಿ ಮತದಾನ ಮಾಡುವೆ ಎಂಬ ಧ್ಯೇಯ ಹೊಂದಬೇಕು ಎಂಬ ಘೋಷವಾಕ್ಯದೊಂದಿಗೆ ಮತದಾರರಲ್ಲಿ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ರಾಹುಲ ಶಿಂಧೆ ಹೇಳಿದರು.

ಸಭೆಯಲ್ಲಿ ಜಿಲ್ಲಾ ಯೋಜನಾ ಕೋಶದ ಯೋಜನಾ ನಿರ್ದೇಶಕ ಮಲ್ಲಿಕಾರ್ಜುನ ಕಲಾದಗಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಆರ್. ನಾಗರಾಜ, ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಅಬ್ದುಲ್ ರಶೀದ್ ಮಿರ್ಜನ್ನವರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ವಿಕಲಚೇತನರ ಕಲ್ಯಾಣಾಧಿಕಾರಿ ನಾಮದೇವ ಬಿಲ್ಕರ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.