ಕನ್ನಡಪ್ರಭ ವಾರ್ತೆ ಮಳವಳ್ಳಿ
ಹೆಣ್ಣು ಮಕ್ಕಳ ಲಿಂಗಾನುಪಾತ ಕುಸಿತ ತಡೆದು ಅವರ ಶಿಕ್ಷಣ ಮತ್ತು ಸುರಕ್ಷತೆಗೆ ಆದ್ಯತೆ ನೀಡಲು ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಲಿಂಗ ತಜ್ಞೆ ಟಿ.ಎಂ.ಸೌಮ್ಯಾ ಹೇಳಿದರು.ತಾಲೂಕಿನ ಕಂದೇಗಾಲ ಸರ್ಕಾರಿ ಪ್ರೌಢಶಾಲೆಯಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿದ್ದ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆ ಮತ್ತು ಲಿಂಗ ಸಂವೇದನೆ ಕುರಿತ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.
ಭ್ರೂಣ ಹತ್ಯೆ ಮತ್ತು ಹೆಣ್ಣು ಮಕ್ಕಳ ಮೇಲಿನ ತಾರತಮ್ಯದಿಂದಾಗಿ ದೇಶದಲ್ಲಿ ಲಿಂಗಾನುಪಾತದಲ್ಲಿ ಅಸಮತೋಲನ ಉಂಟಾಗಿದೆ. ಇದರಿಂದ ಮುಂದೆ ಅನೇಕ ಸಾಮಾಜಿಕ ಸಮಸ್ಯೆಗಳು ಎದುರಾಗಲಿವೆ. ಹೀಗಾಗಿ ಹೆಣ್ಣು ಮಗುವನ್ನು ಉಳಿಸಿ, ಬೆಳೆಸಿ, ಶಿಕ್ಷಣ ನೀಡುವುದು ಇಂದಿನ ಅಗತ್ಯವಾಗಿದೆ ಎಂದರು.ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯ ಮುಖ್ಯ ಉದ್ದೇಶವೆಂದರೆ ಲಿಂಗ ತಾರತಮ್ಯವನ್ನು ತೊಡೆದು ಹಾಕುವುದು, ಹೆಣ್ಣು ಮಕ್ಕಳ ಜನನ ಮತ್ತು ಶಿಕ್ಷಣವನ್ನು ಉತ್ತೇಜಿಸುವುದು ಮತ್ತು ಅವರಿಗೆ ಸುರಕ್ಷಿತ ವಾತಾವರಣ ಒದಗಿಸುವುದು. ಈ ಯೋಜನೆ ಯಶಸ್ವಿಯಾಗಲು ಸಮಾಜದ ಪ್ರತಿಯೊಬ್ಬರ ಸಹಕಾರ ಅಗತ್ಯ ಎಂದರು.
ಸಮಾಜದಲ್ಲಿ ಗಂಡು-ಹೆಣ್ಣಿಗೆ ಸಮಾನತೆ ಇದೆ. ಆದರೆ, ಇಂದಿಗೂ ಹೆಣ್ಣು ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿಸುವ ಪ್ರಕರಣಗಳು ನಡೆಯುತ್ತಿವೆ. ಹೆಣ್ಣು ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳುವುದು ಎಲ್ಲರ ಜವಾಬ್ದಾರಿಯಾಗಿದೆ. ಶಿಕ್ಷಿತ ಹೆಣ್ಣು ಮಗಳಿಂದ ಮಾತ್ರ ಬಲವಾದ ಸಮಾಜ ನಿರ್ಮಾಣವಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಪುರುಷ, ಮಹಿಳೆ ಮತ್ತು ಇತರೆ ಲಿಂಗಗಳ ಬಗ್ಗೆ ಇರುವ ರೂಢಿಗತ ನಂಬಿಕೆ ಬದಲಾಯಿಸಬೇಕು. ಮಕ್ಕಳಿಗೆ ಬಾಲ್ಯದಿಂದಲೇ ಲಿಂಗ ಸಮಾನತೆಯ ಬಗ್ಗೆ ಪಾಠ ಮಾಡಬೇಕು. ಮಹಿಳೆಯರ ಮೇಲಿನ ದೌರ್ಜನ್ಯ ತಡೆಗಟ್ಟುವುದು ಮತ್ತು ಅವರ ಹಕ್ಕುಗಳ ಬಗ್ಗೆ ಅರಿವು ಮೂಡಿಸುವುದು ಶಿಕ್ಷಕರು ಹಾಗೂ ಪೋಷಕರ ಕರ್ತವ್ಯವಾಗಿದೆ ಎಂದರು.
ಎಲ್ಲಿಯಾದರೂ ಲೈಂಗಿಕ ದೌರ್ಜನ್ಯ ಅಥವಾ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ಕಂಡು ಬಂದಲ್ಲಿ ಕೂಡಲೇ ಹತ್ತಿರದ ಪೊಲೀಸ್ ಠಾಣೆ ಅಥವಾ ಮಹಿಳಾ ಸಹಾಯವಾಣಿ 181ಕ್ಕೆ ಮಾಹಿತಿ ನೀಡಬೇಕು. ಇಂತಹ ಪ್ರಕರಣಗಳನ್ನು ಮುಚ್ಚಿಡದೆ ವರದಿ ಮಾಡುವ ಮೂಲಕ ಅಪರಾಧಿಗಳಿಗೆ ಕಡಿವಾಣ ಹಾಕಬಹುದು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕ ಎಚ್.ಬಿ.ರಾಜು, ಶಿಕ್ಷಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಕೊನೆಯಲ್ಲಿ ‘ಬೇಟಿ ಬಚಾವೋ’ ಪ್ರತಿಜ್ಞಾ ವಿಧಿಯನ್ನು ಎಲ್ಲರೂ ಬೋಧಿಸಿದರು.