ತಂಬಾಕು ಮುಕ್ತ ಅಭಿಯಾನ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ

| Published : Sep 26 2024, 11:32 AM IST

ಸಾರಾಂಶ

ಶಾಲಾ ಕಾಲೇಜುಗಳ ಒಳಾವರಣ ಮತ್ತು ಹೊರಗಡೆ ತಂಬಾಕು ಮಾರಾಟ ನಿಷೇಧದ ಕುರಿತು ಗೋಡೆ ಬರಹ ಬರೆಸಬೇಕು

ಗದಗ: ಜಿಲ್ಲೆಯಲ್ಲಿ ತಂಬಾಕು ಮುಕ್ತ ಯುವ ಅಭಿಯಾನವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಈ ನಿಟ್ಟಿನಲ್ಲಿ ಇನ್ನೂ ಹೆಚ್ಚು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು.

ನಗರದ ಜಿಲ್ಲಾಡಳಿತ ಭವನದಲ್ಲಿ ಬುಧವಾರ ಜಿಲ್ಲಾ ತಂಬಾಕು ನಿಷೇಧ ಕೋಶದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರಸಕ್ತ ವರ್ಷ ಸೆ. 24ರಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ತಂಬಾಕು ಮುಕ್ತ ಯುವ ಅಭಿಯಾನ 2.0 ರಾಷ್ಟ್ರೀಯ ಅಭಿಯಾನಕ್ಕೆ ಚಾಲನೆ ನೀಡಿದ್ದು, ಗದಗ ಜಿಲ್ಲೆಯಲ್ಲಿ ತಂಬಾಕು ನಿಯಂತ್ರಣ ಕಾಯ್ದೆ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಕೋಟ್ಪಾ ದಾಳಿಗಳನ್ನು ಹಮ್ಮಿಕೊಳ್ಳಬೇಕು ಎಂದರು.

ತಂಬಾಕು ಮುಕ್ತ ಗ್ರಾಮ ಮತ್ತು ತಂಬಾಕು ಮುಕ್ತ ಶಾಲೆ, ಕಾಲೇಜು ಘೋಷಣೆಗೆ ಕ್ರಮ ಕೈಗೊಳ್ಳಲು ವಿವಿಧ ಇಲಾಖೆಯ ಮುಖ್ಯಸ್ಥರು ಕಾರ್ಯೋನ್ಮುಖರಾಗಬೇಕು. ಶಾಲಾ ಕಾಲೇಜುಗಳ ಒಳಾವರಣ ಮತ್ತು ಹೊರಗಡೆ ತಂಬಾಕು ಮಾರಾಟ ನಿಷೇಧದ ಕುರಿತು ಗೋಡೆ ಬರಹ ಬರೆಸಬೇಕು. ತಾಲೂಕು ಮಟ್ಟದಲ್ಲಿಯೂ ಈ ಕುರಿತು ಸಭೆ ಜರುಗಿಸಬೇಕು. ಬಸ್‌ ನಿಲ್ದಾಣ ಹಾಗೂ ಶಾಲಾ ಕಾಲೇಜುಗಳ ಪಕ್ಕದಲ್ಲಿ ತಂಬಾಕು ಮಾರಾಟ ಮಾಡದ ಹಾಗೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.

ಜಿಲ್ಲಾ ಸಮೀಕ್ಷಣಾಧಿಕಾರಿ ಡಾ. ವೆಂಕಟೇಶ ರಾಠೋಡ್ ಮಾತನಾಡಿ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದಿಂದ ಹಮ್ಮಿಕೊಳ್ಳಲಾದ ಕಾರ್ಯಕ್ರಮಗಳ ಕುರಿತು ವಿವರಿಸಿ, ಜಿಲ್ಲೆಯಲ್ಲಿ ಕಳೆದ ವರ್ಷ ಒಟ್ಟು 35 ಶಾಲಾ, ಕಾಲೇಜುಗಳಲ್ಲಿ ತಂಬಾಕು ವ್ಯಸನದಿಂದಾಗುವ ದುಷ್ಪರಿಣಾಮ ಹಾಗೂ ಕೋಟ್ಪಾ ಕಾಯ್ದೆ ಕುರಿತು ಶಿಕ್ಷಕರಿಗೆ, ವಿದ್ಯಾರ್ಥಿಗಳಿಗೆ ಆರೋಗ್ಯ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಶಾಲಾ, ಕಾಲೇಜುಗಳ ಮುಖ್ಯಸ್ಥರ ಅಧ್ಯಕ್ಷತೆಯಲ್ಲಿ ತಂಬಾಕು ನಿಯಂತ್ರಣ ಸಮಿತಿ ರಚನೆ ಮಾಡಲಾಗಿದೆ. ಕೋಟ್ಪಾ ದಾಳಿ ಹಮ್ಮಿಕೊಳ್ಳುವುದರ ಮೂಲಕ ವ್ಯಾಪಾರಸ್ಥರು, ತಂಬಾಕು ಬಳಕೆದಾರರಿಗೆ, ಸಾರ್ವಜನಿಕರಲ್ಲಿ ಕೋಟ್ಪಾ ಕಾಯ್ದೆ ಕುರಿತು ಜಾಗೃತಿ ಮೂಡಿಸಲಾಗಿದೆ. ಕೋಟ್ಪಾ ಕಾಯ್ದೆ ಉಲ್ಲಂಘನೆ ವಿರುದ್ಧ ಕ್ರಮ ಕೈಗೊಂಡು ಈ ವರೆಗೆ 29 ಕೋಟ್ಪಾ ದಾಳಿ ನಡೆಸಿ 569 ಪ್ರಕರಣಗಳನ್ನು ದಾಖಲಿಸಿ ₹90600 ದಂಡ ಸಂಗ್ರಹಿಸಲಾಗಿದೆ. ಕೋಟ್ಪಾ ಅನುಷ್ಠಾನ ಕುರಿತು ವಿವಿಧ ಇಲಾಖೆಗಳ ಅಧಿಕಾರಿ ಸಿಬ್ಬಂದಿಗೆ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅದೇ ರೀತಿ ಸಮುದಾಯ ಮಟ್ಟದಲ್ಲಿ ಕೇಂದ್ರೀಕೃತ ಗುಂಪು ಚರ್ಚೆಯ ಮೂಲಕ ಒಟ್ಟು 25 ಎಫ್.ಜಿ.ಡಿ ಕಾರ್ಯಕ್ರಮ ಜಿಲ್ಲೆಯ ನಗರ ಸ್ಥಳಿಯ ಸಂಸ್ಥೆಗಳ ಪೌರಕಾರ್ಮಿಕರಿಗೆ ತಂಬಾಕು ಬಳಕೆಯಿಂದಾಗುವ ದುಷ್ಪರಿಣಾಮ ಹಾಗೂ ಬಾಯಿ ಕ್ಯಾನ್ಸರ್ ತಪಾಸಣೆ ಮಾಡಲಾಗಿದೆ ಎಂದು ತಿಳಿಸಿದರು.

ಈ ವೇಳೆ ಜಿಪಂ ಸಿಇಒ ಭರತ್ ಎಸ್., ಹೆಚ್ಚುವರಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಎಂ.ಬಿ. ಸಂಕದ, ಡಿಎಚ್‌ಒ ಡಾ. ಎಸ್.ಎಸ್. ನೀಲಗುಂದ, ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ. ಮೀನಾಕ್ಷಿ, ಡಾ. ಬಿ.ಸಿ. ಕರಿಗೌಡ್ರ, ಗೋಪಾಲ ಸುರಪುರ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಿ.ಎಲ್. ಬಾರಾಟಕ್ಕೆ ಹಾಗೂ ಸಮಿತಿಯ ಸದಸ್ಯರು ಇದ್ದರು.