ನರಸಿಂಹರಾಜಪುರಈ ಬಾರಿಯ ಶೈಕ್ಷಣಿಕ ವರ್ಷದಲ್ಲಿ ಎಸ್.ಎಸ್.ಎಲ್.ಸಿ.ಯಲ್ಲಿ ಶೇ. 100 ರಷ್ಟು ಫಲಿತಾಂಶ ಬರಲು ಎಲ್ಲಾ ಪ್ರಯತ್ನ ಮಾಡುತ್ತೇವೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶಬನಾ ಅಂಜುಮ್ ತಿಳಿಸಿದರು.

ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆಗಾಗಿ ಭಾಷಾವಾರು ವಿಷಯ ಶಿಕ್ಷಕರ ಕಾರ್ಯಾಗಾರ

ಕನ್ನಡಪ್ರಭ ವಾರ್ತೆ, ನರಸಿಂಹರಾಜಪುರ

ಈ ಬಾರಿಯ ಶೈಕ್ಷಣಿಕ ವರ್ಷದಲ್ಲಿ ಎಸ್.ಎಸ್.ಎಲ್.ಸಿ.ಯಲ್ಲಿ ಶೇ. 00 ರಷ್ಟು ಫಲಿತಾಂಶ ಬರಲು ಎಲ್ಲಾ ಪ್ರಯತ್ನ ಮಾಡುತ್ತೇವೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶಬನಾ ಅಂಜುಮ್ ತಿಳಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಬಿ.ಆರ್.ಸಿ. ಸಭಾಂಗಣದಲ್ಲಿ ಪ್ರೌಢ ಶಾಲಾ ಶಿಕ್ಷಕರಿಗೆ ನಡೆದ ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣಾ ಭಾಷಾವಾರು ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ಈ ಕಾರ್ಯಾಗಾರದಲ್ಲಿ 6 ವಿಷಯಕ್ಕೆ ಸಂಬಂಧಿಸಿದಂತೆ ತರಬೇತಿ ನೀಡಲಾಗುತ್ತದೆ. ಮಾ.18 ಕ್ಕೆ ಎಸ್.ಎಸ್.ಎಲ್.ಸಿ. ಪರೀಕ್ಷೆ ಪ್ರಾರಂಭವಾಗಲಿದೆ. ಮಕ್ಕಳ ಕಲಿಕೆ ಉತ್ತಮವಾಗಬೇಕು ಎಂದು ಕ್ರಿಯಾ ಯೋಜನೆ ರೂಪಿಸಲಾಗುತ್ತಿದೆ. ಜಿಲ್ಲೆಯಲ್ಲೇ ಪ್ರಥಮ ಸ್ಥಾನ ಪಡೆಯಬೇಕು ಎಂದು ಗುರಿ ಹೊಂದಲಾಗಿದೆ. ಶೇ. 100 ರಷ್ಟು ಫಲಿತಾಂಶ ಬರಲು ಎಲ್ಲಾ ಶಿಕ್ಷಕರು ಪ್ರಯತ್ನ ನಡೆಸಬೇಕು. ಹಾಸನದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ನೇತೃತ್ವದಲ್ಲಿ ನಡೆದ ಕಾರ್ಯಾಗಾರದಲ್ಲಿ ಎಸ್.ಎಸ್.ಎಲ್.ಸಿ. ಫಲಿತಾಂಶ ಹೆಚ್ಚಳದ ಬಗ್ಗೆ ನಿರ್ದೇಶನ ನೀಡಿದ್ದಾರೆ. ತಾಲೂಕಿನಲ್ಲಿ ಶೇ.100 ರಷ್ಟು ಫಲಿತಾಂಶ ಬರುವ ಜೊತೆಗೆ ಪ್ರತಿ ಶಾಲೆ ಯಲ್ಲೂ ಫಲಿತಾಂಶ ಹೆಚ್ಚಳವಾಗಬೇಕಾಗಿದೆ. ಈ ಹಿನ್ನೆಲೆಯಲ್ಲಿ ನರಸಿಂಹರಾಜಪುರ ಹಾಗೂ ಬಾಳೆಹೊನ್ನೂರಿನಲ್ಲಿ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ನಡೆಸಲಾಗುತ್ತಿದೆ ಎಂದರು.

ಸಭೆಯಲ್ಲಿ ಉಪಸ್ಥಿತರಿದ್ದ ಡಯಟ್ ಉಪನ್ಯಾಸಕ ಸೈಪ್ ಉಲ್ಲಾ ಖಾನ್ ಮಾತನಾಡಿ, ಪ್ರತಿ ಶಾಲೆಯಲ್ಲೂ ಎಸ್.ಎಸ್.ಎಲ್.ಸಿ. ಯಲ್ಲಿ ಶೇ.100 ರಷ್ಟು ಫಲಿತಾಂಶ ಪಡೆಯಲು ತರಬೇತಿ ಕಾರ್ಯಾಗಾರ ನಡೆಸಲಾಗುತ್ತಿದೆ ಎಂದರು. ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ಸೇವ್ಯಾನಾಯಕ್ ಮಾತನಾಡಿ, ಎಲ್ಲಾ ಶಿಕ್ಷಕರು ಉತ್ತಮ ಫಲಿತಾಂಶ ಬರಲು ಪ್ರಯತ್ನ ನಡೆಸಬೇಕು ಎಂದು ಕರೆ ನೀಡಿದರು.

ಸಭೆಯಲ್ಲಿ ಡಯಟ್ ಹಿರಿಯ ಉಪನ್ಯಾಸಕ ಅಂತೋಣಿ ರಾಜ್, ಶಿಕ್ಷಣ ಸಂಯೋಜಕಿ ಸಂಗೀತ ಇದ್ದರು. ಕನ್ನಡ, ಇಂಗ್ಲೀಷ್,ಹಿಂದಿ ವಿಷಯಕ್ಕೆ ಸಂಬಂಧಿಸಿದಂತೆ ನಡೆದ ಕಾರ್ಯಾಗಾರದಲ್ಲಿ 140 ಶಿಕ್ಷಕರು ಭಾಗವಹಿಸಿದ್ದರು.