ಶಾಲೆಗಳಲ್ಲಿ ದೊರೆಯುವ ಸೌಲಭ್ಯ ಪಡೆದುಕೊಂಡು ಗ್ರಾಮೀಣ ಪ್ರದೇಶದ ಮಕ್ಕಳು ಸಾಧನೆ ಮಾಡಬೇಕು. ನಗರ ಪ್ರದೇಶದ ಮಕ್ಕಳಿಗೆ ಪೈಪೋಟಿ ಕೊಡುವ ನಿಟ್ಟಿನಲ್ಲಿ ಮಕ್ಕಳು ಶಿಕ್ಷಣ ಕ್ಷೇತ್ರದಲ್ಲಿ ಪ್ರಗತಿ ಸಾಧನೆ ಮಾಡಬೇಕು. ಇತ್ತೀಚಿನ ದಿನಗಳಲ್ಲಿ ನನ್ನ ಯುವ ಸಮುದಾಯ ಹಲವಾರು ದುಶ್ಚಟಗಳಿಗೆ ಒಳಗಾಗಿ ತಮ್ಮ ಭವಿಷ್ಯವನ್ನು ನಾಶ ಮಾಡಿಕೊಳ್ಳುತ್ತಿದ್ದಾರೆ.
ಕನ್ನಡಪ್ರಭ ವಾರ್ತೆ ಪಾಂಡವಪುರ
ಗ್ರಾಮೀಣ ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ನನ್ನ ಅಧಿಕಾರದ ಅವಧಿಯಲ್ಲಿ ಸಾಕಷ್ಟು ಶ್ರಮಿಸಿದ್ದೇನೆ ಎಂದು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಹೇಳಿದರು.ಪಟ್ಟಣದ ಕಸಾಪ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್‌ನಿಂದ ಏರ್ಪಡಿಸಿದ್ದ ತಾಲೂಕಿನಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕಗಳಿಸಿದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ನಾನು ಶಾಸಕ, ಸಚಿವನಾಗಿ ಕೆಲಸ ಮಾಡುವಾಗ ಕ್ಷೇತ್ರದಲ್ಲಿ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ 2006ರಲ್ಲಿ ಎಚ್.ಡಿ. ಕುಮಾರಸ್ವಾಮಿ ಅವರು ಸಿಎಂ ಆಗಿದ್ದಾಗ ರಾಜ್ಯದಲ್ಲಿ ಶೈಕ್ಷಣಿಕ ಕ್ರಾಂತಿಯೇ ನಡೆಯಿತು. ನಮ್ಮ ಕ್ಷೇತ್ರದ 12 ಹೊಸ ಪ್ರೌಢಶಾಲೆಗಳು, 5 ಪಿಯು ಕಾಲೇಜು ಹಾಗೂ 3 ಡಿಗ್ರಿ ಕಾಲೇಜುಗಳು ಹಾಗೂ ಹೋಬಳಿಗೆ ಒಂದೊಂದು ವಸತಿ ಶಾಲೆಗಳನ್ನು ತಂದು ಗ್ರಾಮೀಣ, ನಗರ ಪ್ರದೇಶದ ಬಡ ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಸಹಕಾರಿಯಾಗಿ ಕೆಲಸ ಮಾಡಿದ್ದೇನೆ ಎಂದರು.ಶಾಲೆಗಳಲ್ಲಿ ದೊರೆಯುವ ಸೌಲಭ್ಯ ಪಡೆದುಕೊಂಡು ಗ್ರಾಮೀಣ ಪ್ರದೇಶದ ಮಕ್ಕಳು ಸಾಧನೆ ಮಾಡಬೇಕು. ನಗರ ಪ್ರದೇಶದ ಮಕ್ಕಳಿಗೆ ಪೈಪೋಟಿ ಕೊಡುವ ನಿಟ್ಟಿನಲ್ಲಿ ಮಕ್ಕಳು ಶಿಕ್ಷಣ ಕ್ಷೇತ್ರದಲ್ಲಿ ಪ್ರಗತಿ ಸಾಧನೆ ಮಾಡಬೇಕು ಎಂದರು.
ಇತ್ತೀಚಿನ ದಿನಗಳಲ್ಲಿ ನನ್ನ ಯುವ ಸಮುದಾಯ ಹಲವಾರು ದುಶ್ಚಟಗಳಿಗೆ ಒಳಗಾಗಿ ತಮ್ಮ ಭವಿಷ್ಯವನ್ನು ನಾಶ ಮಾಡಿಕೊಳ್ಳುತ್ತಿದ್ದಾರೆ. ಪೋಷಕರು ತಮ್ಮ ಮೇಲೆ ಸಾಕಷ್ಟು ನಂಬಿಕೆ, ಕನಸ್ಸುಗಳನ್ನು ಕಂಡಿರುತ್ತಾರೆ. ಹಾಗಾಗಿ ಯುವ ಸಮುದಾಯ ಜಾಗೃತರಾಗಿ ದುಶ್ಚಟಗಳಿಂದ ದೂರು ಉಳಿದು ಉತ್ತಮ ಶಿಕ್ಷಣಪಡೆದು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.ಕನ್ನಡ ಸಾಹಿತ್ಯ ಪರಿಷತ್‌ನಿಂದ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸುತ್ತಿರುವುದು ನಿಜಕ್ಕೂ ಶ್ಲಾಘನೀಯ. ಮಕ್ಕಳು ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸವನ್ನು ಪೋಷಕರು, ಶಿಕ್ಷಕರು ಸೇರಿದಂತೆ ಪ್ರತಿಯೊಬ್ಬರು ಮಾಡಬೇಕು ಎಂದರು.
ಶಾಸಕ ದರ್ಶನ್ ಪುಟ್ಟಣ್ಣಯ್ಯ ಮಾತನಾಡಿ, ವಿದ್ಯಾರ್ಥಿಗಳು ತಮಗೆ ಆಸಕ್ತಿ ಇರುವ ಕ್ಷೇತ್ರಗಳ ಕಡೆಗೆ ತೊಡಗಿಸಿಕೊಂಡು ಸಾಧನೆ ಮಾಡಬೇಕು. ಪೋಷಕರು ಸಹ ಮಕ್ಕಳ ಆಸಕ್ತಿಗೆ ಕ್ಷೇತ್ರದ ಕಡೆಗೆ ಹೋಗಲು ಸಹಕಾರ ನೀಡಬೇಕು ಎಂದರು.ಇದೇ ವೇಳೆ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ತಾಲೂಕಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಪಡೆದ ತಾಲೂಕಿನ 183 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಅಭಿನಂಧಿಸಲಾಯಿತು.
ಸಮಾರಂಭದಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಮೂರ್ತಿ, ಉಪವಿಭಾಗಾಧಿಕಾರಿ ಶ್ರೀನಿವಾಸ್, ಸಮಾಜ ಸೇವಕ ಅರವಿಂದ್ ರಾಘವನ್, ರೆವಿನ್ಯೂ ಇನ್ಸ್‌ಪೆಕ್ಟರ್ ಟಿ.ಪಿ.ರೇವಣ್ಣ, ಕಸಾಪ ಅಧ್ಯಕ್ಷ ಮೇನಾಗರ ಪ್ರಕಾಶ್ ಸೇರಿದಂತೆ ಕಸಾಪ ಪದಾಧಿಕಾರಿಗಳು ಹಲವರು ಹಾಜರಿದ್ದರು.