500 ಮಂದಿ ನಿರುದ್ಯೋಗಿಗಳಿಗೆ ಉದ್ಯೋಗಾವಕಾಶಕ್ಕೆ ಪ್ರಯತ್ನ

| Published : Feb 14 2025, 12:33 AM IST

ಸಾರಾಂಶ

ಉದ್ಯೋಗ ಮೇಳ ಆಯೋಜನೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾತನಾಡಿದರು.

ಮಾರ್ಚ್ ತಿಂಗಳಲ್ಲಿ ಉದ್ಯೋಗ ಮೇಳ । ಪೂರ್ವ ಸಿದ್ಧತೆಗೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಾಕೀತುಕನ್ನಡಪ್ರಭ ವಾರ್ತೆ ಚಿತ್ರದುರ್ಗ

ಜಿಲ್ಲೆಯ ಕನಿಷ್ಟ 500 ಮಂದಿ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸುವ ಸಂಬಂಧ ಗಂಭೀರ ಪ್ರಯತ್ನ ಮಾಡಲಾಗಿದ್ದು ಚಿತ್ರದುರ್ಗ ನಗರದಲ್ಲಿ ಉದ್ಯೋಗ ಮೇಳವನ್ನು ಮುಂಬರುವ ಮಾರ್ಚ್‌ನಲ್ಲಿ 2ನೇ ವಾರದಲ್ಲಿ ಆಯೋಜಿಸಲಾಗುತ್ತಿದೆ. ಮೇಳದ ಯಶಸ್ವಿಗೆ ಉಪಸಮಿತಿಗಳನ್ನು ರಚಿಸಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಉದ್ಯೋಗ ಮೇಳ ಆಯೋಜಿಸುವ ಕುರಿತು ಗುರುವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, 2024-25ನೇ ಸಾಲಿಗೆ ಸಂಜೀವಿನಿ-ಕೆಎಸ್‍ಅರ್‌ಎಲ್‍ಪಿಎಸ್-ಡಿಡಿಯುಜಿಕೆವೈ ಯೋಜನೆ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಚಿತ್ರದುರ್ಗ ನಗರದ ಸರ್ಕಾರಿ ವಿಜ್ಞಾನ ಕಾಲೇಜು ಆವರಣದಲ್ಲಿ ಆಯೋಜಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಸೂಚಿಸಿದರು.

ಉದ್ಯೋಗ ಮೇಳ ಆಯೋಜನೆಗೆ ಸಂಬಂಧಪಟ್ಟಂತೆ ಉಪವಿಭಾಗಾಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಕ ಮಾಡಿ, ಶಿಷ್ಟಾಚಾರದ ಪ್ರಕಾರ ಆಹ್ವಾನ ಪತ್ರಿಕೆಯನ್ನು ಮುದ್ರಿಸಿ, ಜನಪ್ರತಿನಿಧಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು ಎಂದು ಹೇಳಿದರು.

ಜಿಲ್ಲೆಯಲ್ಲಿ ನಡೆಯುವ ಉದ್ಯೋಗ ಮೇಳ ಆಯೋಜನೆ ಕುರಿತು ಕಾಲೇಜುಗಳಲ್ಲಿ ಹಾಗೂ ವೃತಿಪರ ಶಿಕ್ಷಣ ಸಂಸ್ಥೆಗಳಿಗೆ ಹಾಗೂ ಯುವನಿಧಿ ಯೋಜನೆಯ ಫಲಾನುಭವಿಗಳಿಗೆ ಉದ್ಯೋಗ ಮೇಳದ ಬಗ್ಗೆ ಮಾಹಿತಿ ನೀಡಬೇಕು. ಮೇಳದಲ್ಲಿ ಭಾಗವಹಿಸುವ ಉದ್ಯೋಗಾಂಕ್ಷಿಗಳಿಗೆ ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲ ಸೌಕರ್ಯ ಕಲ್ಪಿಸಬೇಕು. ಉದ್ಯೋಗ ಮೇಳದ ನೋಂದಣಿ ಪ್ರಕ್ರಿಯೆ ಪ್ರಾರಂಭಕ್ಕೆ ಹಾಗೂ ನೊಂದಣಿ ಪ್ರಕ್ರಿಯೆ ಕುರಿತು ವ್ಯಾಪಕ ಪ್ರಚಾರ ನೀಡಬೇಕು. ಜಿಲ್ಲಾ ವೆಬ್‍ಸೈಟ್‍ನಲ್ಲಿಯೂ ಮಾಹಿತಿ ಒದಗಿಸಲು ಕ್ರಮ ಕೈಗೊಳ್ಳಬೇಕು. ಜಿಲ್ಲೆಯ ಉದ್ಯೋಗಾಂಕ್ಷಿಗಳಿಗೆ ಉದ್ಯೋಗ ನೀಡುವ ನಿಟ್ಟಿನಲ್ಲಿ ಉದ್ಯೋಗ ಮೇಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಖಾಸಗಿ ಕಂಪನಿಗಳು ಭಾಗವಹಿಸಲು ವಿವಿಧ ಇಲಾಖೆಗಳು ಅಗತ್ಯ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲೆಯ ಹಾಗೂ ರಾಜ್ಯದ ವಿವಿಧ ಕಂಪನಿಗಳನ್ನು ಆಹ್ವಾನಿಸಲು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಬೇಕು. ಗಣಿ ಮತ್ತು ಭೂವಿಜ್ಞಾನ ಉಪನಿರ್ದೇಶಕರು, ಜಿಲ್ಲಾ ಉದ್ಯೋಗಾಧಿಕಾರಿಗಳು, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು, ಜಿಟಿಟಿಸಿ ಪ್ರಾಂಶುಪಾಲರು ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಸಮಿತಿಯಲ್ಲಿ ಇರಬೇಕು. ಉದ್ಯೋಗ ಮೇಳದಲ್ಲಿ ಕನಿಷ್ಟ 300 ರಿಂದ 500 ಯುವ ಜನರಿಗೆ ಉದ್ಯೋಗ ಕಲ್ಪಿಸುವಂತಾಗಬೇಕು ಎಂದು ಹೇಳಿದರು.

ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯೊಂದಿಗೆ ಸಂಪರ್ಕ ಸಾಧಿಸಿ, ಬೆಂಗಳೂರಿನ ಬಹುರಾಷ್ಟ್ರೀಯ ಕಂಪನಿಗಳಲ್ಲಿ ಉದ್ಯೋಗಾವಕಾಶದ ಅವಶ್ಯವಿದೆ. ಹಾಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಕಂಪನಿಗಳ ಪ್ರತಿನಿಧಿಗಳು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವಂತೆ ಆಹ್ವಾನ ನೀಡಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಸಲಹೆ ನೀಡಿದರು.

ಜಿಪಂ ಮುಖ್ಯ ಯೋಜನಾಧಿಕಾರಿ ಸಿ.ಎಸ್.ಗಾಯತ್ರಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಹೇಂದ್ರ ಕುಮಾರ್, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಕುಮಾರ್ ಬಾಬು, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ವೇಮಣ್ಣ, ಜಿಲ್ಲಾ ಉದ್ಯೋಗಾಧಿಕಾರಿ ರವೀಂದ್ರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಪದವಿ, ಐಟಿಐ, ಜಿಟಿಟಿಸಿ, ಇಂಜಿನಿಯರಿಂಗ್ ಕಾಲೇಜುಗಳ ಪ್ರಾಂಶುಪಾಲರು ಇದ್ದರು.