ಸಲ್ಲದ ಕಾರಣಕ್ಕೆ ಮತದಾನ ಬಹಿಷ್ಕಾರ ಸರಿಯಲ್ಲ

| Published : Mar 22 2024, 01:03 AM IST

ಸಾರಾಂಶ

ಸಲ್ಲದ ಕಾರಣಕ್ಕೆ ಮತದಾನ ಬಹಿಷ್ಕರಿಸುವುದು ಸರಿಯಾದ ನಡೆ ಅಲ್ಲ. ಪ್ರತಿಯೊಬ್ಬರೂ ಮತದಾನ ಪ್ರಕ್ರಿಯೆಯಲ್ಲಿ ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಳ್ಳುವುದು ಅಗತ್ಯ.

ಚಿತ್ರದುರ್ಗ: ಸಲ್ಲದ ಕಾರಣಕ್ಕೆ ಮತದಾನ ಬಹಿಷ್ಕರಿಸುವುದು ಸರಿಯಾದ ನಡೆ ಅಲ್ಲ. ಪ್ರತಿಯೊಬ್ಬರೂ ಮತದಾನ ಪ್ರಕ್ರಿಯೆಯಲ್ಲಿ ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಳ್ಳುವುದು ಅಗತ್ಯವೆಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸಲಹೆ ಮಾಡಿದರು.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತದಾನ ಮತ್ತು ಚುನಾವಣಾ ನೀತಿಸಂಹಿತೆಯ ಕುರಿತು ಗುರುವಾರ ಏರ್ಪಡಿಸಿದ್ದ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಮ್ಮನ್ನಾಳುವ ಸಮರ್ಥ ಜನನಾಯಕನನ್ನು ಆಯ್ಕೆ ಮಾಡುವ ಮಹತ್ವದ ಕಾರ್ಯದಲ್ಲಿ ಜಿಲ್ಲೆಯ ಎಲ್ಲಾ ಅರ್ಹ ಮತದಾರರು ಸಕ್ರಿಯವಾಗಿ ಪಾಲ್ಗೊಳ್ಳಬೇಕು ಹಾಗೂ ಮತದಾನ ಮಾಡಲು ಇತರರನ್ನು ಪ್ರೇರೇಪಿಸಬೇಕೆಂದರು.

ಸಾಮಾಜಿಕ ವ್ಯವಸ್ಥೆಯಲ್ಲಿರುವ ನಾವು ಸಂವಿಧಾನ ಆಶಯಗಳಂತೆ ಹಕ್ಕು ಮತ್ತು ಕರ್ತವ್ಯಗಳನ್ನು ಹೊಂದಿದ್ದೇವೆ. ಅಂತೆಯೇ ಪ್ರತಿಯೊಬ್ಬರೂ ಸಕಾಲದಲ್ಲಿ ಹಕ್ಕು ಮತ್ತು ಕರ್ತವ್ಯಗಳನ್ನು ನಿರ್ವಹಿಸಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಲು ಹಾಗೂ ಇನ್ನಷ್ಟು ಗಟ್ಟಿಗೊಳಿಸಲು ಮತದಾನ ಉತ್ತಮ ವಿಧಾನವಾಗಿದೆ. ಯಾವುದೋ ಸಲ್ಲದ ಕಾರಣಕ್ಕಾಗಿ ಮತದಾನದಿಂದ ಹೊರಗುಳಿಯುವುದು ಕೂಡ ಸರಿಯಲ್ಲ ಎಂದರು.

ನಗರದ ಪ್ರದೇಶಗಳಲ್ಲಿರುವ ಬಹುಸಂಖ್ಯಾತ ಬುದ್ಧಿವಂತರು, ವಿದ್ಯಾವಂತರು ಮತದಾನದಿಂದ ಹೊರಗುಳಿಯುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಪ್ರಸ್ತುತ ಚುನಾವಣೆಯಲ್ಲಿ ಚಿತ್ರದುರ್ಗ ನಗರ ಮತ್ತು ಗ್ರಾಮೀಣ ಪ್ರದೇಶದ ಮತದಾರರೆಲ್ಲರೂ ಯಾವುದೇ ಆಸೆ, ಆಮಿಷಗಳಿಗೆ ಬಲಿಯಾಗದೇ, ನಿರ್ಭೀತಿಯಿಂದ ಮತದಾನ ಮಾಡುವ ಮೂಲಕ ಹಕ್ಕನ್ನು ಚಲಾಯಿಸುವಂತೆ ಅವರು ಮನವಿ ಮಾಡಿದರು.

ನಗರ ಪ್ರದೇಶ ಸೇರಿದಂತೆ ಹಿಂದಿನ ಚುನಾವಣೆ ಸಂದರ್ಭದಲ್ಲಿ ಕಡಿಮೆ ಮತದಾನವಾಗಿರುವ ಮತಗಟ್ಟೆ ಪ್ರದೇಶಗಳ ವ್ಯಾಪ್ತಿಯಲ್ಲಿ ಮತದಾನದ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾರರ ಜಾಗೃತಿಗಾಗಿ ಅನೇಕ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗುವುದು. ಅಲ್ಲದೇ ನಗರ ನಿವಾಸಿಗಳ ಪ್ರತಿ ಮತದಾರರಿಗೆ ಪ್ರತ್ಯೇಕವಾಗಿ ಪತ್ರ ಬರೆದು ಮನವಿ ಮಾಡಿಕೊಳ್ಳುವುದಾಗಿ ಅವರು ನುಡಿದರು.

ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನಡೆಯುವ ಚುನಾವಣೆ ಪ್ರಕ್ರಿಯೆಯು ಮುಕ್ತ ಮತ್ತು ನ್ಯಾಯಸಮ್ಮತವಾಗಿ ನಡೆಯಲು ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳ ನೇತೃತ್ವದಲ್ಲಿ ಹಲವು ಸಮಿತಿಗಳನ್ನು ರಚಿಸಲಾಗಿದ್ದು, ಅಕ್ರಮ ಚಟುವಟಿಕೆಗಳ ವಿರುದ್ಧ ಹದ್ದಿನಕಣ್ಣಿಡಲಾಗಿದೆ. ವ್ಯವಸ್ಥಿತ ನಿರ್ವಹಣೆಗಾಗಿ ಪ್ರತಿ ತಾಲೂಕುಗಳಿಗೆ ಸಹಾಯಕ ಚುನಾವಣಾಧಿಕಾರಿಗಳನ್ನು ನಿಯೋಜಿಸಲಾಗಿದೆ. ಜಿಲ್ಲೆಯ ಹಲವು ಸ್ಥಳಗಳಲ್ಲಿ ಚೆಕ್‍ಪೋಸ್ಟ್‌ಗಳನ್ನು ರಚಿಸಲಾಗಿದ್ದು, ಅಗತ್ಯ ಸಿಬ್ಬಂದಿ ನಿಯೋಜಿಸಲಾಗಿದೆ ಎಂದರು.

ಮಾ.16ರಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದಿದೆ. ಪ್ರಸ್ತುತ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಬರ ನಿರ್ವಹಣೆ ಕಾರ್ಯವೂ ಸವಾಲಿನದ್ದಾಗಿದೆ. ದೈನಂದಿನ ಕಚೇರಿಯ ಅಭಿವೃದ್ಧಿಪರ ಕಾರ್ಯಗಳೊಂದಿಗೆ ಜನಸಾಮಾನ್ಯರ ಕೆಲಸ-ಕಾರ್ಯಗಳಿಗೆ ಯಾವುದೇ ಅಡಚಣೆ ಉಂಟಾಗದಂತೆ, ನಿಯಮದ ಉಲ್ಲಂಘನೆಯಾಗದಂತೆ ಚುನಾವಣಾ ಕಾರ್ಯನಿರ್ವಹಿಸಲು ಕಂದಾಯ ಇಲಾಖೆ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಕೆಲವು ತುರ್ತು ಸಂದರ್ಭಗಳಲ್ಲಿ ಇಲಾಖಾ ಅಧಿಕಾರಿಗಳು ಸಮನ್ವಯತೆ ಸಾಧಿಸಿಕೊಂಡು ಕಾರ್ಯನಿರ್ವಹಿಸಬೇಕು. ಜಿಲ್ಲೆಯಲ್ಲಿ ಶಾಂತಿಯುತ ಚುನಾವಣೆ ನಡೆಯುವಲ್ಲಿ ಸಾರ್ವಜನಿಕರೂ ಸಹಕರಿಸಬೇಕು. ಜನರು ಅಹವಾಲುಗಳನ್ನು ಎಂದಿನಂತೆ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿ, ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸದಾ ಅವಕಾಶವಿರಲಿದೆ.

ಮತದಾರರ ಪಟ್ಟಿಯಲ್ಲಿ ಈವರೆಗೂ ಹೆಸರು ನೋಂದಾಯಿಸಿಕೊಳ್ಳದಿರುವ ಅರ್ಹ ಮತದಾರರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಹಾಗೂ ತಿದ್ದುಪಡಿ ಮಾಡಿಕೊಳ್ಳಲು, ಹೆಸರಿರುವುದನ್ನು ಖಚಿತಪಡಿಸಿಕೊಳ್ಳಲು ಅವಕಾಶವಿದೆ. ಮತದಾರರು ಸೌಲಭ್ಯದ ಲಾಭ ಪಡೆದುಕೊಳ್ಳುವಂತೆ ಅವರು ತಿಳಿಸಿದರು.

ಚುನಾವಣಾ ನೀತಿಸಂಹಿತೆ ಜಾರಿಯಾದ ನಂತರ ಈವರೆಗೆ ಅಬಕಾರಿ, ಪೊಲೀಸ್ ಸೇರಿದಂತೆ ಸುಮಾರು 87ಕ್ಕೂ ಹೆಚ್ಚಿನ ಮೊಕದ್ದಮೆಗಳನ್ನು ದಾಖಲಿಸಲಾಗಿದೆ. ಒಂದು ಪ್ರಕರಣದಲ್ಲಿ 1.60 ಲಕ್ಷ ರು.ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. 50 ಸಾವಿರ ರು.ಗಿಂತ ಹೆಚ್ಚಿನ ಹಣದೊಂದಿಗೆ ಊರಿಂದೂರಿಗೆ ಪ್ರಯಾಣ ಮಾಡುವವರು ಅಗತ್ಯ ದಾಖಲೆಗಳನ್ನು ಹೊಂದಿರಬೇಕು. ಅಲ್ಲದೇ 2 ಲಕ್ಷ ರು.ಗಿಂತ ಹೆಚ್ಚಿನ ವಹಿವಾಟು ಅಥವಾ ಸಾಗಾಟ ಪತ್ತೆಯಾದಲ್ಲಿ ನಿಯಮಾನುಸಾರ ಕ್ರಮಕೈಗೊಳ್ಳಲಾಗುವುದು ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಆರ್.ಮಾರುತಿ, ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಬಿ.ದಿನೇಶ್ ಗೌಡಗೆರೆ, ಪ್ರಧಾನ ಕಾರ್ಯದರ್ಶಿ ಸಿದ್ದರಾಜು ಇದ್ದರು.