ಚುನಾವಣಾ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭ

| Published : Mar 29 2024, 12:52 AM IST

ಸಾರಾಂಶ

ನಾಮಪತ್ರ ಸಲ್ಲಿಕೆಗೆ ಆಗಮಿಸುವ ಅಭ್ಯರ್ಥಿಗಳ ಜೊತೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬೆಂಬಲಿಗರು ಕೂಡ ಆಗಮಿಸಲಿದ್ದು ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ನಾಮಪತ್ರ ಸಲ್ಲಿಕೆ ಕೇಂದ್ರಗಳ ಬಳಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣೆ ಸಂಬಂಧ ಚಿಕ್ಕಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಗುರುವಾರ ಅಧಿಸೂಚನೆ ಹೊರಡಿಸಿದರು.

ಚುನಾವಣಾ ಅಧಿಸೂಚನೆ ಹೊರಡಿಸುವುದರೊಂದಿಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಅವಧಿ ಪ್ರಾರಂಭವಾಗಿದೆ. ನಾಮಪತ್ರಗಳನ್ನು ಉಮೇದುವಾರರು ಅಥವಾ ಅವರ ಸೂಚಕರು ಚುನಾವಣಾಧಿಕಾರಿಗಳಾದ ಪಿ.ಎನ್.ರವೀಂದ್ರ ಅಥವಾ ಸಹಾಯಕ ಚುನಾವಣಾಧಿಕಾರಿ ಹಾಗೂ ಅಪರ ಜಿಲ್ಲಾಧಿಕಾರಿಗಳಾದ ಡಾ. ಎನ್.ತಿಪ್ಪೇಸ್ವಾಮಿ ಅವರಿಗೆ ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ರಸ್ತೆಯಲ್ಲಿರುವ ಜಿಲ್ಲಾಡಳಿತ ಭವನದ ಎಫ್.ಎ-4 ರಲ್ಲಿರುವ ಚುನಾವಣಾಧಿಕಾರಿಗಳ ಕಚೇರಿಗೆ ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆಯ ವರಿಗೆ (ಸರ್ಕಾರಿ ರಜಾ ದಿನ ಹೊರತುಪಡಿಸಿ) ಏಪ್ರಿಲ್ 4 ರವರೆಗೆ ನಾಮಪತ್ರ ಸಲ್ಲಿಸಬಹುದು. ನಾಮಪತ್ರದ ನಮೂನೆಗಳನ್ನು ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಹಾಗೂ ಸದರಿ ಸಮಯದಲ್ಲಿ ಪಡೆಯಬಹುದಾಗಿದೆ.

ನಾಮಪತ್ರಗಳ ಪರಿಶೀಲನಾ ಕಾರ್ಯವು ಏಪ್ರಿಲ್ 5 ರ ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ನಡೆಯಲಿದೆ. ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳಲು ಏಪ್ರಿಲ್ 8ರ ಸೋಮವಾರ ಮಧ್ಯಾಹ್ನ 3 ಗಂಟೆ ಯವರೆಗೆ ಅವಕಾಶವಿರುತ್ತದೆ. ಮತದಾನ ಏಪ್ರಿಲ್ 26 ರಂದು ಬೆಳಿಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ನಿಗದಿಯಾಗಿದೆ ಎಂದು ತಿಳಿಸಿದರು. ನಾಮಪತ್ರ ಸಲ್ಲಿಕೆಗೆ ಆಗಮಿಸುವ ಅಭ್ಯರ್ಥಿಗಳ ಜೊತೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬೆಂಬಲಿಗರು ಕೂಡ ಆಗಮಿಸಲಿದ್ದು ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ನಾಮಪತ್ರ ಸಲ್ಲಿಕೆ ಕೇಂದ್ರಗಳ ಬಳಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಅಭ್ಯರ್ಥಿಗಳ ಬೆಂಬಲಿಗರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ಸಾಧ್ಯತೆ ಇದೆ. ಇದರಿಂದ ಕಾನೂನು ಸುವ್ಯವಸ್ಥೆಗೆ ತೊಂದರೆ ಆಗುವ ಸಾಧ್ಯತೆ ಹಿನ್ನೆಲೆ ಶಾಂತಿ ಸುವ್ಯವಸ್ಥೆ ಕಾಪಾಡಲು ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.