ಕನ್ನಡಪ್ರಭ ವಾರ್ತೆ ಅಥಣಿ ಸಕಾಲಕ್ಕೆ ಬಿಲ್ ಪಾವತಿಸದಿರುವುದು, ಬೇರೆ ಜಿಲ್ಲೆಯ ಗುತ್ತಿಗೆದಾರರಿಗೆ ಕಾಮಗಾರಿ ನೀಡುವುದು ಹಾಗೂ ಅಧಿಕಾರಿಗಳು ಅನಧಿಕೃತ ಕೆಲಸಗಳಿಗೆ ಒತ್ತಾಯಿಸುತ್ತಿರುವುದನ್ನು ಖಂಡಿಸಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ಅಥಣಿ ಘಟಕದ ಸದಸ್ಯರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಆರನೇ ದಿನಕ್ಕೆ ಕಾಲಿಟ್ಟಿದೆ.

ತಾಲೂಕು ವಿದ್ಯುತ್ ಗುತ್ತಿಗೆದಾರರ ಸಂಘದ ಅಧ್ಯಕ್ಷ ಜಗದೀಶ್ ಅವಟಿ ಮಾತನಾಡಿ, ಇಲಾಖೆಯ ನಿಯಮದಂತೆ ಗುತ್ತಿಗೆ ಪಡೆದು ಕಾಮಗಾರಿಗಳನ್ನು ಪೂರ್ಣಗೊಳಿಸಿದರೂ 4 ತಿಂಗಳು ಕಳೆದಿವೆ. ಆದರೆ, ಈವರೆಗೆ ಬಿಲ್ ಪಾವತಿಯಾಗಿಲ್ಲ. ಇದರಿಂದ ಗುತ್ತಿಗೆದಾರರು ತೀವ್ರ ಆರ್ಥಿಕ ಸಂಕಷ್ಟ ಎದುರಿಸುವಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.ಅಥಣಿ ಮತ್ತು ಕಾಗವಾಡ ತಾಲೂಕಿನ ಕಾಮಗಾರಿಗಳನ್ನು ಸ್ಥಳೀಯ ಗುತ್ತಿಗೆದಾರರಿಗೆ ನೀಡುವ ಬದಲು ಬೇರೆ ಜಿಲ್ಲೆಯ ಗುತ್ತಿಗೆದಾರರಿಗೆ ನೀಡಲಾಗುತ್ತಿದೆ. ಇದರಿಂದ ಸ್ಥಳೀಯ ಸಂಘದ ಸದಸ್ಯರಿಗೆ ಅನ್ಯಾಯವಾಗುತ್ತಿದೆ. ಅಲ್ಲದೆ, ಸ್ಥಳೀಯ ಶಾಖಾಧಿಕಾರಿಗಳು ಹಾಗೂ ಗ್ರಾಮ ಪ್ರತಿನಿಧಿಗಳು ತಮ್ಮ ಸಂಬಂಧಿಕರ ಹೆಸರಿನಲ್ಲಿ ಗುತ್ತಿಗೆ ಪಡೆದು ಕಾಮಗಾರಿಗಳನ್ನು ನಿರ್ವಹಿಸುತ್ತಿದ್ದಾರೆ. ಈ ಕುರಿತು ಮೇಲಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಶಿಸ್ತುಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.ಇಲ್ಲಿನ ಶಾಖಾಧಿಕಾರಿಗಳು ಪ್ರಭಾವಿ ವ್ಯಕ್ತಿಗಳ ಹೆಸರು ಹೇಳಿಕೊಂಡು ಅನಧಿಕೃತವಾಗಿ ಕಾಮಗಾರಿಗಳನ್ನು ಮಾಡಿಸುತ್ತಿದ್ದಾರೆ. ಈ ಕುರಿತು ಸಂಬಂಧಪಟ್ಟ ಮೇಲಧಿಕಾರಿಗಳಿಗೆ ಹಲವು ಬಾರಿ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಅಥಣಿಗೆ ಆಗಮಿಸಿ ಗುತ್ತಿಗೆದಾರರ ಸಮಸ್ಯೆಗಳನ್ನು ಆಲಿಸಿ, ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು.
ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಕಳೆದ 6 ದಿನಗಳಿಂದ ನಡೆಯುತ್ತಿದ್ದ ಧರಣಿಯನ್ನು 3 ದಿನಗಳ ಕಾಲ ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಅಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಬುಧವಾರದಿಂದ ಮತ್ತೆ ಸತ್ಯಾಗ್ರಹ ಆರಂಭಿಸಲಾಗುವುದು ಎಂದು ಎಚ್ಚರಿಸಿದರು.ಧರಣಿಯಲ್ಲಿ ಸಂಘದ ಅಧ್ಯಕ್ಷ ಜಗದೀಶ್ ಅವಟಿ, ಕಾರ್ಯದರ್ಶಿ ಅಮೀರ್ ಕತಿಬ್, ಖಜಾಂಚಿ ಮಲ್ಲಪ್ಪ ಹವಾಲ್ದಾರ್, ಭೀಮಣ್ಣ ಪಾಟೀಲ್, ಗಿರೀಶ್ ಬಿಜಾಪುರೆ, ದ್ವಾರಕೀಶ್ ಜಾಲಿಹಾಳ, ಸಾಗರ್ ಪವಾರ, ರಾಜಕುಮಾರ ದೊಡ್ಡಮನಿ, ಪಾರಿಸ್ ನಂದಪನ್ನವರ, ಅನಿಲ್ ಒಡೆಯರ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.