ಕನಕಪುರ: ತಾಲೂಕಿನ ಕಾವೇರಿ ವನ್ಯಜೀವಿ ವಲಯದ ಅರೆಕೊಪ್ಪ ಗ್ರಾಮದ ಸಮೀಪ ಅರಣ್ಯ ಪ್ರದೇಶದಲ್ಲಿ ರೈಲ್ವೆ ಬ್ಯಾರಿಕೇಡ್ ತಡೆಗೋಡೆ ದಾಟಲು ಯತ್ನಿಸಿದ ವೇಳೆ ಕಾಡಾನೆಯೊಂದು ಬ್ಯಾರಿಕೇಡ್‌ನಲ್ಲಿ ಸಿಕ್ಕಿಹಾಕಿಕೊಂಡ ಘಟನೆ ನಡೆದಿದೆ. ಮಾಹಿತಿ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಕಾಡಾನೆಯನ್ನು ಸುರಕ್ಷಿತವಾಗಿ ಬ್ಯಾರಿಕೇಡ್ ನಿಂದ ಬಿಡಿಸುವ ಕಾರ್ಯಾಚರಣೆ ನಡೆಸಿ, ಪಶು ವೈದ್ಯರಿಂದ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ ನಂತರ ಆನೆಯನ್ನು ಸುರಕ್ಷಿತವಾಗಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.

ಈ ಘಟನೆ ವನ್ಯಜೀವಿಗಳ ಸುರಕ್ಷತೆ ಕುರಿತು ಮತ್ತೊಮ್ಮೆ ಆತಂಕ ಮೂಡಿಸಿದ್ದು, ಅರಣ್ಯ ಪ್ರದೇಶಗಳಲ್ಲಿ ಅಳವಡಿಸಲಾಗುತ್ತಿರುವ ಬ್ಯಾರಿಕೇಡ್‌ಗಳ ವಿನ್ಯಾಸದ ಬಗ್ಗೆ ಚರ್ಚೆಗೆ ಕಾರಣವಾಗಿದೆ. ಈ ನಿಟ್ಟಿನಲ್ಲಿ ಇಲಾಖೆ ಅಧಿಕಾರಿಗಳು ಗಮನ ಹರಿಸಬೇಕಾಗಿದೆ.

ಈ ಘಟನೆ ಕುರಿತು ಪ್ರತಿಕ್ರಿಯಿಸಿರುವ ಸಾಮಾಜಿಕ ಕಾರ್ಯಕರ್ತ ಶಿವಕುಮಾರ್ ಎಸ್.ಎಸ್ ರವರು, ರೈಲ್ವೆ ಬ್ಯಾರಿಕೇಡ್ ತಡೆಗೋಡೆಗಳ ನಡುವಿನ ಅಂತರವನ್ನು ಅಗತ್ಯಕ್ಕಿಂತ ಹೆಚ್ಚಾಗಿ ಬಿಟ್ಟಿರುವುದೇ ಕಾಡಾನೆ ಸಿಕ್ಕಿ ಹಾಕಿಕೊಳ್ಳಲು ಪ್ರಮುಖ ಕಾರಣ ಎಂದು ಆರೋಪಿಸಿದ್ದಾರೆ. ಆನೆಗಳು ಅಂತರದೊಳಗೆ ಸುಲಭವಾಗಿ ಪ್ರವೇಶಿಸಿದರೂ ಹೊರಬರಲು ಸಾಧ್ಯವಾಗದೆ ಸಂಕಷ್ಟಕ್ಕೆ ಸಿಲುಕುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ತಿಳಿಸಿದ್ದಾರೆ.

ಕಾಡುಪ್ರಾಣಿಗಳ ಸುರಕ್ಷತೆ ಗಮನದಲ್ಲಿಟ್ಟುಕೊಂಡು ಬ್ಯಾರಿಕೇಡ್‌ಗಳನ್ನು ವೈಜ್ಞಾನಿಕವಾಗಿ ಅಳವಡಿಸಬೇಕು. ತಡೆಗೋಡೆಗಳ ನಡುವಿನ ಅಂತರ ಮರುಪರಿಶೀಲನೆ ನಡೆಸಿ ಅಗತ್ಯ ಬದಲಾವಣೆಗಳನ್ನು ಮಾಡದಿದ್ದರೆ ಇಂತಹ ಘಟನೆಗಳು ಮುಂದೆಯೂ ಮರುಕಳಿಸುವ ಸಾಧ್ಯತೆ ಇದೆ. ಆದ್ದರಿಂದ ಸಂಬಂಧಿತ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಬ್ಯಾರಿಕೇಡ್ ವಿನ್ಯಾಸದಲ್ಲಿ ಅಗತ್ಯ ಮಾರ್ಪಾಡುಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.