ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು. ರಾಯಚೂರು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಡಿಸಿ ಎಲ್‌.ಚಂದ್ರಶೇಖರ ನಾಯಕ ಅವರು ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಕನ್ನಡಪ್ರಭ ವಾರ್ತೆ ರಾಯಚೂರು

ವಸತಿ, ನಿವೇಶನ ಯೋಜನೆಯಡಿ ವಿಶೇಷ ವರ್ಗಗಳ ಫಲಾನುಭವಿಗಳು ಸಲ್ಲಿಸಿದ ಅರ್ಜಿಗಳನ್ನು ಸರಿಯಾದ ರೀತಿಯಲ್ಲಿ ಪರಿಶೀಲಿಸಿ ಅರ್ಹ ಫಲಾನುಭವಿಗಳಿಗೆ ಸವಲತ್ತು ಒದಗಿಸಲು ಸಂಬಂಧಪಟ್ಟ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು, ಯಾವುದೇ ಅರ್ಹ ಫಲಾನುಭವಿಗಳು ಸೌಲಭ್ಯದಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ ಸೂಚಿಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗಿನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಸತಿ ಯೋಜನೆಗೆ ಅರ್ಜಿ ಸಲ್ಲಿಸುವ ವಿಶೇಷ ವರ್ಗದ ಫಲಾನುಭವಿಗಳು ಈ ಮೊದಲೇ ನಿವೇಶನ ಅಥವಾ ವಸತಿ ಸೌಲಭ್ಯ ಹೊಂದಿದ್ದಲ್ಲಿ ಅಂತಹ ಅರ್ಜಿಗಳನ್ನು ಮರುಪರಿಶೀಲನೆಗೆ ಒಳಪಡಿಸಬೇಕು ಎಂದರು.

ವಿಶೇಷ ವರ್ಗಗಳ ಫಲಾನುಭವಿಗಳಾದ ಕಾರ್ಮಿಕರು, ದೇವದಾಸಿ ಮಹಿಳೆಯರು ಹಾಗೂ ಎಚ್‌ಐವಿ ಸೋಂಕಿತರು ಸೇರಿದಂತೆ ಇನ್ನಿತರ ಫಲಾನುಭವಿಗಳಿಗೆ ವಸತಿ ಸೌಲಭ್ಯ ಒದಗಿಸುವ ಮೊದಲು ಅವರು ವಿಶೇಷ ವರ್ಗಗಳಿಗೆ ಸೇರಿದ್ದಾರೆಯೇ ಎಂದು ಮೊದಲು ದೃಢೀಕರಿಸಿಕೊಂಡು ನಂತರ ಸಂಬಂಧಪಟ್ಟ ಇಲಾಖೆಯಿಂದ ಫಲಾನುಭವಿಗಳ ದೃಢೀಕರಣ ಪತ್ರ ಸ್ವೀಕರಿಸಿಕೊಳ್ಳಬೇಕು ಎಂದು ತಿಳಿಸಿದರು.

ಯಾವುದೇ ಕಾರಣಕ್ಕೂ ಅರ್ಹ ಫಲಾನುಭವಿಗಳು ಸೌಲಭ್ಯದಿಂದ ವಂಚಿತರಾಗದಂತೆ ಎಚ್ಚರಿಕೆ ವಹಿಸಿ, ಫಲಾನುಭವಿಗಳ ಪಟ್ಟಿ ಸಿದ್ಧಪಡಿಸಿ ಮುಂದಿನ ಕ್ರಮಕ್ಕಾಗಿ ಸಲ್ಲಿಸಬೇಕು ಎಂದು ತಿಳಿಸಿದರು.

ಸಭೆಯಲ್ಲಿ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಜಗದೀಶ ಗಂಗಣ್ಣನವರ, ಜಿಪಂ ಮುಖ್ಯ ಯೋಜನಾಧಿಕಾರಿ ಡಾ.ಟಿರೋಣಿ, ತಹಸೀಲ್ದಾರ್‌ ಸುರೇಶ ವರ್ಮಾ, ಅರುಣ ದೇಸಾಯಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುರೇಂದ್ರಬಾಬು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಚೇತನ ಕುಮಾರ, ಜಿಲ್ಲಾ ಕಾರ್ಮಿಕ ಅಧಿಕಾರಿ ಆರತಿ ಸೇರಿ ಇತರರು ಹಾಜರಿದ್ದರು.