ಚಿಕ್ಕಮಗಳೂರು : ಅರ್ಹರು ತಪ್ಪದೆ ಮತ ಚಲಾಯಿಸಿ- ಡೀಸಿ ಮೀನಾ

| Published : Apr 03 2024, 01:38 AM IST / Updated: Apr 03 2024, 09:05 AM IST

ಸಾರಾಂಶ

ಚಿಕ್ಕಮಗಳೂರಿನಲ್ಲಿ ಮಂಗಳವಾರ ನಡೆದ ಮತದಾನ ಜಾಗೃತಿ ಜಾಥಕ್ಕೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರು ಚಾಲನೆ ನೀಡಿದರು. ಜಿಪಂ ಸಿಇಓ ಡಾ. ಗೋಪಾಲಕೃಷ್ಣ ಇದ್ದರು.

 ಚಿಕ್ಕಮಗಳೂರು :  ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಅರ್ಹ ಮತದಾರರು ಮತದಾನ ಕೇಂದ್ರಕ್ಕೆ ತೆರಳಿ ಮತ ಚಲಾಯಿಸಬೇಕೆಂದು ಜಿಲ್ಲಾ ಚುನಾವಣಾ ಅಧಿಕಾರಿ ಮೀನಾ ನಾಗರಾಜ್ ಹೇಳಿದ್ದಾರೆ.

ಜಿಲ್ಲಾಡಳಿತ, ಜಿಪಂ ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಮಂಗಳವಾರ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಮತದಾನ ಜಾಗೃತಿ ಜಾಥಕ್ಕೆ ಚಾಲನೆ ನೀಡಿ ಮಾತನಾಡಿದರು.

ದೇಹದ ಆರೋಗ್ಯ ನಮಗೆ ಎಷ್ಟು ಮುಖ್ಯವೋ ಅದೇ ರೀತಿ ದೇಶದ ಆರೋಗ್ಯಕರ ಭವಿಷ್ಯಕ್ಕಾಗಿ ಪ್ರತಿಯೊಬ್ಬ ಅರ್ಹ ಮತದಾರರು ಮತದಾನ ಮಾಡುವಂತೆ ತಿಳಿಸಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನವೆಂಬುದು ಪ್ರಜೆಗಳಿಗೆ ನೀಡಿರುವ ಹಕ್ಕು, ಜಿಲ್ಲೆಯಲ್ಲಿ ಕಳೆದ ಚುನಾವಣೆಯಲ್ಲಿ ಶೇ.78 ರಷ್ಟು ಮತದಾನವಾಗಿದ್ದು, ಈ ಬಾರಿಯ ಚುನಾವಣೆಯಲ್ಲಿ ಎಲ್ಲರೂ ತಪ್ಪದೆ ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಶೇ. 90ಕ್ಕೂ ಹೆಚ್ಚು ಮತದಾನವಾಗಬೇಕು. ಜಿಲ್ಲಾ ಸ್ವೀಪ್ ಸಮಿತಿಯಿಂದ ಮತದಾನದ ಕುರಿತು ಜಾಗೃತಿ ಮೂಡಿಸುವ ಕೆಲಸವಾಗುತ್ತಿದೆ ಮತದಾನವನ್ನು ಏಕೆ ಮಾಡಬೇಕು. ಯಾವ ರೀತಿ ಮಾಡಬೇಕು ಎಂಬ ಬಗ್ಗೆ ಅರಿವು ಮೂಡಿಸುವುದು ಇದರ ಉದ್ದೇಶವಾಗಿದೆ ಎಂದರು.

ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಗೋಪಾಲಕೃಷ್ಣ ಮಾತನಾಡಿ, ಮತದಾನವೆಂಬುದು ಸಂವಿಧಾನ ಎಲ್ಲಾ ಪ್ರಜೆಗಳಿಗೂ ನೀಡಿರುವ ಮಹತ್ವವಾದ ಹಕ್ಕು. ಪ್ರತಿಯೊಬ್ಬರು ಏ.26ರಂದು ನಡೆಯಲಿರುವ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಮತಗಟ್ಟೆಗಳಿಗೆ ತೆರಳಿ ಕಡ್ಡಾಯವಾಗಿ ಮತದಾನ ಮಾಡಬೇಕು. ಪ್ರತಿಯೊಂದು ಮತಗಟ್ಟೆಗಳಲ್ಲಿ ಮತದಾರರಿಗೆ ಕುಡಿಯುವ ನೀರು, ನೆರಳಿನ ವ್ಯವಸ್ಥೆ, ಅಂಗವಿಕಲರಿಗೆ ರ್‍ಯಾಂಪ್ ವ್ಯವಸ್ಥೆ, ಶೌಚಾಲಯ ವ್ಯವಸ್ಥೆ ಕಲ್ಪಿಸಲಾಗಿದೆ. ಚುನಾವಣೆ ಎಂಬುದು ಪ್ರಜಾಪ್ರಭುತ್ವದ ಹಬ್ಬವಾಗಿದ್ದು ಮತದಾನದಲ್ಲಿ ಭಾಗವಹಿಸುವ ಮೂಲಕ ನಮ್ಮ ಜಿಲ್ಲೆಯಲ್ಲಿ ಶೇಕಡವಾರು ಮತದಾನ ಪ್ರಮಾಣ ಹೆಚ್ಚಳಕ್ಕೆ ಸಹಕರಿಸಬೇಕೆಂದು ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಅಶ್ವಥ್ ಬಾಬು ಮಾತನಾಡಿ, ಮತದಾನ ಕುರಿತು ಮತದಾರರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಜಾಥ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಳೆದ ಚುನಾವಣೆಯಲ್ಲಿ ನಗರ ಪ್ರದೇಶದಲ್ಲಿ ಗ್ರಾಮೀಣ ಪ್ರದೇಶಕ್ಕಿಂತ ಕಡಿಮೆ ಮತದಾನವಾಗಿದ್ದು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪ್ರತಿಯೊಬ್ಬ ಅರ್ಹ ಮತದಾರರು ಮತದಾನ ಕೇಂದ್ರಕ್ಕೆ ತೆರಳಿ ತಪ್ಪದೇ ಮತದಾನ ಮಾಡುವಂತೆ ತಿಳಿಸಿದರು.

ಜಾಥದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತರು ಭಾಗವಹಿಸಿದ್ದರು.

ಲೋಕಸಭಾ ಸಾರ್ವತ್ರಿಕ ಚುನಾವಣೆ: ಸಾಮಾನ್ಯ ವೀಕ್ಷಕರ ನೇಮಕ

ಚಿಕ್ಕಮಗಳೂರು: ಲೋಕಸಭಾ ಸಾರ್ವತ್ರಿಕ ಚುನಾವಣೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಚುನಾವಣಾ ಕ್ಷೇತ್ರದ ಸಾಮಾನ್ಯ ವೀಕ್ಷಕರನ್ನಾಗಿ ಹಿತೇಶ್ ಕೆ ಕೋಯಲ್ ಅವರನ್ನು ಭಾರತ ಚುನಾವಣಾ ಆಯೋಗ ನೇಮಿಸಿದೆ.

ಚುನಾವಣಾ ವೀಕ್ಷಕರ ಕಚೇರಿಯನ್ನು ಉಡುಪಿ ಪ್ರವಾಸಿ ಮಂದಿರದಲ್ಲಿ (ಹೊಸ ಕಟ್ಟಡ) ತೆರೆಯಲಾಗಿದೆ. ಚುನಾವಣೆಗೆ ಸಂಬಂಧಿಸಿದ ದೂರುಗಳಿದ್ದಲ್ಲಿ ಪ್ರತಿದಿನ ಸಲ್ಲಿಸಲು ಅವಕಾಶವಿದ್ದು, ಸಾರ್ವಜನಿಕ / ಜನಪ್ರತಿನಿಧಿಗಳು ಉಡುಪಿ ಬನ್ನಂಜೆಯಲ್ಲಿರುವ ಪ್ರವಾಸಿ ಮಂದಿರದಲ್ಲಿ ಚುನಾವಣಾ ವೀಕ್ಷಕರಿಗೆ ಸಲ್ಲಿಸಬಹುದಾಗಿದ್ದು ಇವರ ಮೊ.ಸಂ. 9482245032 ಆಗಿರುತ್ತದೆ ಎಂದು ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಚುನಾವಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.