ಬಾಲ್ಯವಿವಾಹ, ಭ್ರೂಣಹತ್ಯೆಯಂತ ಪಿಡುಗನ್ನು ಹೋಗಲಾಡಿಸಿ: ಪನ್ವಾರ್‌

| Published : Feb 23 2024, 01:46 AM IST

ಸಾರಾಂಶ

ಯಾದಗಿರಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬೇಟಿ ಬಚಾವೋ, ಬೇಟಿ ಪಡಾವೋ ಅಭಿಯಾನದ ಅಂಗವಾಗಿ ಒಂದು ದಿನದ ತರಬೇತಿ ಕಾರ್ಯಕ್ರಮದಲ್ಲಿ ಮಗಳನ್ನು ಉಳಿಸಿ, ಮಗಳನ್ನು ಓದಿಸಿ ಭಿತ್ತಿಪತ್ರ ಬಿಡುಗಡೆ ಮಾಡಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗರಿಮಾ ಪನ್ವಾರ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಯಾದಗಿರಿ

ಮಕ್ಕಳಲ್ಲಿ ಹೆಣ್ಣು-ಗಂಡು ಎಂಬ ಬೇಧವಿಲ್ಲದೆ ಎಲ್ಲರೂ ಸಮಾನರು ಎಂಬ ಭಾವನೆ ಸಮಾಜದಲ್ಲಿ ಬಿತ್ತಬೇಕಿದೆ. ಹೆಣ್ಣು ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ನೀಡುವುದರ ಮೂಲಕ ಬಾಲ್ಯವಿವಾಹ ಮತ್ತು ಭ್ರೂಣಹತ್ಯೆಯಂತಹ ಸಾಮಾಜಿಕ ಪಿಡುಗು ಹೋಗಲಾಡಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗರಿಮಾ ಪನ್ವಾರ್‌ ಕರೆ ನೀಡಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬೇಟಿ ಬಚಾವೋ, ಬೇಟಿ ಪಡಾವೋ ಅಭಿಯಾನದ ಅಂಗವಾಗಿ ಲಿಂಗ ತಾರತಮ್ಯ, ಲಿಂಗ ಸಮಾನತೆ, ಹೆಣ್ಣು ಮಕ್ಕಳಿಗೆ ಶಿಕ್ಷಣದ ಮಹತ್ವ, ಬಾಲ್ಯ ವಿವಾಹ ಹಾಗೂ ಭ್ರೂಣ ಹತ್ಯೆ ನಿಷೇಧದ ಕುರಿತು ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿಯರು, ಶಾಲಾ ಶಿಕ್ಷಕರು ಹಾಗೂ ಆರೋಗ್ಯ ಇಲಾಖೆಯ ಆರೋಗ್ಯ ಸಹಾಯಕಿಯರಿಗೆ ನಡೆದ ಒಂದು ದಿನದ ತರಬೇತಿ ಕಾರ್ಯಕ್ರಮದದಲ್ಲಿ ಮಗಳನ್ನು ಉಳಿಸಿ, ಮಗಳನ್ನು ಓದಿಸಿ ಭಿತ್ತಿಪತ್ರ ಬಿಡುಗಡೆ ಮಾಡಿ ಅವರು ಮಾತನಾಡಿದರು.

ಇಂದಿನ ಆಧುನಿಕ ಯುಗದಲ್ಲಿ ಹೆಣ್ಣು ಮಕ್ಕಳು ಎಲ್ಲಾ ಕ್ಷೇತ್ರದಲ್ಲಿ ಮುನ್ನಡೆಯುತ್ತಿದ್ದಾರೆ. ಗಂಡಿಗೆ ಸಮನಾಗಿ ದುಡಿಯುತ್ತಿದ್ದಾಳೆ. ಮಹಿಳೆ ನಾಲ್ಕು ಕೋಣೆಗಳ ಮಧ್ಯದಲ್ಲಿ ಕೂಡವ ಕಾಲ ಇದಲ್ಲ. ಅವಳನ್ನು ಪ್ರೋತ್ಸಾಹಿಸುವ ಕೆಲಸವಾಗಬೇಕಿದೆ ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವೀರಣ್ಣಗೌಡ ಪಾಟೀಲ್ ಮಾತನಾಡಿ, ಜಿಲ್ಲೆಯಲ್ಲಿ ಬೇಟಿ ಬಚಾವೋ, ಬೇಟಿ ಪಡಾವೋ ಅಭಿಯಾನದ ಅಂಗವಾಗಿ ಪ್ರತಿಯೊಂದು ಹಳ್ಳಿಯಲ್ಲಿ ಹೆಣ್ಣು ಮಕ್ಕಳ ಮಹತ್ವದ ಕುರಿತು ಅರಿವು ಮೂಡಿಸುವ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದರು.

ಕಾರ್ಯಕ್ರಮಕ್ಕೆ ರಾಜ್ಯ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಡಾ.ಮೀನಾಕ್ಷಿ ಅವರು, ಹೆಣ್ಣು ಮಕ್ಕಳ ಆರೋಗ್ಯ ಪೌಷ್ಠಿಕತೆ, ನೈರ್ಮಲ್ಯ ಹಾಗೂ ಶುಚಿತ್ವದ ಕುರಿತು ಹಾಗೂ ದೋರನಹಳ್ಳಿ ವೈದ್ಯಾಧಿಕಾರಿ ಡಾ. ರಾಜೇಶ್ವರಿ ಅವರು, ಭ್ರೂಣ ಹತ್ಯೆ ನಿಷೇಧದ ಕುರಿತು ಮಾತನಾಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಗುರುನಾಥ, ಶಹಾಪೂರ ಕ್ಷೇತ್ರ ಶಿಕ್ಷಣಾಧಿಕಾರಿ ಶೀಬಾ ಜಲಿಯನ್, ಪ್ರಧಾನಮಂತ್ರಿ ಮಾತೃವಂದನಾ ಯೋಜನೆ ಜಿಲ್ಲಾ ಸಂಯೋಜಕಿ ಯಲ್ಲಪ್ಪ ಕುಂಚಾವರ, ಜೆಂಡರ್ ಸ್ಪೆಷಲಿಸ್ಟ್ ಬಸಲಿಂಗಮ್ಮ ಸೇರಿ ಇತರರಿದ್ದರು.