ಗ್ಯಾರಂಟಿ ಯೋಜನೆಗಳಲ್ಲದೇ ಅಭಿವೃದ್ಧಿಗೆ ಮಹತ್ವ ನೀಡಿದೆ : ತಮ್ಮಯ್ಯ

| Published : Feb 26 2024, 01:36 AM IST

ಗ್ಯಾರಂಟಿ ಯೋಜನೆಗಳಲ್ಲದೇ ಅಭಿವೃದ್ಧಿಗೆ ಮಹತ್ವ ನೀಡಿದೆ : ತಮ್ಮಯ್ಯ
Share this Article
  • FB
  • TW
  • Linkdin
  • Email

ಸಾರಾಂಶ

ಕೇವಲ ಗ್ಯಾರಂಟಿ ಯೋಜನೆಗಳಿಗೆ ಸೀಮಿತರಾಗದೇ ಅಭಿವೃದ್ಧಿ ಕಾರ್ಯಗಳಿಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಆದ್ಯತೆ ನೀಡಿದೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.

ಚಿಕ್ಕಮಗಳೂರಿನ ಡಿಎಸಿಜಿ ಪಾಲಿಟೆಕ್ನಿಕ್ ಕಾಲೇಜು ಆವರಣದಲ್ಲಿ ನವೀಕರಣ ಕಾಮಗಾರಿಗಳ ಶಂಕುಸ್ಥಾಪನೆ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಕೇವಲ ಗ್ಯಾರಂಟಿ ಯೋಜನೆಗಳಿಗೆ ಸೀಮಿತರಾಗದೇ ಅಭಿವೃದ್ಧಿ ಕಾರ್ಯಗಳಿಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಆದ್ಯತೆ ನೀಡಿದೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು. ನಗರದ ಡಿಎಸಿಜಿ ಪಾಲಿಟೆಕ್ನಿಕ್ ಕಾಲೇಜು ಆವರಣದಲ್ಲಿ 4.25 ಕೋಟಿ ರು. ವೆಚ್ಚದಲ್ಲಿ ನವೀಕರಣ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ಪಾಲಿಟೆಕ್ನಿಕ್ ಕಾಲೇಜಿನ ನವೀಕರಣ ಕಾಮಗಾರಿಗೆ ಅನುದಾನ ಬಿಡುಗಡೆಗೊಳಿಸಿ ಕಾಮಗಾರಿಗೆ ಚಾಲನೆ ನೀಡಿದ್ದು 19.80 ಕೋಟಿ ವೆಚ್ಚದಲ್ಲಿ ಜಿಲ್ಲಾ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಅನುದಾನ ಬಿಡುಗಡೆಗೊಳಿಸಿ ಕಾಮಗಾರಿ ಪ್ರಗತಿಯಲ್ಲಿದೆ ಎಂದು ಹೇಳಿದರು. ಅಲ್ಪಸಂಖ್ಯಾತರ ಬಡಾವಣೆಗಳಲ್ಲಿ ಮೂಲಭೂತ ಸೌಕರ್ಯ ಒದಗಿಸಲು 5 ಕೋಟಿ ಹಣ ಮಂಜೂರು ಮಾಡಲಾಗಿದೆ. ಈ ರೀತಿಯಲ್ಲಿ ಕೇವಲ ಗ್ಯಾರಂಟಿ ಯೋಜನೆಗಳಲ್ಲದೆ ಅರೋಗ್ಯ, ಶಿಕ್ಷಣ, ಮತ್ತು ನಗರಾಭಿವೃದ್ಧಿ ಕಾರ್ಯಗಳಲ್ಲೂ ಸರ್ಕಾರ ಗಮನ ಹರಿಸುತ್ತಿದ್ದು ಕಾಮಗಾರಿಗಳಲ್ಲಿ ಗುಣಮಟ್ಟ ಕಾಪಾಡಬೇಕು ಎಂದು ಗುತ್ತಿಗೆದಾರರಿಗೆ ಸೂಚಿಸಿದರು. ರಾಜ್ಯ ಸರ್ಕಾರ ಚುನಾವಣಾ ಪೂರ್ವದಲ್ಲಿ ಘೋಷಿಸಿದ ಪಂಚ ಗ್ಯಾರಂಟಿ ಯೋಜನೆಗಳನ್ನು ಎಂಟು ತಿಂಗಳಲ್ಲಿ ಜನರಿಗೆ ತರುವ ಮೂಲಕ ಮಹಿಳೆಯರ ಸಬಲೀಕರಣಕ್ಕೆ ಹೆಚ್ಚಿನ ಶಕ್ತಿ ತುಂಬಿದೆ. ಅದೇ ರೀತಿ ಪದವಿ ಮುಗಿಸಿದ ಯುವ ವಿದ್ಯಾರ್ಥಿ ಗಳಿಗೆ ಯುವ ನಿಧಿ ಯೋಜನೆಯಡಿ ಪ್ರತಿ ತಿಂಗಳು 3 ಸಾವಿರ, ವೃತ್ತಿಪರ ಶಿಕ್ಷಣ ಪಡೆದ ವಿದ್ಯಾರ್ಥಿಗಳಿಗೆ ತಲಾ ಒಂದು ಸಾವಿರ ರು.ಗಳನ್ನು ಪ್ರೋತ್ಸಾಹಧನ ನೀಡಲಾಗುತ್ತಿದೆ ಎಂದರು. ಬಹುತೇಕ ರಾಜ್ಯದ ಜನತೆಗೆ ಇಷ್ಟೆಲ್ಲಾ ಗ್ಯಾರಂಟಿ ಯೋಜನೆಗಳ ನಡುವೆಯೂ ಸರ್ಕಾರ ಅಭಿವೃದ್ಧಿ ಕಾರ್ಯದಲ್ಲಿ ಹಿಂದೇಟು ಹಾಕದೆ ಅನೇಕ ಅಭಿವೃದ್ಧಿ ಕಾಮಗಾರಿಗಳತ್ತ ಗಮನ ಹರಿಸುತ್ತಿದೆ. ಕ್ಷೇತ್ರದಲ್ಲೂ ನೂರಾರು ಕೋಟಿ ರು.ಗಳ ಅಭಿವೃದ್ದಿ ಕಾಮಗಾರಿ ಕೈಗೆತ್ತಿಕೊಂಡಿದ್ದು ಹಂತ ಹಂತವಾಗಿ ಗ್ರಾಮಸ್ಥರ ಬೇಡಿಕೆಯಂತೆ ಈಡೇರಿಸಲಾಗುವುದು ಎಂದು ತಿಳಿಸಿದರು. ನಗರಸಭಾ ಅಧ್ಯಕ್ಷ ವರಸಿದ್ದಿ ವೇಣುಗೋಪಾಲ್ ಮಾತನಾಡಿ, ಪಾಲಿಟೆಕ್ನಿಕ್ ಕಾಲೇಜು ನಗರದ ಹೃದಯ ಭಾಗದಲ್ಲಿರುವ ಹಿನ್ನೆಲೆಯಲ್ಲಿ ನಗರ ಸೇರಿದಂತೆ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಆಗಮಿಸುತ್ತಿದ್ದು ತೇರ್ಗಡೆ ಹೊಂದುವ ವಿದ್ಯಾರ್ಥಿಗಳು ಉತ್ತಮ ನೌಕರಿ ಪಡೆಯುವ ಮೂಲಕ ಸಮಾಜಕ್ಕೆ ಮಾದರಿಯಾಗಿ ಬದುಕಬೇಕು ಎಂದು ಹೇಳಿದರು. ಎಇಇ ಗವಿರಂಗಪ್ಪ ಮಾತನಾಡಿ, ನವೀಕರಣ ಕಾಮಗಾರಿಯಲ್ಲಿ ಕಾಲೇಜಿಗೆ 2.1 ಕೋಟಿ ಹಾಗೂ ಹಾಸ್ಟೆಲ್‌ಗೆ 2.15 ಕೋಟಿ ಸೇರಿದಂತೆ ಒಟ್ಟಾರೆ 4.25 ಕೋಟಿ ಅನುದಾನ ವೆಚ್ಚವಾಗಲಿದ್ದು ಮುಂದಿನ ಆರೇಳು ತಿಂಗಳೊಳಗೆ ಕಾಮಗಾರಿ ಪೂರೈಸಿ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿಕೊಡಲಾಗುವುದು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಎಂ.ಪುಟ್ಟಸ್ವಾಮಿ, ನಗರಸಭಾ ಸದಸ್ಯ ಲಕ್ಷ್ಮಣ್, ನಿವೃತ್ತ ಪ್ರಾಂಶುಪಾಲ ಡಿ.ಆರ್.ಓಂಕಾರಸ್ವಾಮಿ, ಸಹ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

25 ಕೆಸಿಕೆಎಂ 1ಚಿಕ್ಕಮಗಳೂರಿನ ಡಿಎಸಿಜಿ ಪಾಲಿಟೆಕ್ನಿಕ್ ಕಾಲೇಜು ಆವರಣದಲ್ಲಿ ನವೀಕರಣ ಕಾಮಗಾರಿಗಳಿಗೆ ಶಾಸಕ ಎಚ್‌.ಡಿ. ತಮ್ಮಯ್ಯ ಅವರು ಶಂಕುಸ್ಥಾಪನೆ ನೆರವೇರಿಸಿದರು.