ಗ್ಯಾರಂಟಿ ಯೋಜನೆ ಜತೆ ಅಭಿವೃದ್ಧಿಗೂ ಒತ್ತು

| Published : Apr 03 2025, 12:35 AM IST

ಸಾರಾಂಶ

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಎಲ್ಲ ಕ್ಷೇತ್ರಕ್ಕೂ ಪ್ರಾಧಾನ್ಯತೆ ನೀಡಿ, ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸಿದೆ.

ಶಿರಸಿ: ತಾಲೂಕಿನ ಹುಲೇಕಲ್ ಗ್ರಾಪಂ ವ್ಯಾಪ್ತಿಯಲ್ಲಿ ರಸ್ತೆ ನಿರ್ಮಾಣ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಭೀಮಣ್ಣ ನಾಯ್ಕ ಭೂಮಿಪೂಜೆ ನೆರವೇರಿಸಿದರು.

ನಂತರ ಮಾತನಾಡಿದ ಅವರು, ಅಭಿವೃದ್ಧಿ ಎಂಬುದು ನಿಂತ ನೀರಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಎಲ್ಲ ಕ್ಷೇತ್ರಕ್ಕೂ ಪ್ರಾಧಾನ್ಯತೆ ನೀಡಿ, ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಅಧಿಕಾರಕ್ಕೆ ಬರುವ ಪೂರ್ವದಲ್ಲಿ ೫ ಗ್ಯಾರಂಟಿಯನ್ನು ನೀಡಲಾಗಿತ್ತು. ಅಧಿಕಾರಕ್ಕೆ ಬಂದ ೧ ವರ್ಷದೊಳಗಡೆ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ನುಡಿದಂತೆ ನಡೆದಿದ್ದೇವೆ. ಗ್ಯಾರಂಟಿ ಯೋಜನೆಗಳ ಜತೆ ಅಭಿವೃದ್ಧಿಗೂ ಒತ್ತು ನೀಡಲಾಗಿದೆ. ರಸ್ತೆ, ಸೇತುವೆ ಸೇರಿದಂತೆ ಮೂಲಸೌಕರ್ಯಕ್ಕೆ ಕೋಟ್ಯಂತರ ರು. ಅನುದಾನ ತಂದು ಕ್ಷೇತ್ರದಾದ್ಯಂತ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ತಾಲೂಕಿನ ಹುಲೇಕಲ್ ಪಂಚಾಯತ್ ವ್ಯಾಪ್ತಿಯ ಹಂಚರಟ ಗ್ರಾಮದ ಬಹುದಿನಗಳ ಬೇಡಿಕೆಯಾದ ರಸ್ತೆ ನಿರ್ಮಾಣಕ್ಕೆ ಸುಮಾರು ₹೧ ಕೋಟಿ ಅನುದಾನ ಮೀಸಲಿಟ್ಟು, ಕಾಮಗಾರಿಯ ಭೂಮಿ ಪೂಜೆಯನ್ನು ನೆರವೇರಿಸಲಾಗಿದೆ. ಗ್ರಾಮಸ್ಥರ ಬಹುದಿನಗಳ ಕನಸು ಈಡೇರಿದಂತಾಗಿದೆ. ಈ ರಸ್ತೆ ನಿರ್ಮಾಣದಿಂದಾಗಿ ಗ್ರಾಮದ ಸಂಪರ್ಕ ವ್ಯವಸ್ಥೆ ಸುಧಾರಿಸಲಿದ್ದು, ವ್ಯಾಪಾರ-ವಹಿವಾಟು ಹಾಗೂ ಜನರ ಓಡಾಟಕ್ಕೆ ಅನುಕೂಲವಾಗಲಿದೆ ಎಂದು ತಿಳಿಸಿದ ಅವರು, ಕ್ಷೇತ್ರದ ಜನತೆಯ ಆಶೀರ್ವಾದದಿಂದ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಜನರ ಕಷ್ಟಕ್ಕೆ ಸ್ಪಂದಿಸುವುದರ ಜತೆ ಅಭಿವೃದ್ಧಿಗೂ ಆದ್ಯತೆ ನೀಡಿದ್ದೇನೆ. ಅಭಿವೃದ್ಧಿ ವಿಷಯದಲ್ಲಿ ಎಂದಿಗೂ ರಾಜಕಾರಣ ಮಾಡಬಾರದು ಎಂದು ಹೇಳಿದರು.

ಹುಲೇಕಲ್ ಗ್ರಾಪಂ ಅಧ್ಯಕ್ಷ ಕಾಶಿಂ ಇಬ್ರಾಹಿಂ ಸಾಬ ಅಧ್ಯಕ್ಷತೆ ವಹಿಸಿ ಮಾತನಾಡಿ, ಗ್ರಾಪಂ ವ್ಯಾಪ್ತಿಯ ಅಭಿವೃದ್ಧಿ ಕಾಮಗಾರಿಗಳನ್ನು ಮಂಜೂರಿ ಮಾಡುವಂತೆ ವಿನಂತಿಸಿದಾಗ ಶಾಸಕ ಭೀಮಣ್ಣ ನಾಯ್ಕ ಸಕಾರತ್ಮಕವಾಗಿ ಸ್ಪಂದಿಸಿ, ಹಂಚರಟ ಗ್ರಾಮ ವ್ಯಾಪ್ತಿಯ ರಸ್ತೆ ನಿರ್ಮಾಣಕ್ಕೆ ₹೧ ಕೋಟಿ ಅನುದಾನ ನೀಡಿದ್ದಾರೆ. ಗ್ರಾಪಂ ವ್ಯಾಪ್ತಿಯ ಜನತೆಯ ಪರವಾಗಿ ಶಾಸಕರನ್ನು ಅಭಿನಂದಿಸುತ್ತೇನೆ ಎಂದರು.

ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಜಗದೀಶ ಗೌಡ, ಬಂಡಳ ಗ್ರಾಪಂ ಅಧ್ಯಕ್ಷ ದೇವರಾಜ ಮರಾಠಿ, ಸಮಾಜ ಕಲ್ಯಾಣ ಇಲಾಖೆಯ ಉಪನಿದೇರ್ಶಕ ಕೇಶವಮೂರ್ತಿ ಇಮ್ಮಡಿ, ಪ್ರಮುಖರಾದ ಎಸ್.ಕೆ. ಭಾಗ್ವತ್, ಹುಲೇಕಲ್ ಗ್ರಾಪಂ ಸದಸ್ಯರು, ಗ್ರಾಮಸ್ಥರು, ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.