ಕನ್ನಡಪ್ರಭ ವಾರ್ತೆ ಬೆಳಗಾವಿ
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳನ್ನು ಜಿಲ್ಲೆಯಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸಿ ಅವುಗಳ ಪ್ರಯೋಜನವನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವಲ್ಲಿ ಅಧಿಕಾರಿಗಳು ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಸಂಸದ ಜಗದೀಶ್ ಶೆಟ್ಟರ್ ಸೂಚಿಸಿದರು.ಸುವರ್ಣ ವಿಧಾನಸೌಧದ ವಿಡಿಯೊ ಕಾನ್ಫರೆನ್ಸ್ ಸಭಾಂಗಣದಲ್ಲಿ ಮಂಗಳವಾರ ನಡೆದ 2026-27ನೇ ಸಾಲಿನ ತ್ರೈಮಾಸಿಕ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಮೇಲ್ವಿಚಾರಣಾ ಸಮಿತಿ (ದಿಶಾ) ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಜಲ ಜೀವನ ಮಿಷನ್ ಯೋಜನೆಯ ಅನುಷ್ಠಾನಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.ಗ್ರಾಮೀಣ ಪ್ರದೇಶಗಳ ಪ್ರತಿಯೊಂದು ಮನೆಗೂ ನಲ್ಲಿ ನೀರು ಪೂರೈಸುವ ಗುರಿಯನ್ನು ನಿಗದಿತ ಅವಧಿಯೊಳಗೆ ಸಾಧಿಸಬೇಕು. ಕೆಲವು ಗ್ರಾಮಗಳಲ್ಲಿ ಯೋಜನೆಯ ಅನುಷ್ಠಾನ ಇನ್ನೂ ಪೂರ್ಣ ಪ್ರಮಾಣದಲ್ಲಿ ಆಗದಿರುವುದು ಗಮನಕ್ಕೆ ಬಂದಿದ್ದು, ಅಧಿಕಾರಿಗಳು ವಿಶೇಷ ಗಮನಹರಿಸಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ತಿಳಿಸಿದರು.ಮಳೆಯ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಈಗಾಗಲೇ ಕುಡಿಯುವ ನೀರಿನ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ. ಅಂತಹ ಪ್ರದೇಶಗಳನ್ನು ಗುರುತಿಸಿ ಮುಂಚಿತವಾಗಿಯೇ ಅಗತ್ಯ ಕ್ರಮಕೈಗೊಳ್ಳಬೇಕು. ಕುಡಿಯುವ ನೀರಿನ ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗದಂತೆ ನೋಡಿಕೊಳ್ಳಬೇಕು. ಭವಿಷ್ಯದಲ್ಲಿ ಸಮಸ್ಯೆ ಉಲ್ಬಣಗೊಳ್ಳದಂತೆ ಅಧಿಕಾರಿಗಳು ಯೋಜಿತ ರೀತಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದರು.ಬೆಳಗಾವಿ ಜಿಲ್ಲೆ ಸಂಪನ್ಮೂಲಗಳ ದೃಷ್ಟಿಯಿಂದ ಸಮೃದ್ಧ ಜಿಲ್ಲೆಯಾಗಿದ್ದು, ಶಿಕ್ಷಣ ಕ್ಷೇತ್ರದಲ್ಲಿಯೂ ರಾಜ್ಯದ ಮುಂಚೂಣಿ ಜಿಲ್ಲೆಗಳ ಸಾಲಿಗೆ ಸೇರುವ ಸಾಮರ್ಥ್ಯ ಹೊಂದಿದೆ. ಉಡುಪಿ ಮತ್ತು ಮಂಗಳೂರು ಜಿಲ್ಲೆಗಳು ಶೈಕ್ಷಣಿಕ ಸಾಧನೆಯಲ್ಲಿ ರಾಜ್ಯದಲ್ಲಿ ಮುಂಚೂಣಿಯಲ್ಲಿರುವಂತೆ ಬೆಳಗಾವಿಯ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಹೆಚ್ಚಿಸಲು ವಿಶೇಷ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ತಿಳಿಸಿದರು.ವಿದ್ಯಾರ್ಥಿಗಳಲ್ಲಿ ಗುಣಮಟ್ಟದ ಶಿಕ್ಷಣ, ಪರೀಕ್ಷಾ ಫಲಿತಾಂಶ ಸುಧಾರಣೆ ಹಾಗೂ ಶಾಲಾ ಶಿಕ್ಷಣದ ಅಭಿವೃದ್ಧಿಗೆ ಸಂಬಂಧಿಸಿದಂತೆ ಅಧಿಕಾರಿಗಳು ಯೋಜಿತ ಕಾರ್ಯತಂತ್ರ ರೂಪಿಸಬೇಕು. ಜಿಲ್ಲೆಯನ್ನು ಶೈಕ್ಷಣಿಕವಾಗಿ ಇನ್ನಷ್ಟು ಬಲಿಷ್ಠಗೊಳಿಸಲು ಹೊಸ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಬೇಕು ಎಂದು ಸೂಚಿಸಿದರು.ನರೇಗಾ ಕಾಮಗಾರಿಗಳಲ್ಲಿ ರಾಜಕೀಯ ಹಸ್ತಕ್ಷೇಪ ಬೇಡ:
ಗ್ರಾಮ ಪಂಚಾಯಿತಿಗಳ ಮೂಲಕ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ನರೇಗಾ) ಅಡಿಯಲ್ಲಿ ಕೈಗೊಳ್ಳುವ ಅಭಿವೃದ್ಧಿ ಕಾಮಗಾರಿಗಳನ್ನು ನಿಯಮಾನುಸಾರ ಅನುಷ್ಠಾನಗೊಳಿಸಬೇಕು. ಯಾವುದೇ ರೀತಿಯ ರಾಜಕೀಯ ಹಸ್ತಕ್ಷೇಪಕ್ಕೆ ಅವಕಾಶ ನೀಡದೆ ಪಾರದರ್ಶಕವಾಗಿ ಯೋಜನೆಗಳನ್ನು ಜಾರಿಗೊಳಿಸಬೇಕು ಎಂದು ತಿಳಿಸಿದರು.ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನ ಬಿತ್ತನೆ ಪ್ರಗತಿಯಲ್ಲಿದ್ದು, ರೈತರಿಗೆ ಅಗತ್ಯ ಪ್ರಮಾಣದಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರ ದೊರೆಯುವಂತೆ ನೋಡಿಕೊಳ್ಳಬೇಕು. ಸದ್ಯ ಜಿಲ್ಲೆಯಲ್ಲಿ ಬೀಜ ಮತ್ತು ರಸಗೊಬ್ಬರದ ಲಭ್ಯತೆ ತೃಪ್ತಿಕರವಾಗಿದ್ದರೂ ಮುಂದಿನ ದಿನಗಳಲ್ಲಿ ಬೇಡಿಕೆ ಹೆಚ್ಚಾದಲ್ಲಿ ಕೇಂದ್ರ ಸರ್ಕಾರದೊಂದಿಗೆ ಸಮಾಲೋಚನೆ ನಡೆಸಿ ಅಗತ್ಯ ಪೂರೈಕೆ ಖಚಿತಪಡಿಸಿಕೊಳ್ಳಲಾಗುವುದು ಎಂದರು.ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ಕಲ್ಯಾಣಕ್ಕಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿವೆ. ಈ ಯೋಜನೆಗಳ ಅನುಷ್ಠಾನದಲ್ಲಿ ಅಧಿಕಾರಿಗಳು ಮತ್ತು ಬ್ಯಾಂಕ್‌ಗಳು ಸಕ್ರಿಯ ಪಾತ್ರ ವಹಿಸಬೇಕು. ರೈತರಿಗೆ ಸಾಲ ಹಾಗೂ ಸಬ್ಸಿಡಿ ಸೌಲಭ್ಯಗಳನ್ನು ಕಾಲಮಿತಿಯೊಳಗೆ ಒದಗಿಸಬೇಕು ಎಂದು ಸೂಚಿಸಿದರು.ಸ್ಮಾರ್ಟ್ ಸಿಟಿ ಕಾಮಗಾರಿಗಳಿಗೆ ವೇಗ ನೀಡಿ:
ಬೆಳಗಾವಿ ಸ್ಮಾರ್ಟ್ ಸಿಟಿ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು. ವಿವಿಧ ಇಲಾಖೆಗಳ ನಡುವಿನ ಸಮನ್ವಯ ಕೊರತೆಯಿಂದ ಕಾಮಗಾರಿಗಳು ವಿಳಂಬವಾಗದಂತೆ ಕ್ರಮವಹಿಸಬೇಕು. ಕಾಮಗಾರಿ ನಡೆಸಿದ ಪ್ರದೇಶಗಳಲ್ಲಿ ರಸ್ತೆ ಹಾಳಾಗಿರುವ ಕುರಿತು ದೂರುಗಳು ಬಂದಿದ್ದು, ಸಂಬಂಧಿಸಿದ ಇಲಾಖೆ ತಕ್ಷಣ ರಸ್ತೆ ದುರಸ್ತಿ ಕೈಗೊಳ್ಳಬೇಕು ಎಂದು ತಿಳಿಸಿದರು.ಎಲ್‌ಎನ್‌ಟಿ ನಗರ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಸಾರ್ವಜನಿಕರಿಂದ ದೂರುಗಳು ಬಂದಿದ್ದು, ಮಹಾನಗರ ಪಾಲಿಕೆ ಆಯುಕ್ತರು ವೈಯಕ್ತಿಕ ಜವಾಬ್ದಾರಿ ವಹಿಸಿ ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.ಬೀದಿ ನಾಯಿಗಳ ಹಾವಳಿ ನಿಯಂತ್ರಣಕ್ಕೆ ನ್ಯಾಯಾಲಯದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕಾಗಿ ಆರೋಗ್ಯ ಇಲಾಖೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಅಗತ್ಯ ಔಷಧಿಗಳ ದಾಸ್ತಾನು ಸಮರ್ಪಕವಾಗಿ ಇರಿಸಿಕೊಳ್ಳಬೇಕು ಎಂದು ತಿಳಿಸಿದರು.ಇ-ಸ್ವತ್ತು ಯೋಜನೆಯಡಿ ಅರ್ಜಿದಾರರಿಗೆ ಪ್ರಮಾಣಪತ್ರಗಳನ್ನು ಶೀಘ್ರವಾಗಿ ವಿತರಿಸಬೇಕು. ರೈತರಿಂದ ವಿದ್ಯುತ್ ಪರಿವರ್ತಕಗಳ ದುರಸ್ತಿ ಕುರಿತು ದೂರುಗಳು ಬರುತ್ತಿದ್ದು, ಅವುಗಳನ್ನು ತ್ವರಿತವಾಗಿ ದುರಸ್ತಿಗೊಳಿಸಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಸ್ಮಶಾನಗಳ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.ಜಿಲ್ಲೆಯಲ್ಲಿ ಪೆಟ್ರೋಲ್ ಹಾಗೂ ಅಡುಗೆ ಅನಿಲದ ಲಭ್ಯತೆ ಕುರಿತು ನಿರಂತರ ನಿಗಾ ವಹಿಸಬೇಕು. ಯಾವುದೇ ರೀತಿಯ ಕೊರತೆ ಉಂಟಾಗದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು ಎಂದು ಶೆಟ್ಟರ್ ಅಧಿಕಾರಿಗಳಿಗೆ ಸೂಚಿಸಿದರು.ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಮಾತನಾಡಿ, ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು. ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ ಹಾಗೂ ಗ್ರಾಮಪಥ್ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಗಳ ವಿವರ ಒದಗಿಸುವಂತೆ ಸೂಚಿಸಿದರು. ರೈತರಿಗೆ ಬ್ಯಾಂಕುಗಳಿಂದ ದೊರೆಯುವ ಸಾಲ ಹಾಗೂ ಸಬ್ಸಿಡಿ ಸೌಲಭ್ಯಗಳನ್ನು ವಿಳಂಬವಿಲ್ಲದೆ ನೀಡಬೇಕು ಎಂದರು.ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ ಶಿಂಧೆ ಮಾತನಾಡಿ, ಜಿಲ್ಲೆಯ ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ವಿವಿಧ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳಿಗೆ ನೀರು ಪೂರೈಕೆಗೆ ಚಿಕ್ಕೋಡಿ ಭಾಗದಲ್ಲಿ 22 ಕೊಳವೆಬಾವಿಗಳನ್ನು ನಿರ್ಮಿಸಲಾಗಿದೆ. ಗ್ರಾಮ ಪಂಚಾಯಿತಿಗಳಲ್ಲಿ ನೀರು ಸರಬರಾಜಿಗೆ ಸ್ವಂತ ಟ್ಯಾಂಕರ್‌ಗಳ ವ್ಯವಸ್ಥೆ ಮಾಡಲಾಗಿದೆ. ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಮೂಲಕ ಶಾಶ್ವತ ಪರಿಹಾರ ಕಲ್ಪಿಸುವ ಕಾರ್ಯ ನಡೆಯುತ್ತಿದೆ ಎಂದು ತಿಳಿಸಿದರು.ಚಿಕ್ಕೋಡಿ ಡಿಡಿಪಿಐ ಮಾತನಾಡಿ, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ 40 ಪಿಎಂಶ್ರೀ ಶಾಲೆಗಳು ಕಾರ್ಯನಿರ್ವಹಿಸುತ್ತಿವೆ. ಇದರಲ್ಲಿ 10 ಪ್ರೌಢಶಾಲೆಗಳು ಹಾಗೂ 30 ಪ್ರಾಥಮಿಕ ಶಾಲೆಗಳಿವೆ. ಸಂಗೀತ ಮತ್ತು ಕರಾಟೆ ಶಿಕ್ಷಕರನ್ನೂ ನೇಮಕ ಮಾಡಲಾಗಿದೆ. ಪಿಎಂಶ್ರೀ ಶಾಲೆಗಳಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಶೇ.95ಕ್ಕಿಂತ ಹೆಚ್ಚಿದ್ದು, ಗ್ರಾಮೀಣ ಭಾಗದಲ್ಲಿಯೂ ಈ ಶಾಲೆಗಳ ಬೇಡಿಕೆ ಹೆಚ್ಚಾಗಿದೆ ಎಂದು ತಿಳಿಸಿದರು.ಸಭೆಯಲ್ಲಿ ಚಿಕ್ಕೋಡಿ ಲೋಕಸಭಾ ಸದಸ್ಯೆ ಪ್ರಿಯಾಂಕಾ ಜಾರಕಿಹೊಳಿ, ದಿಶಾ ಸಮಿತಿಯ ಸದಸ್ಯರು, ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಡಿಸಿಪಿ ನಾರಾಯಣ ಭರಮಣಿ, ಮಹಾನಗರ ಪಾಲಿಕೆ ಆಯುಕ್ತ ಎಂ. ಕಾರ್ತಿಕ್ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.