ಸಾರಾಂಶ
ಜಿಲ್ಲೆಯ ಹಲವು ರೈತರು ಒಟ್ಟುಗೂಡಿ ಬೃಹತ್ ಪ್ರಮಾಣದಲ್ಲಿ ಆಹಾರ ಸಂಸ್ಕರಣಾ ಉದ್ದಿಮ ಸ್ಥಾಪನೆ ಮಾಡಲು ಪ್ರೋತ್ಸಾಹ ನೀಡಬೇಕು.
ಕಾರವಾರ: ಜಿಲ್ಲೆಯ ರೈತರು ಬೆಳೆಯುವ ಉತ್ಪನ್ನಗಳಿಗೆ ಮೌಲ್ಯವರ್ಧನೆ ಮಾಡಿ ಆಹಾರ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಒತ್ತು ನೀಡುವ ಮೂಲಕ ರೈತರಿಗೆ ತಮ್ಮ ಉತ್ಪನ್ನಗಳಿಗೆ ಗರಿಷ್ಠ ಲಾಭ ದೊರೆಯುವಂತೆ ಮಾಡುವ ನಿಟ್ಟಿನಲ್ಲಿ ಕೃಷಿ ಮತ್ತು ತೋಟಗಾರಿಕಾ ಇಲಾಖೆಯ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಸೂಚಿಸಿದರು.
ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಕೃಷಿ ಮತ್ತು ತೋಟಗಾರಿಕಾ ಇಲಾಖೆಯ ವಿವಿಧ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ಬೆಳೆಗಳಿಗೆ ಲಾಭ ದೊರಕಿಸುವ ಉದ್ದೇಶದಿಂದ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಇವುಗಳ ಬಗ್ಗೆ ಜಿಲ್ಲೆಯ ಎಲ್ಲ ರೈತರಿಗೆ ಅರಿವು ಮೂಡಿಸಬೇಕು. ಅವರು ತಮ್ಮ ಉತ್ಪನ್ನಗಳನ್ನು ಮೌಲ್ಯವರ್ಧನೆ ಮಾಡುವ ವಿಧಾನಗಳ ಬಗ್ಗೆ ತರಬೇತಿ ಆಯೋಜಿಸಿ, ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಸ್ಥಾಪನೆಗೆ ಬ್ಯಾಂಕ್‌ಗಳಿಂದ ದೊರೆಯುವ ಸಾಲ ಮತ್ತು ಸಬ್ಸಿಡಿಗಳ ಕುರಿತು ಮಾಹಿತಿ ನೀಡುವಂತೆ ತಿಳಿಸಿದರು.ಜಿಲ್ಲೆಯಲ್ಲಿ ಬೆಳೆಯುವ ರೈತರ ಉತ್ಪನ್ನಗಳನ್ನು ವೈಜ್ಞಾನಿಕ ರೀತಿಯಲ್ಲಿ ಮೌಲ್ಯ ವರ್ಧನೆ ಮಾಡುವ ಕುರಿತಂತೆ ಕೇಂದ್ರಿಯ ಆಹಾರ ತಾಂತ್ರಿಕ ಸಂಶೋಧನಾಲಯದ ವಿಜ್ಞಾನಿಗಳ ನೆರವು ಪಡೆಯುವಂತೆ ಮುತ್ತು ಈ ಉತ್ಪನ್ನಗಳಿಗೆ ಬ್ರಾಂಡಿಂಗ್ ಮಾಡಲು ಮತ್ತು ಆನ್‌ಲೈನ್‌ನಲ್ಲಿ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಒದಗಿಸುವ ಕುರಿತು ಕಾರ್ಯೋನ್ಮುಖರಾಗುವಂತೆ ಸೂಚಿಸಿದರು.ಜಿಲ್ಲೆಯ ಹಲವು ರೈತರು ಒಟ್ಟುಗೂಡಿ ಬೃಹತ್ ಪ್ರಮಾಣದಲ್ಲಿ ಆಹಾರ ಸಂಸ್ಕರಣಾ ಉದ್ದಿಮ ಸ್ಥಾಪನೆ ಮಾಡಲು ಪ್ರೋತ್ಸಾಹ ನೀಡಬೇಕು. ರೈತ ಉತ್ಪಾದಕ ಸಂಸ್ಥೆಗಳು ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಬೇಕು. ಜಿಲ್ಲೆಯಲ್ಲಿ ಬಂದರಿನಿಂದ ಜಿಲ್ಲೆಯ ರೈತರ ಮೌಲ್ಯವರ್ಧಿತ ಉತ್ಪನ್ನಗಳನ್ನು ರಫ್ತು ಮಾಡುವ ಕುರಿತಂತೆ ಅಧಿಕಾರಿಗಳು ಗಮನಹರಿಸಬೇಕು ಎಂದರು.
ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರಕುಮಾರ ಕಾಂದೂ, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶಿವಪ್ರಸಾದ್ ಗಾಂವಕರ್, ತೋಟಗಾರಿಕಾ ಇಲಾಖೆಯ ಉಪನಿರ್ದೇಶಕ ಸತೀಶ್, ಲೀಡ್ ಬ್ಯಾಂಕ್ ಮ್ಯಾನೇಜರ್ ಭಾರತಿ ವಸಂತ್ ಹಾಗೂ ಜಿಲ್ಲೆಯ ಎಲ್ಲ ತಾಲೂಕುಗಳ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರು ಇದ್ದರು.