ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸ್ತ್ರೀ ಸಬಲೀಕರಣಕ್ಕೆ ಒತ್ತು

| Published : Aug 17 2024, 12:53 AM IST

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸ್ತ್ರೀ ಸಬಲೀಕರಣಕ್ಕೆ ಒತ್ತು
Share this Article
  • FB
  • TW
  • Linkdin
  • Email

ಸಾರಾಂಶ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯಾಲಯದಲ್ಲಿ ಶಾಸಕ ಎಚ್‌.ಡಿ. ತಮ್ಮಯ್ಯ ಅವರು, ಸುಜ್ಞಾನ ನಿಧಿ ಶಿಷ್ಯ ವೇತನ ಮಂಜೂರಾತಿ ಪತ್ರ ವಿತರಿಸಿದರು. ವಿಧಾನಪರಿಷತ್‌ ಸದಸ್ಯ ಎಸ್‌.ಎಲ್‌. ಭೋಜೇಗೌಡ, ಕೊರಗಪ್ಪ ಪೂಜಾರಿ, ಮಂಜುನಾಥ್‌ ಹೊಸಮನಿ ಇದ್ದರು.

ಚಿಕ್ಕಮಗಳೂರು ಕನ್ನಡಪ್ರಭವಾರ್ತೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜನಪರ ಯೋಜನೆಗಳ ಜೊತೆಗೆ ಮಹಿಳೆಯರನ್ನು ಆರ್ಥಿಕ ಸಬಲೀಕರಣಗೊಳಿಸಿ ಸರ್ಕಾರಕ್ಕೆ ಸಮಾನವಾಗಿ ಕೆಲಸ ಮಾಡುತ್ತಿದೆ ಎಂದು ಶಾಸಕ ಎಚ್‌.ಡಿ. ತಮ್ಮಯ್ಯ ಅವರು ಹೇಳಿದ್ದಾರೆ.

ಜಿಲ್ಲಾ ಕಚೇರಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಏರ್ಪಡಿಸಿದ್ದ ಸುಜ್ಞಾನ ನಿಧಿ ಶಿಷ್ಯ ವೇತನ ಮಂಜೂರಾತಿ ಪತ್ರ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕೆಲವು ಹಳ್ಳಿಗಳಲ್ಲಿ ಸಣ್ಣ ಸಣ್ಣ ಕೆರೆಗಳನ್ನು ಹೂಳೆತ್ತಿ ನೀರು ಸಂಗ್ರಹವಾಗುವಂತಹ ಅಭಿವೃದ್ಧಿ ಕೆಲಸಗಳ ಜೊತೆಗೆ ನಿರ್ಗತಿಕರಿಗೆ ಮಾಸಾಶನ, ಸ್ಥಳೀಯವಾಗಿ ವಂತಿಕೆ ನೀಡಿದರೆ ಧರ್ಮಸ್ಥಳದಿಂದಲೇ ಉಳಿದ ಶೇ.60 ಭಾಗ ಹಣವನ್ನು ನೀಡಿ ದೇವಸ್ಥಾನಗಳನ್ನು ಜೀರ್ಣೋದ್ಧಾರ ಮಾಡುತ್ತಿದ್ದಾರೆ ಎಂದು ಹೇಳಿದರು.

ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರ ಆಶೀರ್ವಾದದಿಂದ ವ್ಯಸನಮುಕ್ತ, ಮದ್ಯವರ್ಜನ ಶಿಬಿರಗಳನ್ನು ಯಶಸ್ವಿಯಾಗಿ ನಡೆಸುವ ಮೂಲಕ ಜಿಲ್ಲೆ ಮತ್ತು ರಾಜ್ಯದಲ್ಲಿ ಹೆಸರು ವಾಸಿಯಾಗಿದೆ ಎಂದು ತಿಳಿಸಿದರು.ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಸೇವೆ ಸಲ್ಲಿಸುತ್ತಿರುವ ನೌಕರರ ಮಕ್ಕಳಿಗೆ ಪ್ರೋತ್ಸಾಹ ನೀಡಲು ಸುಜ್ಞಾನ ನಿಧಿ ಶಿಷ್ಯ ವೇತನ ಮುಂತಾದ ಚಟುವಟಿಕೆಗಳನ್ನು ಜಾರಿಗೆ ತಂದು ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗಿದ್ದು, ಇದು ಮುಂದೆಯೂ ಇದೇ ರೀತಿ ನಿರಂತರವಾಗಿ ನಡೆಯಲಿ ಎಂದರು.ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಪರ ಕಾರ್ಯಗಳಲ್ಲಿ ತಾವೂ ಸಹ ಸಹಕಾರ ನೀಡುವುದಾಗಿ ಭರವಸೆ ನೀಡಿದ ಶಾಸಕರು, ತಾಂತ್ರಿಕ ವಿದ್ಯಾಭ್ಯಾಸದಲ್ಲಿ ಉತ್ತಮ ಶಿಕ್ಷಣ ಪಡೆದು ವಿದ್ಯಾರ್ಥಿಗಳು ಒಳ್ಳೆಯ ಭವಿಷ್ಯ ರೂಪಿಸಿಕೊಳ್ಳಲು ಕಿವಿಮಾತು ಹೇಳಿದರು.ಪೋಷಕರು ತಮ್ಮ ಜೀವನವನ್ನು ಮುಡುಪಾಗಿಟ್ಟು ಪರಿಶ್ರಮದಿಂದ ತಮ್ಮ ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಶಿಕ್ಷಣ ಕೊಡಿಸುತ್ತಿದ್ದಾರೆ. ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗದೆ ತಪಸ್ಸಿನ ರೀತಿ ಉತ್ತಮ ಶಿಕ್ಷಣ ಪಡೆಯಬೇಕಾಗಿರುವುದು ಅಗತ್ಯ ಎಂದರು.ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಮಾತನಾಡಿ, ಪ್ರಸ್ತುತ ವಿದ್ಯಾರ್ಥಿಗಳಿಗೆ ಆಕಾಶದಷ್ಟು ಅವಕಾಶಗಳು ಲಭ್ಯವಾಗಿದ್ದು, ಇದರ ಸದುಪಯೋಗ ಪಡೆದುಕೊಂಡು ತಮ್ಮ ಉಜ್ವಲ ಭವಿಷ್ಯ ರೂಪಿಸುವಂತೆ ಕರೆ ನೀಡಿದರು. ಸಮಾಜದ ಮುಖ್ಯ ವಾಹಿನಿಯಲ್ಲಿ ತಮ್ಮ ಮಕ್ಕಳು ಬರಬೇಕೆಂಬುದು ಪೋಷಕರ ಅಭಿಲಾಷೆಯಾಗಿದ್ದು, ತಮಗೆ ಎಷ್ಟೇ ಕಷ್ಟಗಳು ಇದ್ದರೂ ಸಹ ತೋರಿಸದೆ ಮಕ್ಕಳ ಒಳಿತಿಗಾಗಿ ತೊಡಗಿಸಿಕೊಂಡು ದುಡಿಯುತ್ತಿದ್ದಾರೆ ಎಂಬ ಕಷ್ಟದ ಅರಿವು ವಿದ್ಯಾರ್ಥಿಗಳಿಗೆ ಇರಬೇಕು ಎಂದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ಕೊರಗಪ್ಪ ಪೂಜಾರಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಎಂಐಎಸ್‌ ಯೋಜನಾಧಿಕಾರಿ ಮಂಜುನಾಥ್ ಹೊಸಮನಿ, ರಮೇಶ್ ನಾಯ್ಕ, ಷಡಾಕ್ಷರಿ, ಎಸ್.ಡಿ.ಎಂ ಮಂಜು ಉಪಸ್ಥಿತರಿದ್ದರು.