ಹಾವೇರಿ: ಪರಿಸರ ಸಂರಕ್ಷಣೆಯ ಬಗ್ಗೆ ಶಿಕ್ಷಣ ಇಲಾಖೆ ಹೆಚ್ಚಿನ ಒತ್ತು ನೀಡಬೇಕು. ಪರಿಸರ ಸಂರಕ್ಷಣೆ ಕೇವಲ ಕರ್ತವ್ಯವಾಗಿರದೆ, ಬಾಲ್ಯದಿಂದಲೇ ಮಕ್ಕಳಿಗೆ ಪರಿಸರ ಸಂರಕ್ಷಣೆ ಕುರಿತು ಸಂಸ್ಕಾರ ಬೆಳೆಯಬೇಕು ಎಂದು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಡಾ. ಪುನೀತ್ ಬಿ.ಆರ್. ಹೇಳಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಕರ್ನಾಟಕ ರಾಜ್ಯ ಹವಾಮಾನ ಬದಲಾವಣೆ ಕುರಿತು ಕ್ರಿಯಾ ಯೋಜನೆ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಹೊಸದಾಗಿ ಜಾರಿಯಾಗಿರುವ ಘನ ತ್ಯಾಜ್ಯ ನಿರ್ವಹಣಾ ನಿಯಮಗಳು-2026 ಅನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಅಧಿಕಾರಿಗಳಿಗೆ ಕರೆ ನೀಡಿದರು.

ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆಯು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಸರ್ಕಾರದ ಸ್ವಾಯತ್ತ ಸಂಸ್ಥೆಯಾಗಿದೆ. ಕರ್ನಾಟಕ ಸರ್ಕಾರದ ನಿರ್ದೇಶನದಂತೆ ಎಂಪ್ರಿ ಸಂಸ್ಥೆಯು ಕರ್ನಾಟಕ ರಾಜ್ಯ ಹವಾಮಾನ ಬದಲಾವಣೆಯ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಿದ್ದು, 2024ರಲ್ಲಿ ಕೇಂದ್ರ ಅರಣ್ಯ, ಪರಿಸರ ಮತ್ತು ಹವಾಮಾನ ಬದಲಾವಣೆ ಸಚಿವಾಲಯದಿಂದ ಅನುಮೋದನೆ ಪಡೆದಿದೆ ಎಂದರು.

ಈ ಯೋಜನೆಯಡಿ ಹವಾಮಾನ ಬದಲಾವಣೆಗೆ ಸಂಬಂಧಿಸಿದ ವಿವಿಧ ಕಾರ್ಯಾಂಶಗಳ ಆಧಾರದ ಮೇಲೆ ರಾಜ್ಯದ ವಿವಿಧ ಇಲಾಖೆಗಳು 2025-2030ರ ಅವಧಿಗೆ ಪ್ರಮುಖ ಕಾರ್ಯಕ್ಷಮತಾ ಸೂಚಕಗಳನ್ನು ಹಾಗೂ ಗುರಿಗಳನ್ನು ನಿಗದಿಪಡಿಸಿವೆ. ಈ ಗುರಿಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಇತರ ಪಾಲುದಾರ ಸಂಸ್ಥೆಗಳ ಸಾಮರ್ಥ್ಯ ವೃದ್ಧಿ ಅಗತ್ಯವಾಗಿದೆ ಎಂದು ಹೇಳಿದರು.

ಈ ಹಿನ್ನೆಲೆಯಲ್ಲಿ ಎಂಪ್ರಿ ಸಂಸ್ಥೆಯು ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯ ಸಹಯೋಗದೊಂದಿಗೆ 2025-26ನೇ ಸಾಲಿನಲ್ಲಿ ರಾಜ್ಯದ 22 ಜಿಲ್ಲೆಗಳಲ್ಲಿ ತರಬೇತಿ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಆಯೋಜಿಸಿತ್ತು. ಇದರ ಮುಂದುವರಿದ ಭಾಗವಾಗಿ 2026-27ನೇ ಸಾಲಿನಲ್ಲಿ ರಾಜ್ಯದ ಎಲ್ಲ 31 ಜಿಲ್ಲೆಗಳಲ್ಲಿ ತರಬೇತಿ ಕಾರ್ಯಕ್ರಮಗಳನ್ನು ವಿಸ್ತರಿಸಲಾಗಿದೆ ಎಂದರು.


ಜಿಲ್ಲಾ ಪಂಚಾಯಿತಿ ಹಾವೇರಿಯ ಮುಖ್ಯ ಯೋಜನಾಧಿಕಾರಿ ಎಚ್.ವೈ. ಮೀಸಿ ಅವರು ಹವಾಮಾನ ಬದಲಾವಣೆಯ ಪ್ರತಿಕೂಲ ಪರಿಣಾಮಗಳು ಹಾಗೂ ತರಬೇತಿ ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು ಹಾಗೂ ತರಬೇತಿಯ ಪ್ರಯೋಜನಗಳನ್ನು ತಮ್ಮ ಕಾರ್ಯಕ್ಷೇತ್ರದಲ್ಲಿ ಪರಿಣಾಮಕಾರಿಯಾಗಿ ಆಳವಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಸಲಹೆ ನೀಡಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ಎಂಪ್ರಿ ಸಂಸ್ಥೆಯ ಸಂಶೋಧನಾ ವಿಜ್ಞಾನಿಗಳಾದ ಡಾ. ಪವಿತ್ರಾ ಪಿ. ನಾಯಕ್ ಅವರು ಕರ್ನಾಟಕ ರಾಜ್ಯ ಹವಾಮಾನ ಬದಲಾವಣೆಯ ಕ್ರಿಯಾ ಯೋಜನೆ ಕುರಿತು ಹಾಗೂ ಜಲ ಸಂಪನ್ಮೂಲ ವಲಯಕ್ಕೆ ಸಂಬಂಧಿಸಿದ ಹವಾಮಾನ ಕ್ರಿಯಾ ಯೋಜನೆ ಕುರಿತು ಜಲ ಸಂಪನ್ಮೂಲ ತಜ್ಞರು, ಎಸಿಐಡಬ್ಲ್ಯುಆರ್‌ಎಂ, ಡಾ. ಉಷಾ ಅವರು ಉಪನ್ಯಾಸ ನೀಡಿದರು.

ಎನ್.ಆರ್.ಡಿ.ಎಂ.ಎಸ್. ಅಧಿಕಾರಿ ಬಸವರಾಜ್ ಬಾರ್ಕಿ, ಎಂಪ್ರಿ ಸಂಸ್ಥೆಯ ತರಬೇತಿ ಅಸೋಸಿಯೇಟ್ ರುಚಿತಾ ಹಾಗೂ ತರಬೇತಿ ಸಹಾಯಕ ರಾಘವೇಂದ್ರ ಎನ್. ಇತರರು ಉಪಸ್ಥಿತರಿದ್ದರು. ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಂಘ-ಸಂಸ್ಥೆಗಳ ಪ್ರತಿನಿಧಿಗಳು, ಶಿಕ್ಷಣ ಸಂಸ್ಥೆಗಳ ಸದಸ್ಯರು ಹಾಗೂ ಇತರರು ಭಾಗವಹಿಸಿದ್ದರು.