ಕನ್ನಡಪ್ರಭ ವಾರ್ತೆ ಬೆಳಗಾವಿ

ಕೃಷಿ, ಸಣ್ಣ ಮತ್ತು ಅತಿ ಸಣ್ಣ ಕೈಗಾರಿಕೆಗಳು, ಶಿಕ್ಷಣ, ವಸತಿ ಹಾಗೂ ಸ್ವಯಂ ಉದ್ಯೋಗ ಕ್ಷೇತ್ರಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಸಾಲ ಸೌಲಭ್ಯ ಒದಗಿಸಬೇಕು. ಸರ್ಕಾರದ ವಿವಿಧ ಜನಕಲ್ಯಾಣ ಹಾಗೂ ಸಬ್ಸಿಡಿ ಆಧಾರಿತ ಯೋಜನೆಗಳ ಪ್ರಯೋಜನಗಳನ್ನು ಅರ್ಹ ಫಲಾನುಭವಿಗಳಿಗೆ ತ್ವರಿತವಾಗಿ ತಲುಪಿಸಬೇಕು ಎಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಸಂಸದ ಜಗದೀಶ ಶೆಟ್ಟರ್ ಸೂಚಿಸಿದರು.

ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ಸಲಹಾ ಸಮಿತಿ ಹಾಗೂ ಜಿಲ್ಲಾಮಟ್ಟದ ಪರಿಶೀಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರದ ವಿವಿಧ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಲ್ಲಿ ಬ್ಯಾಂಕ್‌ಗಳು ನಿರೀಕ್ಷಿತ ಮಟ್ಟದಲ್ಲಿ ಕಾರ್ಯನಿರ್ವಹಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು, ವಿವಿಧ ಯೋಜನೆಗಳಡಿ ಬಿಡುಗಡೆಯಾಗುವ ಸಹಾಯಧನ ಹಾಗೂ ಸಾಲ ಸೌಲಭ್ಯಗಳು ಫಲಾನುಭವಿಗಳಿಗೆ ಕಾಲಮಿತಿಯೊಳಗೆ ತಲುಪಬೇಕು. ಈ ಕಾರ್ಯದಲ್ಲಿ ವಿಫಲವಾಗುವ ಬ್ಯಾಂಕ್ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.ಸರ್ಕಾರಿ ಇಲಾಖೆಗಳು ಶಿಫಾರಸು ಮಾಡುವ ಸಾಲ ಅರ್ಜಿಗಳನ್ನು ಅನಗತ್ಯವಾಗಿ ಬಾಕಿ ಉಳಿಸದೆ ತ್ವರಿತವಾಗಿ ವಿಲೇವಾರಿ ಮಾಡಬೇಕು. ಸ್ವಯಂ ಉದ್ಯೋಗ ಕೈಗೊಳ್ಳಲು ಬಯಸುವ ಯುವಜನರಿಗೆ ಬ್ಯಾಂಕುಗಳು ಆದ್ಯತೆ ಮೇರೆಗೆ ಸಾಲ ಸೌಲಭ್ಯ ಕಲ್ಪಿಸಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಸಾರ್ವಜನಿಕರ ಅಗತ್ಯಕ್ಕೆ ಅನುಗುಣವಾಗಿ ರಾಷ್ಟ್ರೀಕೃತ ಬ್ಯಾಂಕ್ ಶಾಖೆಗಳನ್ನು ಆರಂಭಿಸಬೇಕು. ಕೆಲವು ಪ್ರದೇಶಗಳಲ್ಲಿ ಬ್ಯಾಂಕ್ ವಿಲೀನದಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗಿರುವ ಬಗ್ಗೆ ದೂರುಗಳು ಬಂದಿದ್ದು, ಜನರಿಗೆ ಅನಾನುಕೂಲವಾಗದ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.ಮೂಡಲಗಿ ತಾಲೂಕಿನ ಯಾದವಾಡ ಗ್ರಾಮದಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆ ಆರಂಭಿಸುವಂತೆ ಗ್ರಾಮಸ್ಥರು ಮನವಿ ಮಾಡಿದ್ದು, ಅಗತ್ಯವಿದ್ದರೇ ಶಾಖೆ ತೆರೆಯಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. ಇದೇ ರೀತಿ ಕುಲಗೋಡ ಮತ್ತು ಶಿಂದೊಳ್ಳಿ ಗ್ರಾಮಗಳಲ್ಲಿಯೂ ಹೆಚ್ಚುವರಿ ರಾಷ್ಟ್ರೀಕೃತ ಬ್ಯಾಂಕ್ ಶಾಖೆಗಳನ್ನು ತೆರೆಯುವ ಬಗ್ಗೆ ಪರಿಶೀಲನೆ ನಡೆಸುವಂತೆ ಸೂಚಿಸಿದರು.ಬ್ಯಾಂಕುಗಳ ಸಿಎಸ್‌ಆರ್ ಅನುದಾನದಡಿ ಕೈಗೊಳ್ಳುವ ಕಾರ್ಯಕ್ರಮಗಳಲ್ಲಿ ಸರ್ಕಾರಿ ಶಾಲೆಗಳಿಗೆ ಆದ್ಯತೆ ನೀಡಬೇಕು. ಕಳೆದ ವರ್ಷ ಕೈಗೊಂಡ ಕಾಮಗಾರಿಗಳ ವರದಿಯನ್ನು ಸಲ್ಲಿಸುವಂತೆ ಸೂಚಿಸಿದ ಅವರು, ಶಾಲೆಗಳು, ಅಂಗನವಾಡಿಗಳು ಹಾಗೂ ವಸತಿ ನಿಲಯಗಳಲ್ಲಿ ಕೈಗೊಳ್ಳುವ ಕಾಮಗಾರಿಗಳಿಗೆ ಪೂರ್ವಾನುಮತಿ ಪಡೆಯಬೇಕು ಎಂದರು.ನಗರದಲ್ಲಿ ಇತ್ತೀಚೆಗೆ ಬೆಳಕಿಗೆ ಬಂದಿರುವ ಎರಡು ಪ್ರಮುಖ ಹಣ ಠೇವಣಿ ವಂಚನೆ ಪ್ರಕರಣಗಳನ್ನು ಉಲ್ಲೇಖಿಸಿದ ಸಂಸದರು, ಬ್ಯಾಂಕುಗಳಲ್ಲಿ ನಡೆಯುವ ಹಣಕಾಸು ವ್ಯವಹಾರಗಳ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು. ಸಾಲ ನೀಡುವ ಸಂದರ್ಭದಲ್ಲಿ ಬ್ಯಾಂಕುಗಳು ಸಾಕಷ್ಟು ದಾಖಲೆಗಳನ್ನು ಪರಿಶೀಲಿಸುತ್ತವೆ. ಆದರೆ, ದೊಡ್ಡ ಪ್ರಮಾಣದ ಠೇವಣಿಗಳನ್ನು ಸ್ವೀಕರಿಸುವ ಸಂದರ್ಭದಲ್ಲಿ ಸಮರ್ಪಕ ಪರಿಶೀಲನೆ ನಡೆಯುವುದಿಲ್ಲ. ಇದರಿಂದ ವಂಚನೆ ಪ್ರಕರಣಗಳಿಗೆ ಅವಕಾಶ ಸೃಷ್ಟಿಯಾಗುತ್ತದೆ. ಎಲ್ಲ ಬ್ಯಾಂಕುಗಳಲ್ಲಿ ಅನುಮಾನಾಸ್ಪದ ಮತ್ತು ಅಸಾಮಾನ್ಯ ಪ್ರಮಾಣದ ಹಣಕಾಸು ವ್ಯವಹಾರಗಳ ಪಟ್ಟಿಯನ್ನು ಸಿದ್ಧಪಡಿಸಿ, ಅದರ ಬಗ್ಗೆ ಲೀಡ್ ಬ್ಯಾಂಕ್ ವ್ಯವಸ್ಥಾಪಕರು ಸಮಗ್ರ ವರದಿ ಸಲ್ಲಿಸಬೇಕು ಎಂದು ನಿರ್ದೇಶನ ನೀಡಿದರು.ಸಭೆಯಲ್ಲಿ 2026-27ನೇ ಸಾಲಿನ ಜಿಲ್ಲಾ ವಾರ್ಷಿಕ ಸಾಲ ಯೋಜನೆ ಪುಸ್ತಕವನ್ನು ಸಂಸದ ಜಗದೀಶ ಶೆಟ್ಟರ್ ಬಿಡುಗಡೆಗೊಳಿಸಿದರು.

2026-27ನೇ ಸಾಲಿನ ಜಿಲ್ಲಾ ವಾರ್ಷಿಕ ಸಾಲ ಯೋಜನೆಯಡಿ ಒಟ್ಟು ₹37,035 ಕೋಟಿ ಗುರಿ ನಿಗದಿಪಡಿಸಲಾಗಿದೆ. ಇದರಲ್ಲಿ ಆದ್ಯತಾ ವಲಯಕ್ಕೆ ₹22,123 ಕೋಟಿ ಹಾಗೂ ಕೃಷಿ ಕ್ಷೇತ್ರಕ್ಕೆ ₹14,806 ಕೋಟಿ ಮೀಸಲಿರಿಸಲಾಗಿದೆ. ಈ ಯೋಜನೆಯ ಮೂಲಕ ಆದ್ಯತಾ ವಲಯದಲ್ಲಿ ಶೇ.11.08 ಮತ್ತು ಕೃಷಿ ಕ್ಷೇತ್ರದಲ್ಲಿ ಶೇ.10.99ರಷ್ಟು ಬೆಳವಣಿಗೆ ಸಾಧಿಸುವ ಗುರಿ ಹೊಂದಲಾಗಿದೆ. ಸಭೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಪ್ರಶಾಂತ್ ಘೋಡಕೆ, ನಬಾರ್ಡ್ ಜಿಲ್ಲಾ ಅಭಿವೃದ್ಧಿ ವ್ಯವಸ್ಥಾಪಕ ಅಭಿನವ ಯಾದವ್, ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿಯ ಉಪ ಮಹಾಪ್ರಬಂಧಕ ಮುನುಗಪತಿ ಚಂದ್ರಶೇಖರ್, ವಿವಿಧ ಬ್ಯಾಂಕುಗಳ ಪ್ರಾದೇಶಿಕ ಮತ್ತು ಶಾಖಾ ವ್ಯವಸ್ಥಾಪಕರು ಹಾಗೂ ವಿವಿಧ ಸರ್ಕಾರಿ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.ಎಸ್ಸಿ, ಎಸ್ಟಿ ಫಲಾನುಭವಿಗಳಿಗೆ ಸಾಲ ನಿರಾಕರಿಸಿದರೆ ಕ್ರಮ: ಜಿಪಂ ಸಿಇಒ


ಸಭೆಯಲ್ಲಿ ಜಿಲ್ಲಾ ಪಂಚಾಯತಿ ಸಿಇಒ ರಾಹುಲ್ ಶಿಂಧೆ ಮಾತನಾಡಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಸರ್ಕಾರಿ ಯೋಜನೆಗಳಡಿ ದೊರೆಯುವ ಸಾಲ ಸೌಲಭ್ಯಗಳನ್ನು ಅನಗತ್ಯವಾಗಿ ನಿರಾಕರಿಸುವ ಅಥವಾ ವಿಳಂಬ ಮಾಡುವ ಬ್ಯಾಂಕ್ ಅಧಿಕಾರಿಗಳ ವಿರುದ್ಧ ದೂರು ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.ಗೋಕಾಕ್‌ನ ಎಸ್‌ಬಿಐ ಶಾಖೆಯಲ್ಲಿ ಆದಿಜಾಂಬವ ಅಭಿವೃದ್ಧಿ ನಿಗಮದ ಯೋಜನೆಯಡಿ ಮಂಜೂರಾದ ಸಾಲ ಸೌಲಭ್ಯವನ್ನು ಎಂಟು ತಿಂಗಳಿನಿಂದ ಬಾಕಿ ಇಟ್ಟಿರುವ ಬಗ್ಗೆ ದೂರುಗಳು ಬಂದಿದ್ದು, ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಹಲವು ವರ್ಷಗಳಿಂದ ಬಾಕಿ ಉಳಿದಿರುವ ಸರ್ಕಾರಿ ಯೋಜನೆಗಳ ಸಾಲ ಅರ್ಜಿಗಳನ್ನು ಒಂದು ವಾರದೊಳಗೆ ವಿಲೇವಾರಿ ಮಾಡಬೇಕು. ಇಲ್ಲವಾದಲ್ಲಿ ಲೀಡ್ ಬ್ಯಾಂಕ್ ಅಧಿಕಾರಿಗಳು ಸೇರಿದಂತೆ ಸಂಬಂಧಿತ ಬ್ಯಾಂಕ್ ವ್ಯವಸ್ಥಾಪಕರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.