ಸಾರಾಂಶ
ಜಗತ್ತಿನಲ್ಲಿ ೨೦೪೭ರ ವೇಳೆಗೆ ಭಾರತ ಬಲಿಷ್ಠ ರಾಷ್ಟ್ರವಾಗಿ ರೂಪುಗೊಳ್ಳಬೇಕಾದರೆ ಶಿಕ್ಷಣದ ಸಬಲೀಕರಣ ಬಹಳ ಮುಖ್ಯವಾಗಿದೆ ಎಂದು ವಿವಿಯ ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ ಹೇಳಿದರು.
ಕನ್ನಡಪ್ರಭ ವಾರ್ತೆ ವಿಜಯಪುರ
ಜಗತ್ತಿನಲ್ಲಿ ೨೦೪೭ರ ವೇಳೆಗೆ ಭಾರತ ಬಲಿಷ್ಠ ರಾಷ್ಟ್ರವಾಗಿ ರೂಪುಗೊಳ್ಳಬೇಕಾದರೆ ಶಿಕ್ಷಣದ ಸಬಲೀಕರಣ ಬಹಳ ಮುಖ್ಯವಾಗಿದೆ ಎಂದು ವಿವಿಯ ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿವಿಯಲ್ಲಿ ಶುಕ್ರವಾರ ನಡೆದ ೭೫ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ದೇಶದ ಆರ್ಥಿಕ, ಸಾಮಾಜಿಕ ಬದಲಾವಣೆಯಲ್ಲಿ ಶಿಕ್ಷಣ ಪ್ರಮುಖ ಪಾತ್ರ ವಹಿಸುತ್ತಿದ್ದು, ನಮ್ಮ ರಾಷ್ಟ್ರ ಬಲಿಷ್ಠವಾಗಿ, ಸದೃಢವಾಗಲು ಗುಣಮಟ್ಟದ ಶಿಕ್ಷಣ ಎಲ್ಲರಿಗೂ ಸಮಾನವಾಗಿ ದೊರೆಯಬೇಕು ಎಂದರು.
ಇಡೀ ಜಗತ್ತಿನಲ್ಲಿಯೇ ಬೃಹತ್ ಶಿಕ್ಷಣ ವ್ಯವಸ್ಥೆಯನ್ನು ಹೊಂದಿರುವ ಖ್ಯಾತಿ ನಮ್ಮ ದೇಶಕ್ಕೆ ಸಲ್ಲುತ್ತದೆ. ಎಲ್ಲರನ್ನೂ ಒಳಗೊಳ್ಳುವ ಶಿಕ್ಷಣದ ಮೂಲಕ ಬಲಿಷ್ಠ, ಸದೃಢ ಮತ್ತು ಸಮೃದ್ಧ ರಾಷ್ಟ್ರ ನಿರ್ಮಾಣಕ್ಕೆ ನಾವೆಲ್ಲರೂ ಪಣ ತೊಡಬೇಕಿದೆ ಎಂದು ಹೇಳಿದರು.ಈ ಹಿನ್ನೆಲೆಯಲ್ಲಿ ಮುಂಬರುವ ವರ್ಷಗಳಲ್ಲಿ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ನಮ್ಮ ಮಹಿಳಾ ವಿವಿ ಯಾವ ರೀತಿಯ ಸಾಧನೆಗಳನ್ನು ಮಾಡಲಿದೆ ಎಂಬುದು ಮುಖ್ಯವಾಗುತ್ತದೆ. ಆದ್ದರಿಂದ ನಾವು ನಮ್ಮ ನಮ್ಮ ಮಟ್ಟದಲ್ಲಿ ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ಅಗತ್ಯವಿರುವ ಶಿಕ್ಷಣ ವ್ಯವಸ್ಥೆಯನ್ನು ರೂಪಿಸುವಲ್ಲಿ ಕಾರ್ಯ ಪ್ರವೃತ್ತರಾಗೋಣ ಎಂದು ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ಸಂಗೀತ ವಿಭಾಗದ ವಿದ್ಯಾರ್ಥಿನಿಯರಿಂದ ರಾಷ್ಟ್ರೀಯ ಗೀತೆಗಳ ಗಾಯನ ನಡೆಯಿತು. ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಂ.ಚಂದ್ರಶೇಖರ್, ಕ್ರೀಡಾ ನಿರ್ದೇಶನಾಲಯದ ನಿರ್ದೇಶಕ ಡಾ.ಸಕ್ಪಾಲ್ ಹೂವಣ್ಣ, ಡಾ.ಹನುಮಂತಯ್ಯ ಪೂಜಾರಿ, ವಿವಿಯ ವಿವಿಧ ವಿಭಾಗಗಳ ಮುಖ್ಯಸ್ಥರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗ ಹಾಗೂ ಸಂಶೋಧನಾ ವಿದ್ಯಾರ್ಥಿನಿಯರು, ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿನಿಯರು ಇದ್ದರು.