ಗ್ಯಾರಂಟಿ ಯೋಜನೆಗಳಿಂದ ಬಡವರ ಶಕ್ತಿ ಇಮ್ಮಡಿ: ಎಸ್.ಆರ್.ಪಾಟೀಲ

| Published : Jan 09 2025, 12:48 AM IST

ಸಾರಾಂಶ

ಸರಕಾರ ಬಡವರಿಗೆ ಶಕ್ತಿ ತುಂಬುವ ಉದ್ದೇಶದಿಂದ ಗ್ಯಾರಂಟಿಗಳನ್ನು ಜಾರಿಗೆ ತರಲಾಗಿದೆ. ಯೋಜನೆಗಳ ಸಮರ್ಪಕ ಅನುಷ್ಠಾನದ ಜವಾಬ್ದಾರಿ ಪ್ರಾಧಿಕಾರದ ಮೇಲೆ ಇದ್ದು, ಸರಕಾರದ ಕನಸು ನನಸು ಮಾಡುವ ಕಾರ್ಯ ಮಾಡಬೇಕಿದೆ.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಸರಕಾರದ ಮಹಾತ್ವಾಕಾಂಕ್ಷಿ 5 ಗ್ಯಾರಂಟಿ ಯೋಜನೆಗಳು ಬಡವರಿಗೆ ಶಕ್ತಿ ತುಂಬುವ ಕೆಲಸ ಮಾಡಿದೆ ಎಂದು ಕನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್.ಪಾಟೀಲ ಹೇಳಿದರು.

ಜಿಪಂ ಸಭಾಂಗಣದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರಕಾರ ಕೆಳಹಂತದಲ್ಲಿ ಇದ್ದವರನ್ನು ಮೇಲೆತ್ತಿದಾಗ ಮಾತ್ರ ದೇಶ ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ. ಈ ಹಿನ್ನೆಲೆಯಲ್ಲಿ ಸರಕಾರ ಬಡವರಿಗೆ ಶಕ್ತಿ ತುಂಬುವ ಉದ್ದೇಶದಿಂದ ಗ್ಯಾರಂಟಿಗಳನ್ನು ಜಾರಿಗೆ ತರಲಾಗಿದೆ. ಯೋಜನೆಗಳ ಸಮರ್ಪಕ ಅನುಷ್ಠಾನದ ಜವಾಬ್ದಾರಿ ಪ್ರಾಧಿಕಾರದ ಮೇಲೆ ಇದ್ದು, ಸರಕಾರದ ಕನಸು ನನಸು ಮಾಡುವ ಕಾರ್ಯ ಮಾಡಬೇಕಿದೆ ಎಂದರು.

ಗ್ಯಾರಂಟಿಗಳ ಮೂಲಕ ಯಾರ ಮಧ್ಯಸ್ಥಿಕೆ ಇಲ್ಲದೇ ನೇರವಾಗಿ ಫಲಾನುಭವಿಗಳಿಗೆ ಮುಟ್ಟಿಸುವ ಕೆಲಸ ಸರಕಾರ ಮಾಡುತ್ತಿದೆ. ಈ ಯೋಜನೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು. ಜಿಲ್ಲೆಯಲ್ಲಿ ಐದು ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕಾರ್ಯವಾಗಬೇಕಿದೆ. ಈ ನಿಟ್ಟಿನಲ್ಲಿ ಆಯಾ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳ ಪಾತ್ರ ಬಹಳ ಮುಖ್ಯವಾಗಿದೆ. ಪ್ರತಿ ತಿಂಗಳು ಎರಡು ಬಾರಿಯಾದರೂ ಸಭೆ ನಡೆಸಬೇಕು. ಜಿಲ್ಲಾ ಮತ್ತು ತಾಲೂಕು ಮಟ್ಟದ ಸಮಿತಿ ಜವಾಬ್ದಾರಿಯಿಂದ ಕೆಲಸ ಮಾಡಿದಲ್ಲಿ ಯೋಜನೆ ಶೇ.100ರಷ್ಟು ಅನುಷ್ಠಾನಗೊಳಿಸಲು ಸಾಧ್ಯವಾಗುತ್ತದೆ. ಅಭಿವೃದ್ಧಿ ಹಾಗೂ ಆರ್ಥಿಕ ದೃಷ್ಟಿಯಿಂದ ಕರ್ನಾಟಕ ರಾಜ್ಯ ಎರಡನೇ ಸ್ಥಾನದಲ್ಲಿದೆ ಎಂದು ತಿಳಿಸಿದರು.

ಶಕ್ತಿ ಯೋಜನೆಯಡಿ ಜಿಲ್ಲೆಯಲ್ಲಿ ಪ್ರಾರಂಭದಿಂದ ಇಲ್ಲಿಯವರೆಗೆ ಒಟ್ಟು 10.34 ಲಕ್ಷ ಜನ ಮಹಿಳಾ ಪ್ರಯಾಣಿಕರು ಉಚಿತ ಪ್ರಯಾಣದ ಸೌಲಭ್ಯ ಪಡೆದಿದ್ದಾರೆ. ಇದರಿಂದ ₹321.84 ಕೋಟಿ ಆದಾಯ ಸಂಗ್ರವಾಗಿದೆ. ಜಿಲ್ಲೆಯಲ್ಲಿ ಪ್ರತಿದಿನ ಪ್ರಯಾಣಿಸುವ ಸಂಖ್ಯೆ ಸರಾಸರಿ 3.4 ಲಕ್ಷ ಇದೆ. ಒಟ್ಟು ಪ್ರಯಾಣಿಕರಲ್ಲಿ ಶೇ.62ರಷ್ಟು ಮಹಿಳಾ ಪ್ರಯಾಣಿಕರು ಇದ್ದಾರೆ. ಪ್ರತಿದಿನ ಸರಾಸರಿ ₹1.6 ಕೋಟಿ ಆದಾಯ ಗಳಿಸುತ್ತಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ನಿತೀಹ ಹೆಗಡೆ ಸಭೆ ತಿಳಿಸಿದಾಗ ಜಿಲ್ಲಾ ಪ್ರಾಧಿಕಾರದ ಸದಸ್ಯರು ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಬಸ್‌ಗಳನ್ನು ಬಿಡುವ ವ್ಯವಸ್ಥೆ ಮಾಡಿದಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ನಗರ ಪ್ರದೇಶಕ್ಕೆ ಬರುವವರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.

ಗೃಹಲಕ್ಷ್ಮೀ ಯೋಜನೆಯಡಿ 4.15 ಲಕ್ಷ ಫಲಾನುಭವಿಗಳು ನೇರವಾಗಿ ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಶೇ. 94.81ರಷ್ಟು ಪ್ರಗತಿ ಸಾಧಿಸಲಾಗಿದೆ. ಪ್ರತಿ ತಿಂಗಳು ಜಿಲ್ಲೆಯ ಫಲಾನುಭವಿಗಳಿಗೆ ₹82.45 ಕೋಟಿ ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮೆ ಆಗುತ್ತಿರುವುದಾಗಿ ಮಹಿಳಾ ಮತ್ತು ಮಕ್ಕಳ ಅಬಿವೃದ್ಧಿ ಇಲಾಖೆ ಉಪ ನಿರ್ದೇಶಕ ಕೆ.ಪ್ರಭಾಕರ ಸಭೆಗೆ ತಿಳಿಸಿದರು. ಗೃಹಜ್ಯೋತಿ ಯೋಜನೆಯಡಿ 419904 ಜನ ನೋಂದಣಿ ಮಾಡಿಕೊಂಡಿದ್ದು, 200 ಯುನಿಟ್‌ವರೆಗಿನ ಉಚಿತ ಸೌಲಭ್ಯಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಜಿಲ್ಲೆಯಲ್ಲಿ ಶೇ. 98.13ರಷ್ಟು ಯೋಜನೆ ಅನುಷ್ಠಾನವಾಗಿದೆ ಎಂದು ಬಾಗಲಕೋಟೆ ಹೆಸ್ಕಾಂ ಅಧಿಕಾರಿಗಳು ಸಭೆಗೆ ತಿಳಿಸಿದರು.

ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿಯಾಗಿ ನೀಡುತ್ತಿರುವ 5 ಕೆಜಿ ಅಕ್ಕಿ ಬದಲಿಗೆ ಪ್ರತಿ ಕೆಜಿಗೆ ₹34 ರಂತೆ ಒಟ್ಟು ₹170 ರಂತೆ ಪಡಿತರ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ಜಮೆ ಮಾಡಲಾಗುತ್ತಿದೆ. ಜುಲೈ-2023 ರಿಂದ ಇಲ್ಲಿಯವರೆಗೆ 374756 ಪಡಿತರ ಚೀಟಿಗಳ 13,14,116 ಫಲಾನುಭವಿಗಳಿಗೆ ಒಟ್ಟು ₹229.73 ಕೋಟಿ ಜಮೆ ಮಾಡಿ, ಶೇ.96.49 ರಷ್ಟು ಪ್ರಗತಿ ಸಾಧಿಸಿದೆ ಎಂದು ಆಹಾರ ಇಲಾಖೆಯ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ ತಿಳಿಸಿದರು. ಯುವನಿಧಿ ಯೋಜನೆಯಡಿ ಪದವೀಧರರು 7637, ಡಿಪ್ಲೊಮಾ ಪದವೀಧದರು 92 ಸೇರಿ ಒಟ್ಟು 7729 ಫಲಾನುಭವಿಗಳು ಲಾಭ ಪಡೆಯುತ್ತಿದ್ದಾರೆಂದು ಜಿಲ್ಲಾ ಕೌಶಲ್ಯ ಅಧಿಕಾರಿ ಹಿರೇಮಠ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಡಾ.ಎಸ್.ಎಚ್.ತೆಕ್ಕನ್ನವರ, ಉಪಾಧ್ಯಕ್ಷರಾದ ಶಂಕರಪ್ಪ ನೇಗಲಿ, ಗುರುಪ್ರಸಾದಪ್ಪ ಜವಳಿ, ರಫೀಕ್ ಬೈರಕದಾರ್, ಜಿಲ್ಲಾಧಿಕಾರಿ ಜಾನಕಿ ಕೆ.ಎಂ, ಜಿ.ಪಂ ಸಿಇಓ ಶಶಿಧರ ಕುರೇರ, ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ ಸೇರಿದಂತೆ ಪ್ರಾಧಿಕಾರದ ಸದಸ್ಯರು, ಯೋಜನಾ ಅನುಷ್ಠಾನದ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.