ಶಿಕ್ಷಣದ ಜೊತೆಗೆ ಸಾಂಸ್ಕೃತಿಕ, ಕ್ರೀಡೆ, ಎನ್ನೆಸ್ಸೆಸ್ಸಲ್ಲಿ ತೊಡಗಿ: ಚಲುವರಾಯಸ್ವಾಮಿ

| Published : Nov 16 2024, 12:30 AM IST

ಶಿಕ್ಷಣದ ಜೊತೆಗೆ ಸಾಂಸ್ಕೃತಿಕ, ಕ್ರೀಡೆ, ಎನ್ನೆಸ್ಸೆಸ್ಸಲ್ಲಿ ತೊಡಗಿ: ಚಲುವರಾಯಸ್ವಾಮಿ
Share this Article
  • FB
  • TW
  • Linkdin
  • Email

ಸಾರಾಂಶ

ಬೆಂಗಳೂರಿನ ಆರ್‌ಎನ್‌ಎಸ್ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಡಿ.ಸಿ. ಚಿತ್ರಲಿಂಗಯ್ಯ ಪ್ರಧಾನ ಉಪನ್ಯಾಸ ನೀಡಿದರು.

ಕನ್ನಡಪ್ರಭ ವಾರ್ತೆ ನಾಗಮಂಗಲ

ಶಿಕ್ಷಣದ ಜೊತೆಗೆ ಸಾಂಸ್ಕೃತಿಕ, ಕ್ರೀಡಾ ಚಟುವಟಿಕೆ, ಎನ್ಎಸ್ಎಸ್ ನಲ್ಲಿ ತೊಡಗಿದರೆ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿಯಾಗಿದೆ. ಬದುಕಿಗೆ ನಿಜವಾದ ಸಾರ್ಥಕತೆ ಇರುತ್ತದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು.

ಪಟ್ಟಣದ ಹೊರವಲಯ ದೇವಲಾಪುರ ಹ್ಯಾಂಡ್‌ಪೋಸ್ಟ್‌ನ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಶುಕ್ರವಾರ ಆಯೋಜಿಸಿದ್ದ ಪ್ರಸಕ್ತ ಸಾಲಿನ ಸಾಂಸ್ಕೃತಿಕ, ಕ್ರೀಡೆ, ಎನ್‌ಎಸ್‌ಎಸ್ ಯೋಜನೆ ಸೇರಿದಂತೆ ಪಠ್ಯೇತರ ಚಟುವಟಿಕೆಗಳ ಉದ್ಘಾಟನೆ ಮತ್ತು ಕನ್ನಡ ರಾಜ್ಯೋತ್ಸವ ಹಾಗೂ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಶಿಕ್ಷಣ ಎಂದರೆ ಕೇವಲ ಅಂಕ ಗಳಿಸಿ ತೇರ್ಗಡೆಯಾಗುವುದಕ್ಕೆ ವಿದ್ಯಾರ್ಥಿಗಳು ಸೀಮಿತವಾಗಬಾರದು. ವಿದ್ಯೆ ಕಲಿತವರಿಗೆಲ್ಲಾ ಕೆಲಸ ಸಿಗುವುದಿಲ್ಲ. ಉದ್ಯೋಗದಿಂದಲೇ ಜೀವನ ಕಟ್ಟಿಕೊಳ್ಳುತ್ತೇವೆ ಎನ್ನುವುದನ್ನು ಬಿಡಬೇಕು. ವೈಯುಕ್ತಿಕವಾಗಿ ಜೀವನ ಕಟ್ಟಿಕೊಳ್ಳಲು ಅನೇಕ ದಾರಿಗಳಿವೆ ಎಂದರು.

ವಿದ್ಯೆ ಜೊತೆ ಸಾಮಾನ್ಯ ಜ್ಞಾನ ಹೆಚ್ಚಿಸಿಕೊಂಡು ವಿವೇಕ ಬೆಳೆಸಿಕೊಂಡು ಬುದ್ಧಿವಂತರಾಗಿ ದೇಶದ ವಿಚಾರಗಳನ್ನು ತಿಳಿದುಕೊಳ್ಳಬೇಕು. ಸ್ವಾತಂತ್ರ್ಯ ನಂತರದಲ್ಲಿ ದೇಶದಲ್ಲಿ ಏನೆಲ್ಲಾ ಅಗುತ್ತಿದೆ. ನಮ್ಮ ಜವಾಬ್ದಾರಿಗಳೇನು ಎಂಬುದನ್ನು ಅರಿತು ತಾವು ಕಲಿತ ಶಿಕ್ಷಣ ಸಂಸ್ಥೆ ಮತ್ತು ಪೋಷಕರಿಗೆ ಕೀರ್ತಿ ತರುವ ನಿಟ್ಟಿನಲ್ಲಿ ಉತ್ತಮ ಬದುಕು ಕಟ್ಟಿಕೊಳ್ಳಬೇಕು ಎಂದು ತಿಳಿಸಿದರು.

ಕಳೆದ 2006ರಲ್ಲಿ ನಾನು ಸಚಿವನಾಗಿದ್ದ ಅವಧಿಯಲ್ಲಿ ತಾಲೂಕಿನಲ್ಲಿ ಸರ್ಕಾರಿ ಪ್ರಥಮ ದರ್ಜೆ, ಪಾಲಿಟೆಕ್ನಿಕ್ ಕಾಲೇಜು, ಐಟಿಐ ಕಾಲೇಜು ತೆರೆಯಲಾಯಿತು. ಗ್ರಾಮೀಣ ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಪಡೆದು ವಿದ್ಯೆ ಕಲಿಸಿದ ಶಿಕ್ಷಣ ಸಂಸ್ಥೆಯನ್ನು ಸ್ಮರಿಸಿಕೊಂಡು ಕುಟುಂಬದಲ್ಲಿ ತಂದೆ ತಾಯಂದಿರನ್ನು ಚೆನ್ನಾಗಿ ನೋಡಿಕೊಂಡು ಉತ್ತಮ ಬದುಕು ಕಟ್ಟಿಕೊಳ್ಳಬೇಕು ಎಂದರು.

ಬೆಂಗಳೂರಿನ ಆರ್‌ಎನ್‌ಎಸ್ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಡಿ.ಸಿ. ಚಿತ್ರಲಿಂಗಯ್ಯ ಪ್ರಧಾನ ಉಪನ್ಯಾಸ ನೀಡಿದರು. ಕಾಲೇಜಿನ ಪ್ರಾಂಶುಪಾಲೆ ವೈ.ಸಿ. ನೇತ್ರಾವತಿ ಅಧ್ಯಕ್ಷತೆ ವಹಿಸಿದ್ದರು. ಬಳಿಕ ಕಾಲೇಜಿನ ವಿದ್ಯಾರ್ಥಿಗಳಿಂದ ವಿವಿಧ ಬಗೆಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಇದಕ್ಕೂ ಮುನ್ನ ಸಮಾರಂಭಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ ಕಾಲೇಜಿನ ವಿದ್ಯಾರ್ಥಿನಿಯರು ಪೂರ್ಣಕುಂಭ ಸ್ವಾಗತಕೋರಿ ಬರಮಾಡಿಕೊಂಡರು.

ಸಮಾರಂಭದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಎನ್.ಅಪ್ಪಾಜಿಗೌಡ, ತಾಲೂಕು ಕಸಾಪ ಅಧ್ಯಕ್ಷ ಸಿ.ಆರ್. ಚಂದ್ರಶೇಖರ್, ಡಿವೈಎಸ್‌ಪಿ ಚಲುವರಾಜು, ಸಿಪಿಐ ನಿರಂಜನ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಜೆ.ರಾಜೇಶ್, ಪುರಸಭೆ ನಾಮನಿರ್ದೇಶಿತ ಸದಸ್ಯ ಸಂಪತ್‌ಕುಮಾರ್, ಪ್ರಸಾದ್, ಕಾಲೇಜಿನ ಎಲ್ಲಾ ಅಧ್ಯಾಪಕರು, ಅಧ್ಯಾಪಕೇತರ ಸಿಬ್ಬಂದಿ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು ಮತ್ತು ವಿದ್ಯಾರ್ಥಿಗಳು ಇದ್ದರು.