ಸಾರಾಂಶ
ಸರ್ಕಾರಿ ಸೇವೆಯಲ್ಲಿರುವ ಅಧಿಕಾರಿಗಳು ಮತ್ತು ನೌಕರರು ತಮ್ಮ ಕಾರ್ಯಕ್ಷಮತೆಯನ್ನು ವೃದ್ಧಿಸಿಕೊಳ್ಳಬೇಕಾದರೆ ಯಾವುದಾದರೂ ಒಂದು ಕ್ರೀಡೆ, ಸಾಂಸ್ಕೃತಿಕ ಸ್ಪರ್ಧೆ, ಯೋಗ, ವ್ಯಾಯಾಮದಲ್ಲಿ ತೊಡಗಿಸಿಕೊಂಡರೆ ಉತ್ತಮ.
ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ಜೂ.19 ಮತ್ತು 20ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲ ನೌಕರರು, ಅಧಿಕಾರಿಗಳು ಸಕ್ರಿಯವಾಗಿ ಭಾಗವಹಿಸುವಂತೆ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ತಿಳಿಸಿದರು.ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಸಂಜೆ ನಡೆದ ಸರ್ಕಾರಿ ನೌಕರರ ಕ್ರೀಡಾಕೂಟ ಆಯೋಜನೆಯ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಕ್ರೀಡೆಯಿಂದ ಕಾರ್ಯಕ್ಷಮತೆ ವೃದ್ಧಿ
ಸರ್ಕಾರಿ ಸೇವೆಯಲ್ಲಿರುವ ಅಧಿಕಾರಿಗಳು ಮತ್ತು ನೌಕರರು ತಮ್ಮ ಕಾರ್ಯಕ್ಷಮತೆಯನ್ನು ವೃದ್ಧಿಸಿಕೊಳ್ಳಬೇಕಾದರೆ ಯಾವುದಾದರೂ ಒಂದು ಕ್ರೀಡೆ, ಸಾಂಸ್ಕೃತಿಕ ಸ್ಪರ್ಧೆ, ಯೋಗ, ವ್ಯಾಯಾಮದಲ್ಲಿ ತೊಡಗಿಸಿಕೊಂಡರೆ ಉತ್ತಮ. ಆ ನಿಟ್ಟಿನಲ್ಲಿ ಸರ್ಕಾರಿ ಆಡಳಿತ ವರ್ಗದವರಿಗೆ ಅನುಕೂಲವಾಗಲು ಕ್ರೀಡಾಕೂಟ ಮತ್ತು ಸಂಸ್ಕೃತಿಕ ಸ್ಪರ್ಧೆಗಳನ್ನು ಹಿಂದಿನಿಂದಲೂ ನಡೆಸಿಕೊಂಡು ಬರುತ್ತಿರುವುದು ಪರಂಪರೆಯಾಗಿದೆ, ಅದರಂತೆ ಈ ವರ್ಷವೂ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಜಿಲ್ಲೆಯಲ್ಲಿ ಆಯೋಜಿಸಬೇಕು ಎಂದರು.ಈ ಬಾರಿ ತಾಲೂಕು ಮಟ್ಟದಲ್ಲಿ ಕ್ರೀಡಾಕೂಟ ಮತ್ತು ಸಾಂಸ್ಕೃತಿ ಸ್ಪರ್ಧೆಗಳನ್ನು ನಡೆಸದೆ ನೇರವಾಗಿ ಜಿಲ್ಲಾ ಮಟ್ಟದಲ್ಲೇ ಆಯೋಜಿಸಲಾಗುತ್ತಿದೆ. ಜಿಲ್ಲೆಯ ಎಲ್ಲಾ ಅಧಿಕಾರಿಗಳು ಮತ್ತು ನೌಕರರು ನೇರವಾಗಿ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಬಹುದಾಗಿದೆ ಎಂದರು.
ಅಧಿಕಾರಿಗಳು ಪಾಲ್ಗೊಳ್ಳಲು ಮನವಿಕ್ರೀಡಾಕೂಟವನ್ನು ಅರ್ಥಪೂರ್ಣವಾಗಿ ಹಾಗೂ ಯಶಸ್ವಿಯಾಗಿ ಆಯೋಜಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಧಿಕಾರಿಗಳು ಮತ್ತು ಸಂಬಂಧಪಟ್ಟ ಇತರ ಇಲಾಖೆಯ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು. ಜಿಲ್ಲಾ ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಜಿಲ್ಲಾಡಳಿತದ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ಸಕ್ರಿಯವಾಗಿ ಭಾಗವಹಿಸುವಂತೆ ಜಿಲ್ಲಾಧಿಕಾರಿಗಳು ಮನವಿ ಮಾಡಿದರು.
ಸಭೆಯಲ್ಲಿ ಜಿಪಂ ಸಿಇಒ ಪ್ರಕಾಶ್ ಜಿ.ಟಿ.ನಿಟ್ಟಾಲಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎಸ್. ಮಹೇಶ್ ಕುಮಾರ್. ಡಿಡಿಪಿಐ ಪ. ಬೈಲಾಂಜಿನಪ್ಪ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಹರೀಶ್, ಉಪಾಧ್ಯಕ್ಷರಾದ ಬಸವರಾಜ್ ಮತ್ತು ಶ್ರೀನಿವಾಸ್, ಖಜಾಂಚಿ ದಿನೇಶ್, ಕ್ರೀಡಾ ಕಾರ್ಯದರ್ಶಿ ಶಿವಕುಮಾರ್, ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳಾದ ಸುನೀಲ್. ಶ್ರೀನಿವಾಸ್, ಗುಡಿಬಂಡೆ ತಾಲೂಕು ನೌಕರರ ಸಂಘದ ಅಧ್ಯಕ್ಷ ಕೆ.ವಿ. ನಾರಾಯಣಸ್ವಾಮಿ, ಬಾಗೇಪಲ್ಲಿ ತಾಲೂಕು ನೌಕರರ ಸಂಘದ ಅಧ್ಯಕ್ಷ ಸತ್ಯನಾರಾಯಣರೆಡ್ಡಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಗಾಯತ್ರಿ ಇದ್ದರು. ಸಿಕೆಬಿ-1 ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೆರಿಯಲ್ಲಿ ನಡೆದ ಸರ್ಕಾರಿ ನೌಕರರ ಕ್ರೀಡಾಕೂಟ ಆಯೋಜನೆಯ ಪೂರ್ವಭಾವಿ ಸಭೆಯಲ್ಲಿ ಡೀಸಿ ಪಿ.ಎನ್. ರವೀಂದ್ರ ಮಾತನಾಡಿದರು.