ಸರ್ಕಾರಿ ಶಾಲೆಗಳಲ್ಲಿಯೂ ಇಂಗ್ಲಿಷ್‌ ಮಾಧ್ಯಮ ತರಗತಿ

| Published : Jul 23 2025, 12:30 AM IST

ಸಾರಾಂಶ

ಚಿತ್ರಹಳ್ಳಿ ಸರ್ಕಾರಿ ಶಾಲೆಗೆ ನೂತನ ಕೊಠಡಿ ನಿರ್ಮಾಣಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀನಿವಾಸ್‌ ಅವರು ಭೂಮಿಪೂಜೆ ನೆರವೇರಿಸಿದರು.

ಕನ್ನಡಪ್ರಭ ವಾರ್ತೆ ಸಿರಿಗೆರೆ

ರಾಜ್ಯದ 4,134 ಸರ್ಕಾರಿ ಶಾಲೆಗಳಲ್ಲಿ ಸರ್ಕಾರವು 1ನೇ ತರಗತಿಯಿಂದ ಇಂಗ್ಲಿಷ್‌ ಮಾಧ್ಯಮ ತೆರೆಯಲು ಅನುವು ಮಾಡಿಕೊಟ್ಟಿರುವುದರಿಂದ ಯಾವುದೇ ಖಾಸಗಿ ಶಾಲೆಗಳಿಗೆ ಕಡಿಮೆ ಇಲ್ಲದಂತೆ ಸರ್ಕಾರಿ ಶಾಲೆಗಳು ನಡೆಯುತ್ತಿವೆ ಎಂದು ಹೊಳಲ್ಕೆರೆ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀನಿವಾಸ್‌ ತಿಳಿಸಿದರು.

ಚಿತ್ರಹಳ್ಳಿ ಸರ್ಕಾರಿ ಶಾಲಾ ಕೊಠಡಿ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಸರ್ಕಾರಿ ಶಾಲೆಗಳಿಗೆ ಬೇಕಾಗ ಸೌಲಭ್ಯಗಳನ್ನು ಸರ್ಕಾರವು ಒದಗಿಸುತ್ತಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಎಲ್‌ಕೆಜಿ ಮತ್ತು ಯುಕೆಜಿ ತರಗತಿಗಳನ್ನು ಸಹ ಸರ್ಕಾರಿ ಶಾಲೆಗಳಲ್ಲಿ ಆರಂಭಿಸಲಾಗುವುದು. ಆದ್ದರಿಂದ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲಿಸಬೇಕು ಎಂದು ಮನವಿ ಮಾಡಿದರು.

ಚಿತ್ರಹಳ್ಳಿ ಸರ್ಕಾರಿ ಶಾಲೆಯನ್ನು ದತ್ತು ಪಡೆದಿರುವ ಭೀಮಸ ಮುದ್ರದ ಸಮಾಜ ಸೇವಕ ಜಿ.ಎಂ.ಲವಕುಮಾರ್‌ ಮಾತನಾಡಿ, ಮಕ್ಕಳಿಗೆ ಬೇಕಾದ ಎಲ್ಲಾ ಸೌಲಭ್ಯಗಳನ್ನು ಶಾಲೆಯಲ್ಲಿ ನೀಡುತ್ತಿದ್ದೇನೆ. ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪನವರು ಶಾಲೆಗೆ ಸಾಕಷ್ಟು ಅನುದಾನ ನೀಡಿದ್ದಾರೆ. ಜತೆಗೆ ಎರಡು ತರಗತಿ ಕೊಠಡಿಗಳನ್ನು ನಿರ್ಮಿಸಲು 20 ಲಕ್ಷ ರು. ಅನುದಾನ ನೀಡಿದ್ದಾರೆ ಎಂದರು.

ಹಳ್ಳಿಗಳಲ್ಲಿರುವ ಮಕ್ಕಳು ಯಾವುದೇ ಮಕ್ಕಳು ವಿದ್ಯಾಭ್ಯಾಸದಿಂದ ವಂಚಿತರಾಗಬಾರದು. ಸರ್ಕಾರಿ ಶಾಲೆಯನ್ನು ಉನ್ನತ ಮಟ್ಟಕ್ಕೆ ತೆಗೆದುಕೊಂಡು ಹೋಗುವ ಉದ್ದೇಶದಿಂದ ಈ ಶಾಲೆಯನ್ನು ದತ್ತು ಪಡೆದಿದ್ದೇನೆ. ಖಾಸಗಿ ಶಾಲೆಗಳಿಗೆ ಸೇರಿಸುವುದಕ್ಕಿಂತ ನಮ್ಮ ಸರ್ಕಾರಿ ಶಾಲೆಗೆ ಸೇರಿಸಿದರೆ ಉತ್ತಮ ಶಿಕ್ಷಣ ಸಿಗುತ್ತದೆ ಎಂದು ತಿಳಿಸಿದರು.

ಎಸ್‌ಡಿಎಂಸಿ ಅಧ್ಯಕ್ಷರಾದ ದಿವ್ಯ ಜ್ಯೋತಿ, ಮುಖ್ಯ ಶಿಕ್ಷಕಿ ಗಾಯತ್ರಿ ಪ್ರಭಾಕರ್‌, ಗ್ರಾಪಂ ಸದಸ್ಯ ಜಿ.ಎಂ.ಕಾಂತರಾಜ್‌, ಮಲ್ಲಿಕಾರ್ಜುನ್‌, ಮಂಜುನಾಥ್‌, ಎಂ.ಆರ್. ನಾಗರಾಜ್‌ ಮುಂತಾದವರು ಭಾಗಿಯಾಗಿದ್ದರು.