ಸಾರಾಂಶ
ಗ್ರಾಮಗಳ ಉದ್ಧಾರವೇ ದೇಶದ ಉದ್ಧಾರ ಎಂದು ಜನತಾ ಶಿಕ್ಷಣ ಸಮಿತಿಯ ಕಾರ್ಯದರ್ಶಿ ಡಾ. ಅಜಿತಪ್ರಸಾದ ಹೇಳಿದರು.
ಧಾರವಾಡ: ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಲ್ಲಿ ಅಧ್ಯಯನದ ಜೊತೆಗೆ ರಾಷ್ಟ್ರಪ್ರೇಮ, ರಾಷ್ಟ್ರ ಜಾಗೃತಿ ಮತ್ತು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಜನತಾ ಶಿಕ್ಷಣ ಸಮಿತಿಯ ಕಾರ್ಯದರ್ಶಿ ಡಾ. ಅಜಿತಪ್ರಸಾದ ಹೇಳಿದರು.
ತಾಲೂಕಿನ ಮನಗುಂಡಿಯಲ್ಲಿ ಕವಿವಿ ರಾಷ್ಟ್ರೀಯ ಸೇವಾ ಯೋಜನೆ ಕೋಶ ಜೆ.ಎಸ್.ಎಸ್. ಬನಶಂಕರಿ ಕಲಾ, ವಾಣಿಜ್ಯ ಮತ್ತು ಶಾಂತಿಕುಮಾರ ಗುಬ್ಬಿ ವಿಜ್ಞಾನ ಕಾಲೇಜಿನ ಸಹಯೋಗದಲ್ಲಿ ಆಯೋಜಿಸಿದ್ದ ಎನ್ನೆಸ್ಸೆಸ್ ಶಿಬಿರ ಉದ್ಘಾಟಿಸಿ ಮಾತನಾಡಿದರು.ಗ್ರಾಮಗಳ ಉದ್ಧಾರವೇ ದೇಶದ ಉದ್ಧಾರ, ಹಾಗಾಗಿ, ಮನಗುಂಡಿ ಗ್ರಾಮದಲ್ಲಿರುವ ಪ್ರತಿಯೊಂದು ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛಗೊಳಿಸುವುದರ ಮುಖೇನ ಗ್ರಾಮದಲ್ಲಿ ಸ್ಚಚ್ಛತೆಯ ಅರಿವು ಮೂಡಿಸುವಂತೆ ಶಿಬಿರದ ಸ್ವಯಂ ಸೇವಕರಿಗೆ ಕರೆ ನೀಡಿದರು.ದಿವ್ಯ ಸಾನಿಧ್ಯವನ್ನು ವಹಿಸಿದ್ದ ಮನಗುಂಡಿಯ ಬಸವಾನಂದ ಸ್ವಾಮೀಜಿ, ಶಿಕ್ಷಣದ ಹಾದಿಯಲ್ಲಿ ಶಿಸ್ತು ಮತ್ತು ಸಮಯಪಾಲನೆ ಬಹುಮುಖ್ಯ ಹಾಗೂ ವಿದ್ಯಾರ್ಥಿಗಳು ತಮ್ಮ ಬದುಕಿನಲ್ಲಿ ನೈತಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ಆಶೀರ್ವದಿಸಿದರು.
ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ಡಾ. ಕೆ.ಎಚ್. ನಾಗಚಂದ್ರ ವಹಿಸಿ, ‘ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರದಲ್ಲಿ ಭಾಗವಹಿಸಿದ ಶಿಬಿರಾರ್ಥಿಗಳು ಗ್ರಾಮವಾಸ್ತವ್ಯ, ಶ್ರಮದಾನದ ಮೂಲಕ ಆತ್ಮವಿಶ್ವಾಸ, ನಾಯಕತ್ವ ಗುಣ ಬೆಳಸಿಕೊಳ್ಳವುದಕ್ಕೆ ವೇದಿಕೆಯಾಗಿದ್ದು, ಸರ್ವತೋಮುಖ ಅಭಿವೃದ್ಧಿ ಹೊಂದಲು ಪ್ರಮುಖ ಪಾತ್ರ ವಹಿಸುತ್ತಾರೆ ಎಂದು ಹೇಳಿದರು.ಮನಗುಂಡಿ ಗ್ರಾಪಂ ಅಧ್ಯಕ್ಷರಾದ ಬಸಮ್ಮ ಅಮ್ಮಿನಬಾವಿ, ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ನಿಂಗಪ್ಪ ಹಡಪದ, ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರಾದ ಜಯಾ ಪಾಟೀಲ, ಡಾ. ಸೂರಜ ಜೈನ, ಮಹಾವೀರ ಉಪಾಧ್ಯೆ, ಎಸ್.ಕೆ. ಸಜ್ಜನ ಇದ್ದರು.