ಬ್ಯಾಡಗಿ: ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣದೊಂದಿಗೆ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ವಿವಿಧ ಉಚಿತ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದ್ದು, ಪಾಲಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಿ ಸೌಲಭ್ಯಗಳ ಪ್ರಯೋಜನ ಪಡೆಯಬೇಕು ಎಂದು ಪಿಎಂಶ್ರೀ ಶಾಲೆಯ ಮುಖ್ಯ ಶಿಕ್ಷಕಿ ರಾಜಶ್ರೀ ಸಜ್ಜೇಶ್ವರ ಹೇಳಿದರು.
ಪಟ್ಟಣದ ಪಿಎಂಶ್ರೀ ಶಾಲೆಯಲ್ಲಿ ನೂತನ ಶೈಕ್ಷಣಿಕ ವರ್ಷದ ಅಂಗವಾಗಿ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ಹಾಗೂ ಪಠ್ಯಪುಸ್ತಕಗಳನ್ನು ವಿತರಿಸಿ ಮಾತನಾಡಿದರು.ಸರ್ಕಾರಿ ಶಾಲೆಗಳಲ್ಲಿ ಅನುಭವಿ ಶಿಕ್ಷಕರಿಂದ ಗುಣಮಟ್ಟದ ಬೋಧನೆ, ಸುಸಜ್ಜಿತ ತರಗತಿ ಕೊಠಡಿಗಳು, ಡಿಜಿಟಲ್ ಕಲಿಕಾ ವ್ಯವಸ್ಥೆ, ಮಧ್ಯಾಹ್ನದ ಬಿಸಿಯೂಟ, ಉಚಿತ ಪಠ್ಯಪುಸ್ತಕ, ಸಮವಸ್ತ್ರ, ವಿದ್ಯಾರ್ಥಿವೇತನ ಸೇರಿದಂತೆ ಹಲವು ಸೌಲಭ್ಯಗಳನ್ನು ಸರ್ಕಾರ ಒದಗಿಸುತ್ತಿದೆ. ಪಿಎಂಶ್ರೀ ಯೋಜನೆಯಡಿ ಶಾಲೆಗಳ ಮೂಲಸೌಕರ್ಯ ಮತ್ತು ಶಿಕ್ಷಣದ ಗುಣಮಟ್ಟವನ್ನು ಇನ್ನಷ್ಟು ಉತ್ತಮಗೊಳಿಸಲಾಗುತ್ತಿದೆ ಎಂದು ತಿಳಿಸಿದರು.
ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳು, ವಿಜ್ಞಾನ, ಪರಿಸರ ಹಾಗೂ ನೈತಿಕ ಶಿಕ್ಷಣಕ್ಕೂ ಸಮಾನ ಆದ್ಯತೆ ನೀಡಲಾಗುತ್ತಿದೆ, ಮಕ್ಕಳ ಭವಿಷ್ಯ ಉತ್ತಮಗೊಳಿಸುವಲ್ಲಿ ಸರ್ಕಾರಿ ಶಾಲೆಗಳು ಪ್ರಮುಖಪಾತ್ರ ವಹಿಸುತ್ತಿದ್ದು, ಪಾಲಕರು ಯಾವುದೇ ಅನುಮಾನವಿಲ್ಲದೆ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲಿಸುವಂತೆ ಮನವಿ ಮಾಡಿದರು. ಈ ವೇಳೆ ಶಾಲೆಯ ಶಿಕ್ಷಕ ವೃಂದ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸದಸ್ಯರು, ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.