ಸಾರಾಂಶ
ಕನ್ನಡಪ್ರಭ ವಾರ್ತೆ ಅಮೀನಗಡ
ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶಗಳ ನಾಗರಿಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲಿಸುವ ಮೂಲಕ ಸರ್ಕಾರಿ ಶಾಲೆಗಳನ್ನು ಮತ್ತಷ್ಟು ಬಲಪಡಿಸಬೇಕು ಎಂದು ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ.2ರ ಮುಖ್ಯೋಪಾಧ್ಯಾಯ ಎಂ.ಎಸ್.ಹರಗಬಲ್ ಸಲಹೆ ನೀಡಿದರು.ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ.2ರಲ್ಲಿ ಬುಧವಾರ ನಡೆದ 2024-25ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ಹಾಗೂ ದಾಖಲಾತಿ ಆಂದೋಲನದ ಪ್ರಚಾರ ಸಾಮಗ್ರಿಗಳನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಮೇ 31 ರಿಂದ ಶಾಲೆಗಳು ಪುನಾರಂಭಗೊಳ್ಳುತ್ತಿವೆ. ಸರ್ಕಾರ ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ, ಉಚಿತ ಪಠ್ಯ ಪುಸ್ತಕ, ಸಮವಸ್ತ್ರ, ಶೂ, ಸಾಕ್ಸ್, ಅಕ್ಷರ ದಾಸೋಹ, ವಿದ್ಯಾರ್ಥಿ ವೇತನದೊಂದಿಗೆ ಮಕ್ಕಳಿಗೆ ಪೌಷ್ಟಿಕ ಆಹಾರವಾಗಿ ಮೊಟ್ಟೆ ನೀಡುತ್ತಿದೆ ಎಂದರು.ಅಲ್ಲದೇ, ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ಇಂದು ಉನ್ನತ ಶಿಕ್ಷಣ ಪಡೆದ ಶಿಕ್ಷಕರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣದೊಂದಿಗೆ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆ, ಪ್ರತಿಭಾ ಕಾರಂಜಿಗಳ ಮೂಲಕ ಅವರ ಪ್ರತಿಭೆಗಳನ್ನು ಹೊರಹೊಮ್ಮುವಂತೆ ಕಾರ್ಯ ಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳನ್ನು ಬಲಪಡಿಸುವ ಉದ್ದೇಶದಿಂದ ಪಟ್ಟಣದ ಜನ ಪ್ರತಿನಿಧಿಗಳು, ಹಿರಿಯ ನಾಗರಿಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ ಬೇರೆಯವರು ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಸೇರಿಸಲು ಪ್ರೇರೇಪಿಸಬೇಕು ಎಂದು ಹೇಳಿದರು.
ಶಿಕ್ಷಕ ಮಲ್ಲಿಕಾರ್ಜುನ ಸಜ್ಜನ ಮಾತನಾಡಿ, ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ.2, ಪ್ರಧಾನ ಮಂತ್ರಿ ಸ್ಕೂಲ್ ಫಾರ್ ರೈಸಿಂಗ್ ಇಂಡಿಯಾ ಎಂಬ ಕೇಂದ್ರ ಸರ್ಕಾರದ ಹೊಸ ಪುರಷ್ಕೃತ ಯೋಜನೆಗೆ ಆಯ್ಕೆಗೊಂಡಿದೆ. ಈ ಯೋಜನೆಯಡಿಯಲ್ಲಿ ಯುಕೆಜಿ, ಎಲ್‌ಕೆಜಿಯಿಂದ ಶಾಲೆ ಪ್ರಾರಂಭಗೊಂಡು ಸಮರ್ಪಕ ಶೈಕ್ಷಣಿಕ ಸಾಮರ್ಥ್ಯಗಳನ್ನು ಹೊಂದುವ ಮೂಲಕ, ಶಾಲೆ ಮೂಲಭೂತ ಸೌಲಭ್ಯಗಳೊಂದಿಗೆ, ಆಧುನಿಕ ಸೌಲಭ್ಯ ಹೊಂದುವ ಮೂಲಕ ಇತರೆ ಶಾಲೆಗಳಿಗೆ ಮಾದರಿಯಾಗಲಿದೆ ಎಂದು ವಿವರಿಸಿದರು.ಶಿಕ್ಷಕರಾದ ಬಿ.ಬಿ.ಭಾಪ್ರಿ, ಆರ್.ಎಂ.ಎಮ್ಮಿ, ಐ.ಬಿ.ಬಾಪುರೆ, ಎಸ್.ಎಸ್.ಲಮಾಣಿ ಸೇರಿದಂತೆ ವಿದ್ಯಾರ್ಥಿಗಳು ಮುಂತಾದವರಿದ್ದರು.