ಸಾರಾಂಶ
ಉಚ್ಚ ನ್ಯಾಯಾಲಯದ ಆದೇಶದನ್ವಯ ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತ ಗಣೇಶ ವಿಗ್ರಹಗಳನ್ನು ಕೆರೆ ಮತ್ತು ಇತರೆ ಜಲಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದ್ದು, ಇಂತಹ ವಿಗ್ರಹಗಳನ್ನು ಮಾರಾಟ ಮತ್ತು ತಯಾರಿಸುವವರ ವಿರುದ್ಧ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕೆ.ಎಂ.ಜಾನಕಿ ತಿಳಿಸಿದರು.
ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಉಚ್ಚ ನ್ಯಾಯಾಲಯದ ಆದೇಶದನ್ವಯ ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತ ಗಣೇಶ ವಿಗ್ರಹಗಳನ್ನು ಕೆರೆ ಮತ್ತು ಇತರೆ ಜಲಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದ್ದು, ಇಂತಹ ವಿಗ್ರಹಗಳನ್ನು ಮಾರಾಟ ಮತ್ತು ತಯಾರಿಸುವವರ ವಿರುದ್ಧ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕೆ.ಎಂ.ಜಾನಕಿ ತಿಳಿಸಿದರು.ಈ ಕುರಿತು ಮಾಹಿತಿ ನೀಡಿದ ಅವರು, ಪ್ರತಿ ವರ್ಷದಂತೆ ಈ ಬಾರಿಯು ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು, ಸಾರ್ವಜನಿಕರು ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಮತ್ತು ಬಣ್ಣದ ವಿಗ್ರಹಗಳನ್ನು ಸ್ಥಾಪಿಸಿ ಪೂಜಿಸಿದ ನಂತರ ಕೆರೆ, ಬಾವಿ ಹಾಗೂ ಇನ್ನೀತರ ಜಲಮೂಲಗಳಿಗೆ ವಿಸರ್ಜಿಸುವುದು ಸಂಪ್ರದಾಯವಾಗಿದೆ. ಆದರೆ ಇದರಿಂದ ನೈಸರ್ಗಿಕ ಜಲಮೂಲಗಳು ಕಲುಷಿತಗೊಂಡು ಇವುಗಳ ಭೌತಿಕ ಹಾಗೂ ರಾಸಾಯನಿಕ ಗುಣಗಳು ಮಾರ್ಪಟ್ಟು ಪರಿಸದರ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ ಎಂದರು.ರಾಜ್ಯ ಮಾಲಿನ್ಯ ಮಂಡಳಿಯು ಸದರಿ ಹಬ್ಬದ ಆಚರಣೆಯಿಂದ ನೈಸರ್ಗಿಕ ಜಲ ಮೂಲಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಜುಲೈ 20, 2016 ರಂದು ಅಧಿಸೂಚನೆ ಹೊರಡಿಸಿದ್ದು, ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣದ ಲೇಪಿತವಾದ ವಿಗ್ರಹಗಳನ್ನು ಇನ್ನು ಮುಂದೆ ರಾಜ್ಯದ ಯಾವುದೇ ಕೆರೆ ಮತ್ತು ಇತರೆ ಜಲ ಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ. ಈ ಆದೇಶ ಉಲ್ಲಂಘಿಸಿದಲ್ಲಿ ಐಪಿಸಿ ಸೆಕ್ಷನ್ 1860ರ ಪ್ರಕಾರ ಕ್ರಮಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಗೌರ ಹಾಗೂ ಗಣೇಶ ಹಬ್ಬದ ಸಂದರ್ಭದಲ್ಲಿ ರಾಸಾಯನಿಕ ಬಣ್ಣಗಳಿಂದ ಮಾಡಿದ ಮೂರ್ತಿಗಳ ಬದಲಾಗಿ ನೈಸರ್ಗಿಕ ವಸ್ತುಗಳಿಂದ ತಯಾರಿಸಿದ ಹಾಗೂ ನೈಸರ್ಗಿಕ ಬಣ್ಣ ಲೇಪಿತ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ಪೂಜಿಸಿ ನಂತರ ಸಾಮೂಹಿಕವಾಗಿ ಗುರುತಿಸಿದ ಸ್ಥಳಗಳಲ್ಲಿ ವಿಸರ್ಜನೆ ಮಾಡಬೇಕು. ಗಣೇಶ ವಿಸರ್ಜನೆ ಸಂದರ್ಭದಲ್ಲಿ ಹೂ, ಹಣ್ಣು, ಬಾಳೆ, ಕಂಬ, ಮಾವಿನ ತೋರಣ ಇತ್ಯಾದಿ ಅಲಂಕಾರಿಕ ವಸ್ತುಗಳನ್ನು ಪ್ರತ್ಯೇಕಿಸಿ ಮೂರ್ತಿಗಳೊಂದಿಗೆ ನೀರಿಗೆ ವಿಸರ್ಜಿಸದೇ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ಕಸ ಸಂಗ್ರಹಣ ವಾಹನಕ್ಕೆ ನೀಡಬೇಕು ಎಂದು ಮನವಿ ಮಾಡಿದರು.ಪರಿಸರ ಸ್ನೇಹಿ ವಸ್ತುಗಳನ್ನೇ ಬಳಸಿ:
ಸಾರ್ವಜನಿಕವಾಗಿ ನಡೆಸುವ ಗಣೇಶ ಮೂರ್ತಿಯ ಉತ್ಸವದ ಚಪ್ಪರಕ್ಕೆ ಪರಿಸರ ಸ್ನೇಹಿ ವಸ್ತುಗಳನ್ನೇ ಬಳಸಿ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಬಳಕೆ ಮಾಡಬಾರದು. ಸಾರ್ವಜನಿಕವಾಗಿ ಗಣೇಶ ಹಬ್ಬದ ಸಂದರ್ಭದಲ್ಲಿ ಏಳು ದಿನಗಳಿಗೆ ಮೀರದಂತೆ ನಿರಂತರ ಬಳಕೆಗೆ ಧ್ವನಿವರ್ಧಕ, ಸಾರ್ವಜನಿಕ ಗಣೇಶ ಪೆಂಡಾಲ್‌ಗಳಲ್ಲಿ ಬಳಸುವ ವಿದ್ಯುನ್ಮಾನ ಉಪಕರಗಳು ಮತ್ತು ಶಬ್ಧ ಉಂಟು ಮಾಡುವ ಉಪಕರಣಗಳನ್ನು ಬಳಸಲು ಪೊಲೀಸ್ ಇಲಾಖೆಯಿಂದ ಪರವಾನಿಗೆ ಪಡೆಯಬೇಕು. ನೀಡಲಾದ ಅನುಮತಿ ಶಬ್ದ ಮಾಲಿನ್ಯ ನಿಯಮಗಳನ್ನು ಮೀರುವಂತಿಲ್ಲವೆಂದು ತಿಳಿಸಿದರು.--
27ಬಿಕೆಟಿ3ನಗರಸಭೆಯ ಅಧಿಕಾರಿಗಳು ಹಾಗೂ ಪರಿಸರ ಇಲಾಖೆಯ ಅಧಿಕಾರಿಗಳು ಬಾಗಲಕೋಟೆ ನಗರದಲ್ಲಿರುವ ಗಣೇಶ ತಯಾರಿಕಾ ಘಟಕಗಳಿಗೆ ಭೇಟಿ ನೀಡಿ ಪರಿಶೀಲಿಸುತ್ತಿರುವುದು.