ದೊಡ್ಡಬಳ್ಳಾಪುರ: ಕೃಷಿ, ತೋಟಗಾರಿಕೆ ಅಧಿಕಾರಿಗಳು ಮತ್ತು ಬೆಳೆ ವಿಮಾ ಸಂಸ್ಥೆಗಳು ಜಂಟಿಯಾಗಿ ಸ್ಥಳೀಯ ಮಟ್ಟದಲ್ಲಿ ರೈತರಿಗೆ ಬೆಳೆ ವಿಮೆ ಬಗ್ಗೆ ಹಾಗೂ ಅದರಿಂದ ಆಗುವ ಅನುಕೂಲಗಳ ಬಗ್ಗೆ ಅರಿವು

ಮೂಡಿಸಬೇಕು ಎಂದು ಸಂಬಂಧಪಟ್ಟ ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಸೂಚಿಸಿದರು.

ಬೆಂ.ಗ್ರಾ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ ಬೆಳೆ ಸಮೀಕ್ಷೆ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.

ಕೃಷಿ ಇಲಾಖೆ ವತಿಯಿಂದ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ, ತೋಟಗಾರಿಕೆ ಇಲಾಖೆ ವತಿಯಿಂದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಗಳಿದ್ದು ಸಂಬಂಧಪಟ್ಟ ರೈತರಿಗೆ ಯಾವ ಬೆಳೆಗೆ ಎಷ್ಟು ವಿಮೆ ಕಟ್ಟಬೇಕು, ಎಷ್ಟು ವಿಮೆ ಸಿಗಲಿದೆ ಎಂಬ ಮಾಹಿತಿ ನೀಡಿ ಎಂದರು.

ರೈತರು ಬೆಳೆ ವಿಮೆ ಮಾಡಿಸುವುದರಿಂದ ಅತಿವೃಷ್ಟಿ, ಅನಾವೃಷ್ಟಿ ಹಾಗೂ ಇನ್ನೂ ಮುಂತಾದ ಪ್ರಕೃತಿ ವಿಕೋಪಗಳಿಂದ ಬೆಳೆಗಳಿಗೆ ಹಾನಿಯಾದರೆ ಅಂತಹ ಸಂದರ್ಭದಲ್ಲಿ ಬೆಳೆ ನಷ್ಟ ಪರಿಹಾರ ಸಿಗಲಿದೆ. ಹಾಗಾಗಿ ಅಧಿಕಾರಿಗಳು ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಬಗ್ಗೆ ಜಿಲ್ಲೆಯ ಎಲ್ಲಾ ರೈತರಿಗೆ ಜಾಗೃತಿ ಮೂಡಿಸಿ ಬೆಳೆ ವಿಮೆಗೆ ನೋಂದಾಯಿಸಲು ಪ್ರೇರೇಪಿಸಬೇಕು ಎಂದರು.


ಬೆಳೆ ಸಮೀಕ್ಷೆ ನಿಖರವಾಗಿ ಆಗಬೇಕು:

ಜಿಲ್ಲೆಯಲ್ಲಿ ಈ ಸಾಲಿನ ಬೆಳೆ ಸಮೀಕ್ಷೆ ಆರಂಭಗೊಳ್ಳುತ್ತಿದ್ದು ಸಮೀಕ್ಷೆಯು ಸರಿಯಾದ ಕ್ರಮದಲ್ಲಿ ಆಗಬೇಕಿದೆ. ಸಮೀಕ್ಷೆ ಮಾಡುವವರಿಗೆ ಸೂಕ್ತ ತರಬೇತಿ ನೀಡಬೇಕು. ಮೊಬೈಲ್ ಅಪ್ಲಿಕೇಶನ್ ನಲ್ಲಿ ಸಮೀಕ್ಷೆ ನಡೆಸಿ ನಿಖರ ಅಂಕಿ ಅಂಕಿಅಂಶಗಳ ಕ್ರೂಡಿಕರಣ ಮಾಡಿ. ಬೆಳೆ ಸಮೀಕ್ಷೆಯಿಂದ ಸೆರೆ ಹಿಡಿಯಲಾದ ದತ್ತಾಂಶವನ್ನು ಸರ್ಕಾರದ ವಿವಿಧ ಯೋಜನೆಗಳಲ್ಲಿ ಕನಿಷ್ಠ ಬೆಂಬಲ, ಸಬ್ಸಿಡಿ ಪಾವತಿ, ಬೆಳೆ ಪ್ರದೇಶದ ಅಂದಾಜು ಕೃಷಿ ಮತ್ತು ತೋಟಗಾರಿಕೆ ಯೋಜನೆಗಳ ಅಡಿಯಲ್ಲಿ ಫಲಾನುಭವಿಗಳ ಆಯ್ಕೆಗೆ ಮುಂತಾದ ಸೌಲಭ್ಯ ಒದಗಿಸಲು ಸಹಕಾರಿಯಾಗಲಿದೆ. ಆದ್ದರಿಂದ ಬೆಳೆ ಸಮೀಕ್ಷೆ ನಿಖರವಾಗಿ ಇರಲಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಕೃಷಿ, ತೋಟಗಾರಿಕೆ, ರೇಷ್ಮೆ, ಮೀನುಗಾರಿಕೆ, ಕೃಷಿ ಮಾರುಕಟ್ಟೆ ಹಾಗೂ ಜಲಾನಯನ ಅಭಿವೃದ್ಧಿ ಇಲಾಖೆಗಳ ಅಧಿಕಾರಿಗಳು, ಲೀಡ್ ಬ್ಯಾಂಕ್ ಹಾಗೂ ವಿಮಾ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಫೋಟೋ-

8ಕೆಡಿಬಿಪಿ2- ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ಬೆಲೆ ಸಮೀಕ್ಷೆ ಅನುಷ್ಠಾನ ಸಮಿತಿ ಸಭೆ ನಡೆಯಿತು.