ಕನ್ನಡಪ್ರಭ ವಾರ್ತೆ ಬೀದರ್‌

ಎಸ್‌ಐಆರ್‌ ಯೋಜನೆಯ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪುವಂತೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕೆಂದು ಹಿರಿಯ ಸಿವಿಲ್‌ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾಘವೇಂದ್ರ ಉಪಾಧ್ಯೆ ಹೇಳಿದರು.

ಅವರು ಜಿಲ್ಲಾ ಪಂಚಾಯತ್‌ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡ, ಎಸ್‌ಐಆರ್‌ ಯೋಜನೆಯ ಕುರಿತು ಅರಿವು ಮೂಡಿಸುವ ಹಾಗೂ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕೆ ಅಗತ್ಯವಾದ ಮಾಹಿತಿ ಮತ್ತು ಮಾರ್ಗದರ್ಶನ ಒಂದು ದಿನದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಸಾರ್ವಜನಿಕರಿಗೆ ಯೋಜನೆಯ ಬಗ್ಗೆ ಸೂಕ್ತ ಮಾಹಿತಿ ನೀಡಿ, ಅರ್ಹ ಫಲಾನುಭವಿಗಳಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಸಹಕಾರ ಒದಗಿಸಬೇಕು. ಯೋಜನೆಯ ಅನುಷ್ಠಾನದಲ್ಲಿ ಎದುರಾಗುವ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಸರ್ಕಾರದ ಆಶಯದಂತೆ ಯೋಜನೆಯ ಸೌಲಭ್ಯಗಳನ್ನು ಜನರಿಗೆ ತಲುಪುವಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಜಿಲ್ಲಾ ಪಂಚಾಯತ್‌ ಉಪ ಕಾರ್ಯದರ್ಶಿ ಶರಣಬಸಪ್ಪ ಕೊಟ್ಟೆಪ್ಪಗೋಳ ಮಾತನಾಡಿ, ಯಾವುದೇ ಯೋಜನೆ ಯಶಸ್ವಿಯಾಗಬೇಕಾದರೆ ಅದರ ಅನುಷ್ಠಾನದಲ್ಲಿ ತೊಡಗಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಯೋಜನೆಯ ಸಂಪೂರ್ಣ ಮಾಹಿತಿ ಹಾಗೂ ಸ್ಪಷ್ಟ ಅರಿವು ಇರಬೇಕು. ಎಸ್‌ಐಆರ್‌ ಯೋಜನೆಯ ಉದ್ದೇಶಗಳನ್ನು ಪರಿಣಾಮಕಾರಿಯಾಗಿ ಈಡೇರಿಸಲು ಎಲ್ಲರೂ ಸಮನ್ವಯದಿಂದ ಹಾಗೂ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕೆಂದರು.


ರಾಜ್ಯ ಮಟ್ಟದ ಮಾಸ್ಟರ್‌ ಟ್ರೈನರ್‌ ಡಾ.ಗೌತಮ ಅರಳಿ ಮಾತನಾಡಿ, ಈಗಾಗಲೇ ನಿಮಗೆ ಬಿಎಲ್‌ಓ ಅವರು ನೀಡಿರುವ ಫಾರಂಗಳು ಚೆನ್ನಾಗಿ ಓದಿಸಿಕೊಂಡು ಭರ್ತಿ ಮಾಡಿ ಕೊಡಿ, ಯಾರು ವಿನಾಕಾರಣ ಎಸ್‌ಐಆರ್‌ ಫಾರಂಗಳು ನಿಮ್ಮ ಬಳಿಯೇ ಇಟ್ಟುಕೊಳ್ಳಬೇಡಿ ಹಾಗೂ ಇದರ ಕುರಿತು ಏನೇ ಗೊಂದಲಗಳು ಇದ್ದಲ್ಲಿ ಸಹಾಯವಾಣಿ ಸಂಖ್ಯೆ 1950ಕ್ಕೆ ಕರೆ ಮಾಡಿ ಎಂದು ತಿಳಿಸಿದರು.

ತರಬೇತಿ ಕಾರ್ಯಾಗಾರದಲ್ಲಿ ಎಸ್‌ಐಆರ್ ಯೋಜನೆಯ ಉದ್ದೇಶ, ಅನುಷ್ಠಾನ ವಿಧಾನ, ಮಾರ್ಗಸೂಚಿಗಳು ಹಾಗೂ ಕ್ಷೇತ್ರಮಟ್ಟದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಂಪನ್ಮೂಲ ವ್ಯಕ್ತಿಗಳಿಂದ ವಿವರವಾದ ಮಾಹಿತಿ ನೀಡಿದರು. ತರಬೇತಿಯಲ್ಲಿ ಭಾಗವಹಿಸಿದ ಅಧಿಕಾರಿಗಳು ಮತ್ತು ಸಿಬ್ಬಂದಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್‌ ಕಚೇರಿ ಎಲ್ಲಾ ಶಾಖೆಯ ಮುಖ್ಯಸ್ಥರು, ಸಿಬ್ಬಂದಿ ವರ್ಗದವರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಇತರರು ಇದ್ದರು.