ಕುಶಾಲನಗರ: ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್ಐಆರ್) ಅಭಿಯಾನದಲ್ಲಿ ಮನೆ ಮನೆಗೆ ತೆರಳಿ ಶೇ. 99ರಷ್ಟು ಅರ್ಜಿ ನಮೂನೆಗಳನ್ನು ನೀಡುವ ಗುರಿ ಸಾಧಿಸಲಾಗಿದೆ ಮತ್ತು ಶೇ. 30ರಷ್ಟು ಮತದಾರರ ಅರ್ಜಿಗಳನ್ನು ಸ್ವೀಕರಿಸಿ ಡಿಜಿಟಲೀಕರಣ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ತಿಳಿಸಿದ್ದಾರೆ.

ಕುಶಾಲನಗರದಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕುರಿತು ನಡೆದ ಬೃಹತ್ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಜಿಲ್ಲೆಯ ಎಲ್ಲೆಡೆ ಸಂಬಂಧಿಸಿದ ಅಧಿಕಾರಿಗಳು, ಸಿಬ್ಬಂದಿ ನಿರಂತರವಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು ಮತದಾ ರರ ಪಟ್ಟಿ ಪರಿಷ್ಕರಣೆಯಲ್ಲಿ ಸಮರ್ಪಕ ಮಾಹಿತಿ ನೀಡಿ ಅರ್ಜಿ ನೀಡುವ ಕಾರ್ಯದಲ್ಲಿ ಯಶಸ್ವಿಯಾಗಿದ್ದಾರೆ ಎಂದ ಜಿಲ್ಲಾಧಿಕಾರಿ, ಕುಶಾಲನಗರದಲ್ಲಿ ಈ ಸಂಬಂಧ ಉತ್ತಮ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಜನರಿಗೆ ಅರಿವು ಜಾಗೃತಿ ಮೂಡಿಸುತ್ತಿರುವ ಬಗ್ಗೆ ಮೆಚ್ಚುಗೆ ಸೂಚಿಸಿದರು. ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯಬಾರದು. ಅನರ್ಹ ಜನರು ಪಟ್ಟಿಯಲ್ಲಿ ಸೇರ್ಪಡೆಗೊಳ್ಳದಂತೆ ಎಚ್ಚರ ವಹಿಸಬೇಕಾಗಿದೆ ಎಂದರು.

ಕುಶಾಲನಗರ ಬೈಚನಹಳ್ಳಿ ಬಳಿ ಮಾರಿಯಮ್ಮ ದೇವಾಲಯದಿಂದ ಜಾಥಾಕ್ಕೆ ಜಿಲ್ಲಾಧಿಕಾರಿಗಳು ನಗಾರಿ ಬಾರಿಸುವ ಮೂಲಕ ಚಾಲನೆ ನೀಡಿದರು.

ಕಲಾವಿದ ಈ. ರಾಜು ಅವರ ತಂಡದಿಂದ ಬೀದಿ ನಾಟಕ ಮೂಲಕ ಜನರಿಗೆ ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಅರಿವು ಮೂಡಿಸಲಾಯಿತು.ಸ್ಥಳೀಯ ಶಾಲೆ, ಕಾಲೇಜಿನ ಸ್ಕೌಟ್ಸ್ ಗೈಡ್ಸ್, ರೋಟರಿ, ಫಾತಿಮಾ ಪ್ರೌಢಶಾಲೆ ವಿದ್ಯಾರ್ಥಿಗಳು, ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿಗಳು ಮತ್ತು ಪುರಸಭೆ ಪೌರ ಕಾರ್ಮಿಕರು, ಸಿಬ್ಬಂದಿಗಳು ಜಾಥಾದಲ್ಲಿ ಪಾಲ್ಗೊಂಡಿದ್ದರು.

ಜಾಥಾದಲ್ಲಿ ಕೊಡಗು ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸೋಮಲ್, ಅರಣ್ಯ ಇಲಾಖೆಯ ಮಡಿಕೇರಿ ವಿಭಾಗದ ಉಪ ಸಂರಕ್ಷಣಾಧಿಕಾರಿ ಅಭಿಷೇಕ್ ವಿ., ಅರಣ್ಯ ಇಲಾಖೆ ಪ್ರೊಬೆಷನರಿ ಅಧಿಕಾರಿ ಸೆಂದಿಲ್, ಮುಖ್ಯ ಕಾರ್ಯನಿರ್ವಣಾಧಿಕಾರಿ ಆನಂದ್ ಪ್ರಕಾಶ್ ಮೀನಾ, ತಾಲೂಕು ತಹಸಿಲ್ದಾರ್ ಕೃಷ್ಣಮೂರ್ತಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶೇಖರ್, ಕುಶಾಲನಗರ ಪುರಸಭೆ ಮುಖ್ಯ ಅಧಿಕಾರಿ ಟಿ.ಎಸ್. ಗಿರೀಶ್, ಮತ್ತಿತರ ಅಧಿಕಾರಿ ಸಿಬ್ಬಂದಿ ಪಾಲ್ಗೊಂಡಿದ್ದರು.