ಗದಗ: ಸರ್ಕಾರದಿಂದ ಬಿಡುಗಡೆಯಾಗುವ ಪ್ರತಿಯೊಂದು ರುಪಾಯಿ ಸಾರ್ವಜನಿಕರ ಹಿತಕ್ಕಾಗಿ ಸಮರ್ಪಕವಾಗಿ ಬಳಕೆಯಾಗಬೇಕು. ಯಾವುದೇ ಕಾರಣಕ್ಕೂ ಅನುದಾನ ಅಪವ್ಯಯವಾಗದಂತೆ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಜಿಪಂ ಆಡಳಿತಾಧಿಕಾರಿ ಡಾ. ಎಂ.ವಿ. ವೆಂಕಟೇಶ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲಾಡಳಿತ ಭವನದ ಕೋರ್ಟ್ ಹಾಲ್‌ನಲ್ಲಿ ನಡೆದ ಜಿಪಂ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಭೆಯಲ್ಲಿ ಪ್ರಸಕ್ತ ಸಾಲಿನ ಜಿಪಂ ಅನುದಾನದ ಕ್ರಿಯಾ ಯೋಜನೆ, ಜಿಲ್ಲಾ ವಲಯದಡಿ ವಲಯವಾರು ಅನುದಾನ ಹಂಚಿಕೆ ಹಾಗೂ ವಿವಿಧ ಇಲಾಖೆಗಳ ಯೋಜನೆಗಳಿಗೆ ಅನುಮೋದನೆ ನೀಡಲಾಯಿತು. ಜಿಪಂನಲ್ಲಿ ಶೇ. 60ರಷ್ಟು ಅನುದಾನವನ್ನು ವೇತನಕ್ಕಾಗಿ ಹಾಗೂ ತಾಪಂಗಳಿಗೆ ನೀಡಿದ ಅನುದಾನದಲ್ಲಿ ಶೇ. 95ರಷ್ಟು ವೇತನಕ್ಕಾಗಿ ಮೀಸಲಿಡುವ ಕುರಿತು ಸಭೆಯಲ್ಲಿ ಅನುಮೋದನೆ ದೊರೆಯಿತು.ಇಲಾಖಾವಾರು ರೂಪಿಸಲಾದ ಯೋಜನೆಗಳ ಕುರಿತು ಸುದೀರ್ಘ ಪರಿಶೀಲನೆ ನಡೆಸಿ ಅಗತ್ಯ ನಿರ್ದೇಶನಗಳನ್ನು ನೀಡಲಾಯಿತು. ಅಕ್ಷರ ದಾಸೋಹ ಯೋಜನೆಯಡಿ ಶಾಲಾ ಮಕ್ಕಳಿಗೆ ಗುಣಮಟ್ಟದ ಆಹಾರ ಪೂರೈಕೆಯಾಗುವಂತೆ ನಿರಂತರ ಮೇಲ್ವಿಚಾರಣೆ ನಡೆಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ ಡಾ. ವೆಂಕಟೇಶ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಭಾರತ್ ಜೋಡೋ ಯುವಕ ಮಂಡಳಗಳ ಸ್ಥಾಪನೆಗೆ ಆದ್ಯತೆ ನೀಡುವಂತೆ ನಿರ್ದೇಶಿಸಿದರು.
ಆರೋಗ್ಯ ಇಲಾಖೆಯ ಕಾರ್ಯವೈಖರಿ ಪರಿಶೀಲಿಸಿದ ಅವರು, ಆಸ್ಪತ್ರೆಗಳಲ್ಲಿ ಗುಣಮಟ್ಟದ ಚಿಕಿತ್ಸೆ, ಅಗತ್ಯ ಔಷಧಗಳ ಸಮರ್ಪಕ ಖರೀದಿ ಹಾಗೂ ಅವುಗಳ ಲಭ್ಯತೆ ಖಚಿತಪಡಿಸಿಕೊಳ್ಳಬೇಕು ಎಂದರು. ಚೀನಾ ನಿರ್ಮಿತ ಬೆಡ್‌ಗಳ ಖರೀದಿ ತಪ್ಪಿಸುವಂತೆ ಸೂಚಿಸಿ, ಗುಣಮಟ್ಟದ ಔಷಧ ಖರೀದಿಯಲ್ಲಿ ನಿರ್ಲಕ್ಷ್ಯ ಕಂಡುಬಂದರೆ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.ಆಯುಷ್ ಇಲಾಖೆಗೆ ಹಿಂದಿನ ಸಭೆಯಲ್ಲಿ ಔಷಧ ಖರೀದಿಗೆ ನೀಡಿದ್ದ ಅನುದಾನದ ಸದ್ಬಳಕೆಯ ಕುರಿತು ಮಾಹಿತಿ ಪಡೆದು, ಅನುದಾನ ಸಮರ್ಪಕವಾಗಿ ಬಳಸುವಂತೆ ಸೂಚಿಸಿದರು. ಜಿಲ್ಲೆಯ ಎಲ್ಲ ಆರ್‌ಒ ಘಟಕಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ನಿರ್ವಹಣೆ ಕೈಗೊಂಡು, ಲಿಂಕ್ ಯೋಜನೆಯ ಉದ್ದೇಶ ಯಶಸ್ವಿಯಾಗಬೇಕು ಎಂದರು. ಸಾಮಾಜಿಕ ಅರಣ್ಯ ಇಲಾಖೆಯ ಕಾರ್ಯವೈಖರಿ ಕುರಿತು ಅಸಮಾಧಾನ ವ್ಯಕ್ತಪಡಿಸಿದ ಅವರು, ಆರ್‌ಎಫ್‌ಒಗಳು ವಿಬಿ ಜಿ ರಾಮ್ ಜಿ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಸ್ಥಳೀಯ ಹವಾಮಾನಕ್ಕೆ ಹೊಂದುವ ಗಿಡಗಳನ್ನು ಬೆಳೆಸಲು ಮುಂದಾಗಬೇಕು. ಪ್ರತಿ ತಾಲೂಕಿನಲ್ಲಿ ಅರಣ್ಯ ಅಭಿವೃದ್ಧಿಗೆ ಕ್ರಿಯಾ ಯೋಜನೆ ರೂಪಿಸುವಂತೆ ಸೂಚಿಸಿದ ಅವರು, ಶಾಲಾ ಆವರಣಗಳಲ್ಲಿ ಕರಿಬೇವು, ನಿಂಬೆ, ನೆಲ್ಲಿ ಹಾಗೂ ಪಪ್ಪಾಯಿ ಗಿಡಗಳನ್ನು ಕಡ್ಡಾಯವಾಗಿ ನೆಡುವ ಕಾರ್ಯಕ್ರಮ ಕೈಗೊಳ್ಳುವಂತೆ ಅರಣ್ಯ ಇಲಾಖೆಗೆ ನಿರ್ದೇಶನ ನೀಡಿದರು.
ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್., ಜಿಪಂ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಮುಖ್ಯ ಯೋಜನಾಧಿಕಾರಿ ಎ.ಎ. ಕಂಬಾಳಿಮಠ, ಉಪವಿಭಾಗಾಧಿಕಾರಿ ಗಂಗಪ್ಪ ಎಂ., ಜಂಟಿ ಕೃಷಿ ನಿರ್ದೇಶಕಿ ಚೇತನಾ ಪಾಟೀಲ, ಡಿಡಿಪಿಐ ಆರ್.ಎಸ್. ಬುರಡಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಎಸ್. ನೀಲಗುಂದ ಉಪಸ್ಥಿತರಿದ್ದರು.