ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಎದುರಾಗುತ್ತಿರುವ ಕುಡಿಯುವ ನೀರಿನ ಸಮಸ್ಯೆ ಹಾಗೂ ಬರ ಪರಿಸ್ಥಿತಿ ಕುರಿತು ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ. ಖಂಡ್ರೆ ಅವರು ಜಿಲ್ಲಾಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿ ಗಳೊಂದಿಗೆ ಮಹತ್ವದ ಸಭೆ ನಡೆಸಿ ಬರ ಪರಿಸ್ಥಿತಿ ಮತ್ತು ಕುಡಿಯುವ ನೀರಿನ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ ಎಂದಿದ್ದಾರೆ.

ಕನ್ನಡಪ್ರಭ ವಾರ್ತೆ ಬೀದರ್

ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಎದುರಾಗುತ್ತಿರುವ ಕುಡಿಯುವ ನೀರಿನ ಸಮಸ್ಯೆ ಹಾಗೂ ಬರ ಪರಿಸ್ಥಿತಿ ಕುರಿತು ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ. ಖಂಡ್ರೆ ಅವರು ಜಿಲ್ಲಾಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿ ಗಳೊಂದಿಗೆ ಮಹತ್ವದ ಸಭೆ ನಡೆಸಿ ಬರ ಪರಿಸ್ಥಿತಿ ಮತ್ತು ಕುಡಿಯುವ ನೀರಿನ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ ಎಂದಿದ್ದಾರೆ.

ಸೋಮವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಪರಿಸ್ಥಿತಿಯನ್ನು ಸಮಗ್ರವಾಗಿ ಪರಿಶೀಲಿಸಿದ ಸಚಿವರು ಜಿಲ್ಲೆಯ ಬರ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿ, ಜನರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ಕೊರತೆಯಾಗದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಯಾವುದೇ ಲೋಪವಾಗದಿರಲಿ: ಜಿಲ್ಲೆಯ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಅಧಿಕಾರಿ ಗಳು ನಿರಂತರ ನಿಗಾ ವಹಿಸಬೇಕು. ನೀರಿನ ಕೊರತೆ ಇರುವ ಗ್ರಾಮಗಳನ್ನು ತಕ್ಷಣ ಗುರುತಿಸಿ, ಅಗತ್ಯವಿರುವ ಕಡೆಗಳಲ್ಲಿ ಖಾಸಗಿ ಕೊಳವೆಬಾವಿಗಳನ್ನು ಬಾಡಿಗೆಗೆ ಪಡೆಯುವುದು, ಟ್ಯಾಂಕರ್‌ಗಳ ಮೂಲಕ ನೀರು ಪೂರೈಸುವುದು ಸೇರಿದಂತೆ ಪರ್ಯಾಯ ವ್ಯವಸ್ಥೆಗಳನ್ನು ಸಿದ್ಧಪಡಿಸಬೇಕೆಂದು ಸೂಚಿಸಿದರು.

ಕೆಟ್ಟು ಹೋಗಿರುವ ಕೊಳವೆ ಬಾವಿಗಳು, ಪಂಪ್‌ಸೆಟ್‌ಗಳು ಹಾಗೂ ನೀರು ಸರಬರಾಜು ವ್ಯವಸ್ಥೆಗಳನ್ನು ತಕ್ಷಣ ದುರಸ್ತಿಗೊಳಿಸಿ, ಜನರಿಗೆ ಸಮರ್ಪಕವಾಗಿ ನೀರು ತಲುಪುವಂತೆ ಕ್ರಮ ಕೈಗೊಳ್ಳಬೇಕು. ಕುಡಿಯುವ ನೀರಿನ ಸಮಸ್ಯೆ ಕುರಿತು ಸಾರ್ವಜನಿಕ ರಿಂದ ದೂರುಗಳು ಬಂದಲ್ಲಿ ವಿಳಂಬ ಮಾಡದೆ ತಕ್ಷಣ ಸ್ಪಂದಿಸಬೇಕು ಎಂದು ತಿಳಿಸಿದರು.

ಬರ ನಿರ್ವಹಣೆಯಲ್ಲಿ ಅಧಿಕಾರಿಗಳ ಜವಾಬ್ದಾರಿ ಮಹತ್ವದ್ದು: ಬರ ಪರಿಸ್ಥಿತಿಯಿಂದ ರೈತರು, ಕೃಷಿ ಕಾರ್ಮಿಕರು ಹಾಗೂ ಗ್ರಾಮೀಣ ಜನರು ತೊಂದರೆ ಅನುಭವಿಸದಂತೆ ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳ ಬೇಕು. ಬರಪೀಡಿತ ಪ್ರದೇಶಗಳ ಪರಿಸ್ಥಿತಿಯನ್ನು ನಿರಂತರವಾಗಿ ಪರಿಶೀಲಿಸಿ, ಅಗತ್ಯ ಪರಿಹಾರ ಕ್ರಮಗಳನ್ನು ಕೈಗೊಳ್ಳ ಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಮೇವಿನ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಬೇಕು. ಅಗತ್ಯವಿರುವ ಕಡೆಗಳಲ್ಲಿ ಗೋಶಾಲೆಗಳನ್ನು ಆರಂಭಿಸುವುದು ಹಾಗೂ ಮೇವು ಬ್ಯಾಂಕ್‌ಗಳ ವ್ಯವಸ್ಥೆ ಮಾಡುವ ಕುರಿತು ಮುನ್ನೆಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು.

ಅಧಿಕಾರಿಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಗ್ರಾಪಂ ಗಳು, ತಾ.ಪಂ ಗಳು, ಜಿಲ್ಲಾಡಳಿತ ಹಾಗೂ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಕೇವಲ ಸಭೆಗಳಿಗೆ ಸೀಮಿತವಾಗದೆ, ಗ್ರಾಮಗಳಿಗೆ ಭೇಟಿ ನೀಡಿ ವಾಸ್ತವ ಪರಿಸ್ಥಿತಿಯನ್ನು ಪರಿಶೀಲಿಸಬೇಕು. ಜನರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸಲು ಆದ್ಯತೆ ನೀಡಬೇಕು ಎಂದು ಸಚಿವರು ತಿಳಿಸಿದರು.

ಸಭೆಯಲ್ಲಿ ಬೀದರ್‌ ಶಾಸಕರಾದ ರಹಿಂ ಖಾನ್, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿ.ಪಂ ಸಿಇಓ ಗಿಟ್ಟೆ, ಎಸ್ಪಿ ಪ್ರದೀಪ ಗುಂಟಿ, ಬೀದರ್ ಸಹಾಯಕ ಆಯುಕ್ತರು, ಇನ್ನಿತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.