ಯೋಜನೆಗಳ ಅನುಷ್ಠಾನದ ಪ್ರಗತಿ ನಿರಂತರವಾಗಿ ಮೇಲ್ವಿಚಾರಣೆ ನಡೆಸಿ ಮುಂದಿನ ಸಭೆಯೊಳಗೆ ನಿಗದಿತ ಗುರಿ ಸಾಧಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು

ಹೊಸಪೇಟೆ: ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ಸಕಾಲದಲ್ಲಿ ತಲುಪುವಂತೆ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸುವಂತೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಕುರಿ ಶಿವಮೂರ್ತಿ ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಮತ್ತು ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಪ್ರತಿಯೊಂದು ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಸೌಲಭ್ಯ ತಲುಪಿರುವ ಕುರಿತು ಅಧಿಕಾರಿಗಳು ಸಮಗ್ರ ಪರಿಶೀಲನೆ ನಡೆಸಬೇಕು. ತಾಂತ್ರಿಕ ಕಾರಣ, ದಾಖಲೆಗಳ ಕೊರತೆ ಅಥವಾ ಇಲಾಖೆಗಳ ನಡುವಿನ ಸಮನ್ವಯದ ಅಭಾವದಿಂದ ಯಾವುದೇ ಫಲಾನುಭವಿಗಳು ಸೌಲಭ್ಯದಿಂದ ವಂಚಿತರಾಗಬಾರದು. ಬಾಕಿ ಇರುವ ಅರ್ಜಿ ಹಾಗೂ ಫಲಾನುಭವಿಗಳ ಸಮಸ್ಯೆ ಗುರುತಿಸಿ ಅವುಗಳ ವಿಲೇವಾರಿಗೆ ಕಾಲಮಿತಿ ನಿಗದಿಪಡಿಸಬೇಕು. ಯೋಜನೆಗಳ ಅನುಷ್ಠಾನದ ಪ್ರಗತಿ ನಿರಂತರವಾಗಿ ಮೇಲ್ವಿಚಾರಣೆ ನಡೆಸಿ ಮುಂದಿನ ಸಭೆಯೊಳಗೆ ನಿಗದಿತ ಗುರಿ ಸಾಧಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದು ನಿರ್ದೇಶಿಸಿದರು.

ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ ಸದಸ್ಯರು ಮಾತನಾಡಿ, ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಸ್ವಚ್ಛತೆ ಮರೀಚಿಕೆಯಾಗಿದ್ದು, ಐತಿಹಾಸಿಕ ಸ್ಥಳಕ್ಕೆ ಆಗಮಿಸುವ ಸಾರ್ವಜನಿಕರಿಗೆ ಪ್ರವಾಸಿಗರಿಗೆ ಮುಜುಗರ ಉಂಟಾಗುತ್ತಿದೆ. ರಾತ್ರಿ ವೇಳೆ ಸಾರ್ವಜನಿಕರ ಅದರಲ್ಲೂ ವಿಶೇಷವಾಗಿ ಮಹಿಳೆಯರ ಸುರಕ್ಷತೆಗಾಗಿ ಸಿಸಿಟಿವಿ ಅಳವಡಿಸಬೇಕು. ನಗರ ವ್ಯಾಪ್ತಿಯಲ್ಲಿ ನಗರ ಸಾರಿಗೆ ವ್ಯವಸ್ಥೆ ಸಮಪರ್ಕಕವಾಗಿಲ್ಲದಿರುವ ಬಗ್ಗೆ ಸಾಕಷ್ಟು ದೂರುಗಳಿವೆ. ಆದ್ದರಿಂದ ಇನ್ನಷ್ಟು ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು ಎಂದು ಸಭೆಯಲ್ಲಿ ಮನವಿ ಮಾಡಿದರು.

ಜಿಲ್ಲೆಯಲ್ಲಿ ಒಟ್ಟು 3.36 ಲಕ್ಷ ಬಿಪಿಎಲ್ ಪಡಿತರ ಚೀಟಿಗಳ ಮೂಲಕ 12.83 ಲಕ್ಷ ಫಲಾನುಭವಿಗಳಿಗೆ 2023ರ ಜುಲೈನಿಂದ 2024ರ ಡಿಸೆಂಬರ್‌ವರೆಗೆ ಒಟ್ಟು ₹285 ಕೋಟಿ ಹಣ ಪಾವತಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ರಿಯಾಜ್ ಮಾಹಿತಿ ನೀಡಿದರು.

2026ರ ಮೇ ವೇಳೆಗೆ ಶೇ.99ರಷ್ಟು ಫಲಾನುಭವಿಗಳ ನೋಂದಣಿ ಪೂರ್ಣಗೊಂಡಿದೆ. ಬಾಕಿ ಇರುವ 183 ಫಲಾನುಭವಿಗಳ ಪರಿಶೀಲನೆ ಹಾಗೂ ಮೃತಪಟ್ಟವರ ಪಡಿತರ ಚೀಟಿಗಳ ರದ್ದತಿಗೆ ಕ್ರಮ ಕೈಗೊಳ್ಳಲಾಗುತ್ತಿದೆ.ಆಗಸ್ಟ್, ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳ ಕಂತಿನ ಹಣ ಒಟ್ಟಿಗೆ ಪಾವತಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಗಂಗಪ್ಪ ಸಭೆಗೆ ತಿಳಿಸಿದರು.

ಯೋಜನೆಯಡಿ ಅರ್ಹ ಫಲಾನುಭವಿಗಳ ಮರುಸಮೀಕ್ಷೆ ನಡೆಸಲಾಗಿದ್ದು, ಬಾಡಿಗೆದಾರರ ಬಾಡಿಗೆ ಕರಾರು ಪತ್ರ ಸೇರಿದಂತೆ ಅಗತ್ಯ ದಾಖಲೆ ಪರಿಶೀಲಿಸಲಾಗಿದೆ ಎಂದು ಜೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರ ವಿಷ್ಣು ತಿಳಿಸಿದರು.

ಜಿಪಂ ಸಿಇಒ ಗರಿಮಾ ಪನ್ವಾರ್ ಮಾತನಾಡಿ, ಅನಧಿಕೃತ ವಿದ್ಯುತ್ ಸಂಪರ್ಕಗಳ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳಬೇಕು. ಹಳೆಯ ವಿದ್ಯುತ್ ಕಂಬ ಹಾಗೂ ತಂತಿಗಳ ಬದಲಾವಣೆಗೆ ಸ್ಥಳ ಪರಿಶೀಲನೆ ನಡೆಸಿ ಸಮಸ್ಯೆ ಪರಿಹರಿಸಬೇಕು ಎಂದು ಸೂಚಿಸಿದರು.

ಜಿಲ್ಲೆಯಲ್ಲಿ ಒಟ್ಟು 14,096 ಅಭ್ಯರ್ಥಿ ನೋಂದಾಯಿಸಿಕೊಂಡಿದ್ದು, ಈ ಪೈಕಿ 14,077 ಫಲಾನುಭವಿಗಳಿಗೆ ಡಿಬಿಟಿ ಮೂಲಕ ನೇರವಾಗಿ ₹38.69 ಕೋಟಿ ಹಣ ಪಾವತಿಸಲಾಗಿದೆ. ವಿವಿಧ ಪದವಿಗಳು ಪೂರ್ಣಗೊಳಿಸಿ ಹಲವು ವಿದ್ಯಾರ್ಥಿಗಳು ಪದವಿ ಪಡೆದು ಹೊರಬರುತ್ತಿದ್ದಾರೆ. ಆದರೆ ಅವರಿಗೆ ಸಮರ್ಪಕವಾಗಿ ಉದ್ಯೋಗಾವಕಾಶಗಳು ದೊರೆಯುತ್ತಿಲ್ಲ. ಆದ್ದರಿಂದ ಅಗತ್ಯಕ್ಕನುಗುಣವಾಗಿ ಕೌಶಲ್ಯಾಧಾರಿತ ಉದ್ಯೋಗ ತರಭೇತಿ ಆಯೋಜಿಸುವ ಅವಶ್ಯಕತೆ ಇದೆ. ನಿರುದ್ಯೋಗ ಸಮಸ್ಯೆ ನಿವಾರಣೆಗೆ ಜಿಲ್ಲೆಯಲ್ಲಿ ಉದ್ಯೋಗ ಮೇಳಗಳ ಅಗತ್ಯವಿದ್ದು, ಬೃಹತ್ ಉದ್ಯೋಗ ಮೇಳ ಆಯೋಜಿಸುವಂತೆ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಕೆ. ಶಿವಮೂರ್ತಿ ಸೂಚಿಸಿದರು.

ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯಡಿ ಇದುವರೆಗೆ ಜಿಲ್ಲೆಯಲ್ಲಿ ₹2.27 ಕೋಟಿ ಮಹಿಳಾ ಪ್ರಯಾಣಿಕರು ಉಚಿತವಾಗಿ ಪ್ರಯಾಣಿಸಿದ್ದು, ಇದಕ್ಕಾಗಿ ₹9.78 ಕೋಟಿ ಭರಿಸಲಾಗಿದೆ. ಯೋಜನೆ ಆರಂಭವಾದಾಗಿನಿಂದ ಈವರೆಗೆ ಒಟ್ಟು ₹500 ಕೋಟಿ ವೆಚ್ಚ ಮಾಡಲಾಗಿದೆ ಎಂದು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷ ಕೆ.ಬದಾವಲಿ, ಚಂದ್ರಪ್ಪ ಹುಲಿಕಟ್ಟಿ, ಕೆ.ಎಸ್. ಶಾಂತನಗೌಡ, ಎಚ್. ಜಂದಿಸಾಹೇಬ್ ಸೇರಿದಂತೆ ಸಮಿತಿ ಸದಸ್ಯರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.