ಮುಂಗಾರು ಮಳೆ ಕೈಕೊಟ್ಟ ಕಾರಣ ಜಿಲ್ಲೆಯಲ್ಲಿ ಭೀಕರ ಬರಗಾಲ ಆವರಿಸಿದೆ. ಈ ನಿಟ್ಟಿನಲ್ಲಿ ಕುಡಿಯುವ ನೀರನ್ನು ಮಿತವಾಗಿ ಬಳಸುವಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು.

ಹೊಸಪೇಟೆ: ಜಿಲ್ಲೆಯಲ್ಲಿ ಮುಂದುವರೆದಿರುವ ಭೀಕರ ಬರ ಪರಿಸ್ಥಿತಿಯ ಹಿನ್ನೆಲೆ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ವಿಚಾರಗಳಲ್ಲಿ ಯಾವುದೇ ಲೋಪವಾಗದಂತೆ ಅಧಿಕಾರಿಗಳು ಕಟ್ಟೆಚ್ಚರ ವಹಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬರ ನಿರ್ವಹಣೆ ಕುರಿತು ಆಯೋಜಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮುಂಗಾರು ಮಳೆ ಕೈಕೊಟ್ಟ ಕಾರಣ ಜಿಲ್ಲೆಯಲ್ಲಿ ಭೀಕರ ಬರಗಾಲ ಆವರಿಸಿದೆ. ಈ ನಿಟ್ಟಿನಲ್ಲಿ ಕುಡಿಯುವ ನೀರನ್ನು ಮಿತವಾಗಿ ಬಳಸುವಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು. ನೀರು ವ್ಯರ್ಥವಾಗಿ ಹರಿದು ಪೋಲಾಗುವುದನ್ನು ತಡೆಯಬೇಕು. ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ತೀವ್ರ ನೀರಿನ ಕೊರತೆ ಉಂಟಾದಲ್ಲಿ ಖಾಸಗಿ ಬೋರ್‌ವೆಲ್ ಬಾಡಿಗೆ ಪಡೆದು ನೀರು ಪೂರೈಕೆಗೆ ಕ್ರಮ ವಹಿಸಬೇಕು. ಕೊಳವೆ ಬಾವಿ ಲಭ್ಯವಾಗದಿದ್ದಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಬೇಕು ಎಂದು ನಿರ್ದೇಶಿಸಿದರು.

ಬರ ಪರಿಸ್ಥಿತಿಯಲ್ಲಿ ಜಾನುವಾರುಗಳಿಗೆ ಮೇವು ಮತ್ತು ಕುಡಿಯುವ ನೀರಿನ ಕೊರತೆಯಾಗದಂತೆ ಕ್ರಮ ಕೈಗೊಳ್ಳಬೇಕು. ನಾಲ್ಕು ವಾರಗಳಿಗೂ ಕಡಿಮೆ ಮೇವು ಲಭ್ಯವಿದ್ದಲ್ಲಿ ಮೇವು ಬ್ಯಾಂಕ್ ಸ್ಥಾಪಿಸಲು ಹಾಗೂ ಎರಡು ವಾರಗಳಿಗಿಂತ ಕಡಿಮೆ ಅವಧಿಗೆ ಮೇವು ಲಭ್ಯವಿದ್ದಲ್ಲಿ ಗೋಶಾಲೆ ಆರಂಭಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಜಾನುವಾರುಗಳ ಸಂಖ್ಯೆಗೆ ಅನುಗುಣವಾಗಿ ಮೇವು ಬೀಜ ವಿತರಿಸಬೇಕು. ಗ್ರಾಮಗಳಲ್ಲಿರುವ ನೀರಿನ ತೊಟ್ಟಿ ಸಮರ್ಪಕವಾಗಿ ನಿರ್ವಹಿಸುವುದರ ಜತೆಗೆ ಅಗತ್ಯವಿರುವ ಸಮರ್ಪಕವಾಗಿ ನೀರು ಪೂರೈಕೆ ಮಾಡಬೇಕು ಎಂದು ಸೂಚಿಸಿದರು.

ಜಿಲ್ಲೆಯ ಹೊಸಪೇಟೆ ತಾಲೂಕಿನಲ್ಲಿ 19 ಗ್ರಾಪಂಗಳನ್ನು ಸಮಸ್ಯಾತ್ಮಕ ಗ್ರಾಪಂಗಳೆಂದು ಗುರುತಿಸಲಾಗಿದೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದ್ದರೂ ಬರ ಮುಂದುವರಿದರೆ ನೀರಿನ ಸಮಸ್ಯೆ ತೀವ್ರಗೊಳ್ಳುವ ಸಾಧ್ಯತೆಯಿದ್ದು, ಅದಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದರು.

ಬರಗಾಲದ ಹಿನ್ನೆಲೆ ರೈತರಿಗೆ ಸಾಲ ವಸೂಲಾತಿ ಹೆಸರಿನಲ್ಲಿ ನೋಟಿಸ್ ನೀಡಿ ಕಿರುಕುಳ ನೀಡುವುದು ಅಥವಾ ಬಲವಂತದ ವಸೂಲಾತಿ ನಡೆಸುವುದನ್ನು ಸಹಿಸಲಾಗುವುದಿಲ್ಲ. ಇಂತಹ ಪ್ರಕರಣ ಕಂಡು ಬಂದಲ್ಲಿ ಸಂಬಂಧಪಟ್ಟ ಮೈಕ್ರೋ ಫೈನಾನ್ಸ್ ಸಂಸ್ಥೆ ಅಥವಾ ವ್ಯಕ್ತಿಗಳ ವಿರುದ್ಧ ಜಿಲ್ಲಾಡಳಿತ ಕ್ರಮ ಕೈಗೊಳ್ಳಲಿದೆ ಎಂದು ಜಿಲ್ಲಾಧಿಕಾರಿಗಳು ಎಚ್ಚರಿಸಿದರು.

ಗುಳೆ ತಪ್ಪಿಸಲು ಉದ್ಯೋಗಾವಕಾಶ ಕಲ್ಪಿಸಿ:ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗಾವಕಾಶ ಕಲ್ಪಿಸುವ ಮೂಲಕ ರೈತರು ಹಾಗೂ ಕೂಲಿಕಾರ್ಮಿಕರು ಕೆಲಸಕ್ಕಾಗಿ ಗುಳೆ ಹೋಗುವುದನ್ನು ತಡೆಯಬೇಕು. ವಿಬಿಜಿ ರಾಮ್ ಜಿ ಯೋಜನೆಯಡಿ ಅರ್ಹರಿಗೆ ಕೆಲಸ ಒದಗಿಸಿ ಕಾರ್ಮಿಕರಿಗೆ ವೇತನ ಪಾವತಿಯಲ್ಲಿ ವಿಳಂಬವಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶಿಸಿದರು.

ಕುಡಿಯುವ ನೀರು ಮತ್ತು ವೇತನಕ್ಕೆ ಸಂಬಂಧಿಸಿದ ದೂರುಗಳಿಗೆ ಮೊದಲ ಆದ್ಯತೆ ನೀಡಬೇಕು. ದೂರು ಸ್ವೀಕರಿಸಿದ 24 ಗಂಟೆಗಳೊಳಗೆ ಪರಿಹಾರ ಕಲ್ಪಿಸುವ ವ್ಯವಸ್ಥೆ ರೂಪಿಸಬೇಕು. ಕಾರ್ಮಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವುದರ ಜತೆಗೆ ಟ್ರ‍್ಯಾಕ್ಟರ್‌ಗಳಿಗೆ ಜಿಪಿಎಸ್ ಅಳವಡಿಕೆ ಸೇರಿದಂತೆ ಅಗತ್ಯ ಮೇಲ್ವಿಚಾರಣೆ ಕೈಗೊಳ್ಳಬೇಕು ಎಂದರು.

ಪ್ರತಿ 15 ದಿನಕ್ಕೊಮ್ಮೆ ಟಾಸ್ಕ್‌ ಫೋರ್ಸ್ ಸಭೆ: ಬರ ನಿರ್ವಹಣೆಯ ಪ್ರಗತಿ ಪರಿಶೀಲಿಸಲು ತಾಲೂಕು ಮಟ್ಟದಲ್ಲಿ ನಿಗದಿತ ದಿನಗಳಂದು ಸಭೆ ನಡೆಸಿ ಅಂದೇ ಸಭೆಯ ನಡೆಸಿ ವರದಿ ಸಲ್ಲಿಸಬೇಕು. ಪರಿಹಾರ ಕಾರ್ಯಗಳಲ್ಲಿ ವಿಳಂಬವಾಗದಂತೆ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದು ಸೂಚಿಸಿದರು.

ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗರಿಮಾ ಪನ್ವಾರ್ ಮಾತನಾಡಿ, ಜಿಲ್ಲೆಯಲ್ಲಿ ದುರಸ್ತಿಗೆ ಬಾಕಿ ಇರುವ ಆರ್‌ಒ ಘಟಕಗಳನ್ನು ಶೀಘ್ರ ಸರಿಪಡಿಸಬೇಕು. ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದ ಏಜೆನ್ಸಿಗಳಿಗೆ ನೋಟಿಸ್ ನೀಡಲಾಗಿದ್ದು, ಬಾಕಿ ದುರಸ್ತಿ ಕಾರ್ಯ ತ್ವರಿತವಾಗಿ ಪೂರ್ಣಗೊಳಿಸಬೇಕು. ಸಾರ್ವಜನಿಕರಿಗೆ ತೊಂದರೆಯಾಗದಂತೆ ಕ್ರಮ ವಹಿಸಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್, ಉಪವಿಭಾಗಾಧಿಕಾರಿ ವಿವೇಕಾನಂದ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮನೋಹರ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.