ಕನ್ನಡಪ್ರಭ ವಾರ್ತೆ ಬೆಳಗಾವಿಡಿಸೆಂಬರ್‌ನಲ್ಲಿ ಜರುಗಲಿರುವ ವಿಧಾನಮಂಡಳ ಚಳಿಗಾಲ ಅಧಿವೇಶನದ ಸಂದರ್ಭದಲ್ಲಿ ಯಾವುದೇ ಲೋಪದೋಷಗಳಿಗೆ ಆಸ್ಪದ ನೀಡದಂತೆ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ತಮ್ಮ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸಿ ಅಧಿವೇಶನವನ್ನು ಯಶಸ್ವಿಗೊಳಿಸಬೇಕು ಎಂದು ವಿಧಾನಸಭೆಯ ಸಭಾಧ್ಯಕ್ಷ ಜಿ.ಎಸ್.ಪಾಟೀಲ ಹಾಗೂ ವಿಧಾನ ಪರಿಷತ್ತಿನ ಸಭಾಪತಿ ಸಲೀಂ ಅಹ್ಮದ್ ಸೂಚಿಸಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಡಿಸೆಂಬರ್‌ನಲ್ಲಿ ಜರುಗಲಿರುವ ವಿಧಾನಮಂಡಳ ಚಳಿಗಾಲ ಅಧಿವೇಶನದ ಸಂದರ್ಭದಲ್ಲಿ ಯಾವುದೇ ಲೋಪದೋಷಗಳಿಗೆ ಆಸ್ಪದ ನೀಡದಂತೆ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ತಮ್ಮ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸಿ ಅಧಿವೇಶನವನ್ನು ಯಶಸ್ವಿಗೊಳಿಸಬೇಕು ಎಂದು ವಿಧಾನಸಭೆಯ ಸಭಾಧ್ಯಕ್ಷ ಜಿ.ಎಸ್.ಪಾಟೀಲ ಹಾಗೂ ವಿಧಾನ ಪರಿಷತ್ತಿನ ಸಭಾಪತಿ ಸಲೀಂ ಅಹ್ಮದ್ ಸೂಚಿಸಿದರು.

ಸುವರ್ಣ ವಿಧಾನಸೌಧದಲ್ಲಿ ಶನಿವಾರ ಜರುಗಿದ ಚಳಿಗಾಲದ ಅಧಿವೇಶನದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಡಿ.2 ರಿಂದ 11ರವರೆಗೆ ಜರುಗಲಿರುವ ಚಳಿಗಾಲದ ಅಧಿವೇಶನಕ್ಕೆ ನಿಯೋಜಿತ ಅಧಿಕಾರಿಗಳು ಹಾಗೂ ಸಿಬ್ಬಂದಿ ಬದ್ಧತೆಯಿಂದ ಕಾರ್ಯನಿರ್ವಹಿಸುವ ಮೂಲಕ ಅಧಿವೇಶನವನ್ನು ಯಶಸ್ವಿಗೊಳಿಸಬೇಕು. ಅಧಿವೇಶನದ ಸಂದರ್ಭದಲ್ಲಿ ಎದುರಾಗುವ ಯಾವುದೇ ರೀತಿಯ ಸಮಸ್ಯೆಗಳನ್ನು ಕೂಡಲೇ ಸಂಬಂಧಪಟ್ಟವರ ಗಮನಕ್ಕೆ ತಂದು ಪರಿಹರಿಸಿಕೊಳ್ಳಬೇಕು ಎಂದರು.

ಅಧಿವೇಶನಕ್ಕೆ ಸಂಬಂಧಿಸಿದಂತೆ ವಿತರಿಸಲಾಗುವ ಪಾಸ್‌ಗಳ ನಿರ್ವಹಣೆಯಲ್ಲಿ ಯಾವುದೇ ಗೊಂದಲಗಳಿಗೆ ಅವಕಾಶ ನೀಡಬಾರದು. ಪಾಸ್ ವಿತರಣೆಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯೊಂದಿಗೆ ಸಮನ್ವಯ ಸಾಧಿಸಬೇಕು. ಕಲಾಪಗಳ ವೀಕ್ಷಣೆಗೆ ಆಗಮಿಸುವ ಸಾರ್ವಜನಿಕರು ಹಾಗೂ ಶಾಲಾ ಮಕ್ಕಳಿಗೆ ಸೂಕ್ತ ಸಮಯವನ್ನು ನಿಗದಿಪಡಿಸಬೇಕು ಎಂದು ಸೂಚಿಸಿದರು.

ಅಧಿವೇಶನದ ಸಂದರ್ಭದಲ್ಲಿ ಸಚಿವರು ಶಾಸಕರು ತಂಗುವ ಸ್ಥಳ ಹಾಗೂ ಶಾಲಾ ಮಕ್ಕಳಿಗೆ ಯೋಗ ಹೇಳಿ ಕೊಡುವುದು, ಪುಸ್ತಕ ಮೇಳ ಹಾಗೂ ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ಸಂವಾದ ಆಯೋಜಿಸುವಂತೆ ಸಭಾಧ್ಯಕ್ಷ ಜಿ.ಎಸ್.ಪಾಟೀಲ ತಿಳಿಸಿದರು.

ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್ ಮಾತನಾಡಿ, ಅಧಿವೇಶನಕ್ಕೆ ಆಗಮಿಸುವ ಹಿರಿಯ ಸಚಿವರು ಹಾಗೂ ಶಾಸಕರಿಗೆ ಸೂಕ್ತ ವಸತಿ ವ್ಯವಸ್ಥೆ ಕಲ್ಪಿಸಬೇಕು. ಸಚಿವರು ಮತ್ತು ಶಾಸಕರು ತಂಗುವ ಹೋಟೆಲ್‌ಗಳಲ್ಲಿ ತಜ್ಞ ವೈದ್ಯರ ತಂಡವನ್ನು ನಿಯೋಜಿಸಬೇಕು. ಅದೇ ರೀತಿ ಸುವರ್ಣ ವಿಧಾನ ಸೌಧದಲ್ಲಿಯೂ ಸುಸಜ್ಜಿತ ಆ್ಯಂಬುಲೆನ್ಸ್‌ನೊಂದಿಗೆ ವೈದ್ಯರ ತಂಡವನ್ನು ನಿಯೋಜಿಸಬೇಕು ಎಂದು ಸೂಚಿಸಿದರು.

ಅಧಿವೇಶನ ಆರಂಭವಾಗುವ 2 ದಿನಗಳ ಮುಂಚಿತವಾಗಿ ಎಲ್ಲ ಗಣಕಯಂತ್ರಗಳು ಹಾಗೂ ಇಂಟರ್‌ನೆಟ್ ವ್ಯವಸ್ಥೆಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರುವುದನ್ನು ಖಾತರಿಪಡಿಸಿಕೊಳ್ಳಬೇಕು. ಜಿಲ್ಲಾಧಿಕಾರಿ, ಪೊಲೀಸ್ ಆಯುಕ್ತರು ಹಾಗೂ ವಿವಿಧ ಸಮಿತಿಗಳ ಮುಖ್ಯಸ್ಥರ ದೂರವಾಣಿ ಸಂಖ್ಯೆಗಳು ಮತ್ತು ಸುವರ್ಣ ವಿಧಾನಸೌಧದಲ್ಲಿನ ಸಚಿವರ ಕೊಠಡಿಗಳ ಮಾಹಿತಿಯನ್ನು ಒಳಗೊಂಡ ಕೈಪಿಡಿಯನ್ನು ಸಚಿವರು ಹಾಗೂ ಶಾಸಕರ ಆಪ್ತ ಸಹಾಯಕರಿಗೆ ತಲುಪಿಸಬೇಕು ಎಂದರು.

ಅಧಿವೇಶನಕ್ಕಾಗಿ ರಚಿಸಲಾಗಿರುವ ವಿವಿಧ ಸಮಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿ ತಮ್ಮ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುವ ಮೂಲಕ ಅಧಿವೇಶನವನ್ನು ಯಶಸ್ವಿಗೊಳಿಸಬೇಕು ಎಂದು ಸಭಾಪತಿ ಸಲೀಂ ಅಹ್ಮದ್ ತಿಳಿಸಿದರು.

ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಮಾತನಾಡಿ, ಚಳಿಗಾಲದ ಅಧಿವೇಶನಕ್ಕೆ ಸಂಬಂಧಿಸಿದಂತೆ ಕೈಗೊಂಡಿರುವ ಪೂರ್ವಸಿದ್ಧತೆಗಳ ಕುರಿತು ವಿವರಿಸಿದರು.

ಪ್ರಸಕ್ತ ಸಾಲಿನ ಬೆಳಗಾವಿ ಚಳಿಗಾಲದ ಅಧಿವೇಶನವನ್ನು ಯಶಸ್ವಿಗೊಳಿಸುವ ಉದ್ದೇಶದಿಂದ ಕಳೆದ ಸಾಲಿನಂತೆಯೇ ಈ ಬಾರಿಯೂ 12 ಸಮಿತಿಗಳನ್ನು ರಚಿಸಲಾಗಿದೆ. ಆಯಾ ಸಮಿತಿಗಳು ತಮ್ಮ ಜವಾಬ್ದಾರಿಗಳನ್ನು ಅರಿತು ಕಾರ್ಯನಿರ್ವಹಿಸುವಂತೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದರು.

ಅಧಿವೇಶನಕ್ಕೆ ಆಗಮಿಸುವ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವರು, ಸಂಪುಟ ದರ್ಜೆಯ ಸ್ಥಾನಮಾನ ಹೊಂದಿರುವ ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರು, ಶಾಸಕರು ಹಾಗೂ ಹಿರಿಯ ಅಧಿಕಾರಿಗಳಿಗೆ ಸೂಕ್ತ ವಸತಿ ಸೌಲಭ್ಯದೊಂದಿಗೆ ಊಟೋಪಹಾರ ಮತ್ತು ಸಾರಿಗೆ ವ್ಯವಸ್ಥೆ ಕಲ್ಪಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ವಿವರಿಸಿದರು.

ಸಭೆಯಲ್ಲಿ ವಿಧಾನಸಭೆಯ ಕಾರ್ಯದರ್ಶಿ ಆರ್.ವಿಶಾಲಾಕ್ಷಿ, ವಿಧಾನ ಪರಿಷತ್ತಿನ ಕಾರ್ಯದರ್ಶಿ ಜ್ಯೋತಿ, ಪೊಲೀಸ್ ಆಯುಕ್ತ ಪ್ರಕಾಶ್ ನಿಕ್ಕಂ, ಎಸ್ಪಿ ಕೆ.ರಾಮರಾಜನ್, ಜಿಪಂ ಸಿಇಒ ರಾಹುಲ್ ಶಿಂಧೆ, ಪ್ರಶಿಕ್ಷಣಾರ್ಥಿ ಐಎಎಸ್ ಅಧಿಕಾರಿ ರೋಹಿತ್ ಸಿಂಗ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಸಭಾಂಗಣ, ಮೊಗಸಾಲೆ ಪರಿಶೀಲನೆ:

ವಿಧಾನಸಭೆಯ ಸಭಾಧ್ಯಕ್ಷ ಜಿ.ಎಸ್.ಪಾಟೀಲ ಹಾಗೂ ವಿಧಾನ ಪರಿಷತ್ತಿನ ಸಭಾಪತಿ ಸಲೀಂ ಅಹ್ಮದ್ ಸಭೆಗೂ ಮುನ್ನ ವಿಧಾನಸಭೆ ಮತ್ತು ವಿಧಾನ ಪರಿಷತ್ತಿನ ಸಭಾಂಗಣಗಳು, ಮೊಗಸಾಲೆ, ಸೆಂಟ್ರಲ್ ಹಾಲ್, ಬ್ಯಾಂಕ್ವೆಟ್ ಹಾಲ್, ವಾಚನಾಲಯ ಸೇರಿದಂತೆ ಸುವರ್ಣ ವಿಧಾನಸೌಧದ ವಿವಿಧ ಸ್ಥಳಗಳನ್ನು ಜಂಟಿಯಾಗಿ ಪರಿಶೀಲಿಸಿದರು. ಧ್ವನಿ ವ್ಯವಸ್ಥೆ, ಸ್ವಚ್ಛತೆ ಸೇರಿದಂತೆ ಅಗತ್ಯ ಸಿದ್ಧತೆಗಳನ್ನು ಸಮರ್ಪಕವಾಗಿ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.