ಜಿಲ್ಲೆಯಲ್ಲಿ ಅಳವಡಿಸಿರುವ ಮಳೆ ಮಾಪಕ ಹಾಗೂ ಹವಾಮಾನ ಮಾಪನ ಕೇಂದ್ರಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರುವ ಕುರಿತು ನಿರಂತರವಾಗಿ ಪರಿಶೀಲಿಸಬೇಕು.

ಜಿಲ್ಲಾ ಮಟ್ಟದ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ

ಕನ್ನಡಪ್ರಭ ವಾರ್ತೆ ಕಾರವಾರ

ಜಿಲ್ಲೆಯಲ್ಲಿ ಅಳವಡಿಸಿರುವ ಮಳೆ ಮಾಪಕ ಹಾಗೂ ಹವಾಮಾನ ಮಾಪನ ಕೇಂದ್ರಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರುವ ಕುರಿತು ನಿರಂತರವಾಗಿ ಪರಿಶೀಲಿಸಬೇಕು. ಈ ಯಂತ್ರಗಳ ಕಾರ್ಯನಿರ್ವಹಣೆಯಲ್ಲಿ ದೋಷ ಕಂಡುಬಂದಲ್ಲಿ ತಕ್ಷಣವೇ ವರದಿ ಸಲ್ಲಿಸಿ, ಸಂಬಂಧಿಸಿದ ಏಜೆನ್ಸಿಗಳ ಮೂಲಕ ದುರಸ್ತಿ ಕಾರ್ಯ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಸೂಚಿಸಿದರು.

ಅವರು ಈಚೆಗೆ ಜಿಲ್ಲೆಯಲ್ಲಿನ ಟೆಲಿಮೆಟ್ರಿಕ್ ಮಳೆಮಾಪಕ ಹಾಗೂ ಹವಾಮಾನ ಮಾಪನ ಕೇಂದ್ರಗಳ ನಿರ್ವಹಣೆ ಮತ್ತು ಮೇಲ್ವಿಚಾರಣೆ ಕುರಿತು ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕಂದಾಯ ಇಲಾಖೆ (ವಿಪತ್ತು ನಿರ್ವಹಣೆ) ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ರಾಜ್ಯದಲ್ಲಿ ವಿಪತ್ತು ಮೇಲ್ವಿಚಾರಣೆಗೆ ರಾಜ್ಯ ಮಟ್ಟದ ನೋಡಲ್ ಸಂಸ್ಥೆಯಾಗಿದೆ. ಜಿಲ್ಲೆಯಲ್ಲಿ ತಾಲೂಕು, ಹೋಬಳಿ ಮಟ್ಟದಲ್ಲಿ 39 ಟೆಲಿಮೆಟ್ರಿಕ್ ಹವಾಮಾನ ಮಾಪನ ಕೇಂದ್ರಗಳು ಹಾಗೂ ಗ್ರಾಪಂ ವ್ಯಾಪ್ತಿಯಲ್ಲಿ 253 ಟೆಲಿಮೆಟ್ರಿಕ್ ಮಳೆಮಾಪಕ ಕೇಂದ್ರ ಸ್ಥಾಪಿಸಲಾಗಿದೆ. ಇವುಗಳಿಂದ ದೊರೆಯುವ ಮಳೆ, ತಾಪಮಾನ, ಆದ್ರ್ರದತೆ, ಗಾಳಿಯ ವೇಗ ಮತ್ತು ದಿಕ್ಕುಗಳಿಗೆ ಸಂಬಂಧಿಸಿದ ಮಾಹಿತಿಗಳು ಕೃಷಿ, ತೋಟಗಾರಿಕೆ, ಜಲಸಂಪನ್ಮೂಲ ಹಾಗೂ ವಿಪತ್ತು ನಿರ್ವಹಣೆಗೆ ಅತ್ಯಂತ ಅಗತ್ಯವಾಗಿದ್ದು, ಇವುಗಳನ್ನು ಜಿಲ್ಲಾ ಹಂತದಲ್ಲಿ ಕಟ್ಟುನಿಟ್ಟಾದ ಮೇಲ್ವಿಚಾರಣೆ ಕೈಗೊಳ್ಳುವಂತೆ ಸೂಚನೆ ನೀಡಿದರು.

ಟೆಲಿಮೆಟ್ರಿಕ್ ಮಳೆಮಾಪಕ ಹಾಗೂ ಹವಾಮಾನ ಮಾಪನ ಕೇಂದ್ರಗಳ ಮೇಲ್ವಿಚಾರಣೆಗೆ ಸಂಬಂಧಿಸಿದಂತೆ ತಹಸೀಲ್ದಾರರು, ಗ್ರಾಮ ಆಡಳಿತಾಧಿಕಾರಿಗಳು ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರು ತಮ್ಮ ಕರ್ತವ್ಯ ಮತ್ತು ಜವಾಬ್ದಾರಿಗಳನ್ನು ಸಂಪೂರ್ಣವಾಗಿ ಅರಿಯಬೇಕು. ಪ್ರತಿ ಗ್ರಾಮ ಆಡಳಿತಾಧಿಕಾರಿಗಳು ತಮ್ಮ ವ್ಯಾಪ್ತಿಯ ಟೆಲಿಮೆಟ್ರಿಕ್ ಮಳೆಮಾಪಕ ಕೇಂದ್ರಗಳ ದಿನನಿತ್ಯದ ಮೇಲ್ವಿಚಾರಣೆ ಮಾಡಲು ಜವಾಬ್ದಾರರಾಗಿದ್ದಾರೆ ಎಂದರು.

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರು ಪ್ರತಿವಾರ ಕನಿಷ್ಠ 10 ಟೆಲಿಮೆಟ್ರಿಕ್ ಮಳೆಮಾಪನ ಕೇಂದ್ರಗಳಿಗೆ ಭೇಟಿ ನೀಡಿ, ಅವುಗಳ ಕಾರ್ಯನಿರ್ವಹಣೆಯ ಸ್ಥಿತಿಗತಿಗಳನ್ನು ಪರಿಶೀಲಿಸಿ, ವರದಿ ಸಲ್ಲಿಸುವಂತೆ ಸೂಚಿಸಿದರು.

ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವಪ್ರಸಾದ್ ಗಾಂವಕರ್, ತೋಟಗಾರಿಕಾ ಇಲಾಖೆ ಉಪನಿರ್ದೇಶಕ ಸತೀಶ್ ಮತ್ತಿತರರು ಇದ್ದರು.